ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೀಡಿದ ರಾಜ್ಯವ್ಯಾಪಿ ಕರೆಗೆ ಶಿವಮೊಗ್ಗ ಜಿಲ್ಲಾ ಘಟಕದಿಂದ ಬಾಪೂಜಿ ನಗರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ಸರಿಯಾದ ರೀತಿಯ ತರಗತಿಗಳು ನಡೆಯುತ್ತಿಲ್ಲ. ರಾಜ್ಯದ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರಿಂದ ಅವಲಂಭಿತವಾಗಿರುವ ಕಾರಣ ಹಲವಾರು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದಾರ್ಥಿಗಳಿಗೆ ತೊಂದರೆಯಾಗಿದೆ. ಅತ್ಯಂತ ಹಿಂದುಳಿದ ಬಡ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದು, ಉಪನ್ಯಾಸಕರ ಕೊರತೆಯಿಂದ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗಿಂತ ಇವರು ಉತ್ತಮ ಅಂಕ ಪಡೆಯುವಲ್ಲಿ ವಿಫಲರಾಗುತ್ತಾರೆ. ಕೂಡಲೇ ಈ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ನೀಡಬೇಕೆಂದು ಎಬಿವಿಪಿ ಸರ್ಕಾರಕ್ಕೆ ಒತ್ತಾಯಿಸಿದೆ.
ಪ್ರತಿವರ್ಷ ನೇಮಕಾತಿ ಸಂದರ್ಭದಲ್ಲಿ ಈ ರೀತಿ ಗೊಂದಲವಾಗುತ್ತಿದ್ದು, ಶಾಶ್ವತ ಪರಿಹಾರ ಹುಡುಕಬೇಕು. ಖಾಲಿ ಇರುವ ಎಲ್ಲಾ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೇ ಕೂಡಲೇ ಮಾಡಬೇಕು. ಸರ್ಕಾರಿ ಕಾಲೇಜುಗಳ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಪ್ರಯೋಗಾಲಯ ಸಲಕರಣೆಗಳು, ಕಂಪ್ಯೂಟರ್ ಇನ್ನಿತರ ಅಗತ್ಯ ಸಲಕರಣೆಗಳನ್ನು ಒದಗಿಸಬೇಕೆಂದು ಎಬಿವಿಪಿ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ನಿರಂಜನ್ ಹೆಚ್.ಎಸ್., ಆಕಾಶ್, ಲೋಹಿತ್, ರಂಜನಿ, ಭಾವನ, ರವಿ, ಅಭಿ, ಆದಿತ್ಯ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post