ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಸ್ಥಿರಗೊಳಿಸಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ ಎಂದು ಆರೋಪಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ (BJP) ನಾಯಕರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಶಿವಮೊಗ್ಗ (Shivamogga) ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ನಡೆದ ಬೃಹತ್ ಪಾದಯಾತ್ರೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಾವಿರಾರು ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು. ಪಾದಯಾತ್ರೆಯು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಂಡಿತು.
ರಾಹುಲ್ ಗಾಂಧಿ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
ಪ್ರತಿಭಟನೆಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆ ಮೊಳಗಿತ್ತು. ಆದರೆ ಇಂದು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿದೇಶಗಳಿಗೆ ತೆರಳಿ ಭಾರತವನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಪ್ರತಿಪಕ್ಷ ನಾಯಕನ ಸ್ಥಾನವು ಪ್ರಧಾನಿಯ ಸ್ಥಾನಕ್ಕೆ ಸಮಾನವಾದ ಗೌರವ ಹೊಂದಿದೆ. ಆದರೆ ರಾಹುಲ್ ಗಾಂಧಿ ಆ ಸ್ಥಾನದ ಘನತೆಯನ್ನು ಕಾಪಾಡಿಕೊಳ್ಳುತ್ತಿಲ್ಲ. ಪ್ರತಿಪಕ್ಷದ ನಾಯಕರು ಗಂಭೀರವಾಗಿ ನಡೆದುಕೊಳ್ಳಬೇಕು. ಆದರೆ ಅವರು ಸಂಸತ್ತಿನಲ್ಲಿ ಒಂದೇ ಒಂದು ದಿನವೂ ಗಂಭೀರ ಚರ್ಚೆ ನಡೆಸಿಲ್ಲ. ಕಣ್ಸನ್ನೆ ಮಾಡುವುದು ಹಾಗೂ ಪ್ರಧಾನಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದೇ ಅವರ ಕೆಲಸವಾಗಿದೆ ಎಂದು ಆರೋಪಿಸಿದರು.
ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಿದಾಗ ದೇಶದ ಸಮಸ್ಯೆಗಳ ಬಗ್ಗೆ ಚರ್ಚಿಸುವ ಬದಲು ತಮ್ಮ ಅಜ್ಜಿಯನ್ನು ಹೊಗಳುತ್ತಾರೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
Shivamogga: ಇವಿಎಂ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನೀತಿ
ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಇವಿಎಂ ಕುರಿತು ಕಾಂಗ್ರೆಸ್ ಮಾಡುತ್ತಿರುವ ಆರೋಪಗಳ ಬಗ್ಗೆಯೂ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.
ಇಷ್ಟು ವರ್ಷ ಚುನಾವಣಾ ಆಯೋಗದ ಆಯುಕ್ತರನ್ನು ಯಾರೂ ಪ್ರಶ್ನಿಸಿರಲಿಲ್ಲ. ಆದರೆ ಈಗ ಚುನಾವಣಾ ವ್ಯವಸ್ಥೆಯ ಬಗ್ಗೆ ಅನುಮಾನ ವ್ಯಕ್ತಪಡಿಸುವ ಮೂಲಕ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ. ಕೇರಳ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿಯಾಗಿರುತ್ತದೆ. ಆದರೆ ಬಿಜೆಪಿ ಗೆದ್ದಾಗ ಮಾತ್ರ ಇವಿಎಂ ಸರಿಯಿಲ್ಲ ಎಂಬ ಆರೋಪ ಮಾಡಲಾಗುತ್ತದೆ. ಇದು ಕಾಂಗ್ರೆಸ್‌ನ ದ್ವಂದ್ವ ನಿಲುವನ್ನು ತೋರಿಸುತ್ತದೆ ಎಂದು ಟೀಕಿಸಿದರು.
ದೇಶದ ಸ್ವಾತಂತ್ರ್ಯವನ್ನು ರಕ್ಷಿಸಲು 140 ಕೋಟಿ ಜನರಿದ್ದಾರೆ. ದೇಶದ ಸ್ವಾತಂತ್ರ್ಯಕ್ಕೆ ಧಕ್ಕೆಯಾದರೆ ನೀವು ಇಟಲಿಗೆ ಹೋಗಬಹುದು. ಆದರೆ ನಾವು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಬ್ಯಾಲೆಟ್ ಮೂಲಕ ಮತದಾನ ನಡೆದರೂ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುವುದಿಲ್ಲ. ಹಾಗಾದರೆ ಕಾಂಗ್ರೆಸ್ ಗೆಲ್ಲುವುದು ಎಲ್ಲಿ? ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರಲಿದ್ದಾರೆ. ದೇಶದಲ್ಲಿನ ಅರಾಜಕತೆಯನ್ನು ಹೋಗಲಾಡಿಸಲು ಮತ್ತೊಮ್ಮೆ ಮೋದಿಯವರನ್ನು ಅಧಿಕಾರಕ್ಕೆ ತರಬೇಕಿದೆ. ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟ ಎಂದರೆ ಅರಾಜಕತೆ ಎಂದು ಆರೋಪಿಸಿದರು.
ಎಸ್‌ಐಆರ್ ನೆಪದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ: ಸಿ.ಟಿ. ರವಿ
ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಕಾಂಗ್ರೆಸ್ ನಾಯಕರು ಹತಾಶರಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡಿದ್ದರು. ಈಗ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡಿದ್ದಾರೆ. ಮೋದಿ ಅವರು ಯಾರ ಮುಲಾಜಿನಿಂದಲೂ ಪ್ರಧಾನಿಯಾಗಿಲ್ಲ. ಜನರ ಅಭಿಲಾಷೆಯಂತೆ ಪ್ರಧಾನಿಯಾಗಿದ್ದಾರೆ ಎಂದರು.
ಹಿಂದೆ ಕಾಂಗ್ರೆಸ್‌ಗೆ ಕೇವಲ 42 ಸ್ಥಾನಗಳು ಲಭಿಸಿದ್ದರಿಂದ ಅಧಿಕೃತ ಪ್ರತಿಪಕ್ಷದ ಸ್ಥಾನವೂ ಸಿಕ್ಕಿರಲಿಲ್ಲ. ಈಗ ಎಸ್‌ಐಆರ್ ನೆಪದಲ್ಲಿ ಅರಾಜಕತೆ ಸೃಷ್ಟಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದ್ದರೆ, ಅದನ್ನು ಪರಿಶೀಲಿಸಿದ 58 ಸಾವಿರ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸವಾಲು ಹಾಕಿದರು. ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದವರು ಕೇಂದ್ರ ಸರ್ಕಾರಿ ನೌಕರರಲ್ಲ ಎಂದು ಹೇಳಿದರು.
ಪ್ರಿಯಾಂಕ್ ಖರ್ಗೆ ವಿರುದ್ಧವೂ ಟೀಕಾಪ್ರಹಾರ ನಡೆಸಿದ ಸಿ.ಟಿ. ರವಿ, ಅಧಿಕಾರದ ಉಪ್ಪರಿಗೆ ಮೇಲೆ ಕುಳಿತವರು ಒಂದು ದಿನ ಕೆಳಗೆ ಬರಲೇಬೇಕು. ಇವಿಎಂ ಮೇಲೆ ನಂಬಿಕೆ ಇಲ್ಲದಿದ್ದರೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿ ಚುನಾವಣೆಯನ್ನು ಎದುರಿಸಲಿ. ಮೊದಲು ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಕೊಡಿಸಿ, ಬಳಿಕ ಅಳಿಯನ ರಾಜೀನಾಮೆ ಕೊಡಿಸಿ, ನಂತರ ಉಳಿದವರ ರಾಜೀನಾಮೆ ಕೊಡಿಸಲಿ ಎಂದು ಸವಾಲು ಹಾಕಿದರು.
ಬೆಲೆ ಏರಿಕೆಯೇ ಕಾಂಗ್ರೆಸ್ ಅಜೆಂಡಾ: ಬಿ.ವೈ. ರಾಘವೇಂದ್ರ
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಸಂಸತ್ತಿನಲ್ಲಿ ಮಾತನಾಡಲು ಅವಕಾಶವಿದ್ದರೂ ಅಲ್ಲಿ ಮಾತನಾಡದೆ ವಿದೇಶಗಳಲ್ಲಿ ಭಾರತದ ವಿರುದ್ಧ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ವಿದೇಶಿ ಸುಳಿಯಲ್ಲಿ ಸಿಲುಕಿದ್ದಾರೆ ಹೊರತು ಪ್ರಧಾನಿ ಮೋದಿ ಅಲ್ಲ ಎಂದು ಟೀಕಿಸಿದರು.
ಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ಭರವಸೆಗಳನ್ನು ನೀಡಿರುವ ಕಾಂಗ್ರೆಸ್ ಸರ್ಕಾರ, ದೀಪಾವಳಿ ಬಳಿಕ ವಿದ್ಯುತ್ ಬಿಲ್‌ಗಳನ್ನೂ ಹೆಚ್ಚಿಸಲಿದೆ. ಇದು ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿಯಾಗಲಿದೆ. ಬೆಲೆ ಏರಿಕೆಯೇ ಕಾಂಗ್ರೆಸ್‌ನ ಅಜೆಂಡೆಯಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಹರತಾಳು ಹಾಲಪ್ಪ, ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಭಾರತಿ ಶೆಟ್ಟಿ, ಎನ್.ಕೆ. ಜಗದೀಶ್, ಅಶೋಕ್ ನಾಯ್ಕ್, ಬೆಳ್ಳಿ ಪ್ರಕಾಶ್, ಕುಮಾರಸ್ವಾಮಿ, ಮೋಹನ್ ರೆಡ್ಡಿ, ಬಳ್ಳೆಕೆರೆ ಸಂತೋಷ್, ಹರಿಕೃಷ್ಣ, ಹೆಚ್.ಎನ್. ಮಂಜುನಾಥ್, ಯಶೋದಾ ವೈಷ್ಣವ್, ಜ್ಞಾನೇಶ್ವರ್, ಮಾಲತೇಶ್, ಶಿವರಾಜ್, ರಶ್ಮಿ ಶ್ರೀನಿವಾಸ್, ದೇವರಾಜ್ ಶೆಟ್ಟಿ, ಮಂಜುನಾಥ್ ಎನ್. ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








