ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಳಂಕದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ (B. Nagendra) ಅವರ ಪದಚ್ಯುತಿಗೆ ಆಗ್ರಹಿಸಿ ಆ.17ರಿಂದ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಬಿಜೆಪಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ ಎಂದು ಬಿಜೆಪಿಯ ಶಿವಮೊಗ್ಗ (Shivamogga) ವಿಭಾಗ ಪ್ರಭಾರಿ ಹಾಗೂ ಮಾಜಿ ಶಾಸಕ ಆರ್.ಕೆ. ಸಿದ್ರಾಮಣ್ಣ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಅವ್ಯವಹಾರ ಪ್ರಕರಣದಲ್ಲಿ ಬಿ.ನಾಗೇಂದ್ರ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದು ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ 187 ಕೋಟಿ ರೂ.ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿರುವ ಆರೋಪವಿದೆ. ನಿಗಮದ ಅಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ ಈ ಕುರಿತು ಉಲ್ಲೇಖಿಸಿದ್ದರು ಎಂದು ಸಿದ್ರಾಮಣ್ಣ ಆರೋಪಿಸಿದರು.
Also read>> ಆ.16ರಂದು ಸಂಸದ ಬಿ.ವೈ. ರಾಘವೇಂದ್ರ ಜನ್ಮದಿನ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಇನ್ನೂ ಸಿಕ್ಕಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಬಿ.ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದರ ಹಿಂದಿನ ಕಾರಣವೇನು ಎಂದು ಪ್ರಶ್ನಿಸಿದ ಅವರು, ವಾಲ್ಮೀಕಿ ಹಗರಣದ ವಿವರಗಳನ್ನು ಬಹಿರಂಗಪಡಿಸುವುದಾಗಿ ಹೇಳಿ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರೇ ಎಂಬ ಅನುಮಾನ ವ್ಯಕ್ತಪಡಿಸಿದರು. ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶದಿಂದಲೇ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಆರೋಪಿಸಿದರು.
ಇದೇ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ರಾಮಣ್ಣ, ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದನ್ನು ಟೀಕಿಸಿದರು. ರಾಜಕೀಯದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಸಚಿವ ಸಂಪುಟದಲ್ಲಿ ಯಾವುದೇ ಮಹಿಳೆಗೆ ಸ್ಥಾನ ನೀಡದಿರುವುದು ಕಾಂಗ್ರೆಸ್‌ನ ಮಹಿಳಾ ವಿರೋಧಿ ನಿಲುವನ್ನು ತೋರಿಸುತ್ತದೆ ಎಂದು ವ್ಯಂಗ್ಯವಾಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಹರಿಕೃಷ್ಣ, ಮೋಹನ ರೆಡ್ಡಿ, ಸುರೇಖಾ ಮುರಳೀಧರ, ಹರೀಶ್, ಚಂದ್ರಶೇಖರ್, ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







