ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಶಿವಮೊಗ್ಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ನಗರದ ಸರ್ವಾಂಗೀಣ ವಿಕಾಸಕ್ಕೆ ಅಗತ್ಯ ಕ್ರಮ ಕೈಗೊಂಡು ರಾಜ್ಯದ ಮಾದರಿ ನಗರಗಳಲ್ಲೊಂದನ್ನಾಗಿ ರೂಪಿಸಲಾಗುವುದು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಅವರು ಹೇಳಿದರು.
ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಗೊಳಪಡುವ ಎಲ್ಲಾ ವಾರ್ಡುಗಳಲ್ಲಿ ಕೈಗೊಂಡಿರುವ ರಸ್ತೆ, ಚರಂಡಿ, ಉದ್ಯಾನವನ ಹಾಗೂ ಇತರೆ ಕಾಮಗಾರಿಗಳನ್ನು ಸಚಿವ ಕೆ.ಎಸ್.ಈಶ್ವರಪ್ಪ, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲಿಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು.
ಶಿವಮೊಗ್ಗ ಮಲೆನಾಡಿನ ಪ್ರದೇಶವಾಗಿರುವುದರಿಂದ ಮಳೆಗಾಲ ಆರಂಭವಾಗಿ ಯೋಜನೆಗಳಿಗೆ ಅಡಚಣೆ ಉಂಟಾಗಬಹುದಾದ ಹಿನ್ನೆಲೆಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಕೈಗೊಂಡಿರುವ ಅನೇಕ ಕಾಮಗಾರಿಗಳು ಪೂರ್ಣಗೊಂಡಿವೆ. ಇನ್ನೂ ಕೆಲವು ಕಾಮಗಾರಿಗಳು ಕೋವಿಡ್ ಹಿನ್ನೆಲೆಯಲ್ಲಿ ಮಂದಗತಿಯಲ್ಲಿ ಸಾಗಿವೆ. ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಸುಮಾರು 150ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಗರದ ಬಹುಜನರ ಬೇಡಿಕೆಯಂತೆ ಗಾಂಧೀ ಪಾರ್ಕ್‌ನ ಪ್ರವೇಶದ್ವಾರದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು ಎಂದರು.
ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಶಿಕಾರಿಪುರ ಪಟ್ಟಣದ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಸಲ್ಲಿಸಲಾಗಿದ್ದ 13ಕೋಟಿ ರೂ.ಗಳ ಕಾಮಗಾರಿಗಳ ಪ್ರಸ್ತಾವನೆಗೆ ಮಾನ್ಯ ಮುಖ್ಯ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗ್ರಾಮೀಣಾಭಿವೃದ್ದಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ಇರುವ ಅಡತಡೆಗಳನ್ನು ಸರಿಪಡಿಸಿ, ಪುತ್ಥಳಿ ಅನಾವರಣಗೊಳಿಸಲಾಗುವುದು. ಈ ಸಂಬಂಧ ಪ್ರಸಕ್ತ ಅಧಿವೇಶನದಲ್ಲಿ ಅನುಮೋದನೆ ಪಡೆದು ಕ್ರಮವಹಿಸಲಾಗುವುದು ಎಂದರು.
ನಗರರಾಭಿವೃದ್ಧಿ ಇಲಾಖೆಯಿಂದ ಈ ಹಿಂದೆ ನಾಲ್ಕು ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನ ಬಿಡುಗಡೆಯಾಗಿದ್ದು, ಯೋಗಭವನ ಶೀಘ್ರದಲ್ಲಿ ಪೂರ್ಣಗೊಂಡು ಉದ್ಘಾಟನೆಗೊಳ್ಳಲಿದೆ. ಅಲ್ಲದೇ 2.25ಕೋಟಿ ರೂ.ಗಳ ವೆಚ್ಚದಲ್ಲಿ ನಗರದ 15ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ತುಂಗಾ ಮೇಲ್ದಂಡೆ ಯೋಜನೆಯಡಿ ಚಾನಲ್‌ನ ಇಕ್ಕೆಲಗಳಲ್ಲಿ ಸುಮಾರು 12ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ 12.50ಕೋಟಿ ರೂ.ಗಳ ವೆಚ್ಚದಲ್ಲಿ ಹಸಿರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ನಗರದ ಹೊರ ವಲಯದಲ್ಲಿ ವಿವಿಧ ಕಾಮಗಾರಿಗಳಿಗೆ 96ಕೋಟಿ ರೂ.ಗಳ ಅನುದಾನವನ್ನು ನಗರಾಭಿವೃದ್ಧಿ ಸಚಿವರು ಬಿಡುಗಡೆಗೊಳಿಸಿದ್ದಾರೆ. ಅಲ್ಲದೇ ಈ ಹಿಂದೆ ಮಂಜೂರು ಮಾಡಲಾಗಿದ್ದ 123ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ಎರಡನೇ ಹಂತದಲ್ಲಿ ಹೊರ ವಲಯದ ಕುಡಿಯುವ ನೀರಿನ ಯೋಜನೆಗೆ ಅನುದಾನ ಬಿಡುಗಡೆಗೊಳಿಸಿದ್ದು, ಅನುಮೋದನೆ ದೊರೆತಿದೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿವೆ ಎಂದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಚನ್ನಬಸಪ್ಪ ಸೇರಿದಂತೆ ನಗರಪಾಲಿಕೆಯ ಅಧಿಕಾರಿ ಸಿಬ್ಬಂಧಿಗಳು, ಗುತ್ತಿಗೆದಾರರು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post