ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಇ-ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಸತತವಾಗಿ ಬರುತ್ತಿರುವ ಬೆದರಿಕೆ ಸಂದೇಶಗಳ ಹಿನ್ನೆಲೆಯಲ್ಲಿ ನ್ಯಾಯಾಲಯದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಮುಂದುವರಿದಿದೆ.
ಕಳೆದ ವಾರ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ವ್ಯಕ್ತಿಯಿಂದ ನ್ಯಾಯಾಲಯದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಇ-ಮೇಲ್ ಬಂದಿತ್ತು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ನ್ಯಾಯಾಲಯದ ಆವರಣದಲ್ಲಿ ಸಮಗ್ರ ತಪಾಸಣೆ ನಡೆಸಲಾಗಿತ್ತು. ಬಳಿಕ ಅದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿತ್ತು.
ಆದರೆ, ಜೂನ್ 27 ಮತ್ತು ಜೂನ್ 29ರಂದು ಮತ್ತೆ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ಪ್ರತ್ಯೇಕವಾಗಿ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿವೆ. ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Also read: ಕೊಯಮತ್ತೂರು ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಸಚಿವ ಸೋಮಣ್ಣ ಹಸಿರು ನಿಶಾನೆ
ಸತತ ಬೆದರಿಕೆ ಸಂದೇಶಗಳ ಹಿನ್ನೆಲೆಯಲ್ಲಿ ಕಳೆದ ಆರು ದಿನಗಳಿಂದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನ್ಯಾಯಾಲಯದ ಎಲ್ಲಾ ಪ್ರವೇಶ ದ್ವಾರಗಳಲ್ಲಿ ತಪಾಸಣೆ ಕಡ್ಡಾಯಗೊಳಿಸಲಾಗಿದ್ದು, ಸಾರ್ವಜನಿಕರು, ವಕೀಲರು ಹಾಗೂ ಸಿಬ್ಬಂದಿಯನ್ನು ಪರಿಶೀಲಿಸಿದ ಬಳಿಕವೇ ಒಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.
ಮಂಗಳವಾರವೂ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ನ್ಯಾಯಾಲಯದ ಒಳ ಹಾಗೂ ಹೊರ ಆವರಣದಲ್ಲಿ ತಪಾಸಣೆ ನಡೆಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ.
ರಾಜ್ಯದ ಹಲವು ಜಿಲ್ಲೆಗಳ ನ್ಯಾಯಾಲಯಗಳಿಗೂ ಇದೇ ರೀತಿಯ ಹುಸಿ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಿದೆ. ಬೆದರಿಕೆ ಸಂದೇಶಗಳನ್ನು ಕಳುಹಿಸಿರುವ ಆರೋಪಿಯ ಪತ್ತೆಗೆ ಪೊಲೀಸರು ತಾಂತ್ರಿಕ ತನಿಖೆ ತೀವ್ರಗೊಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







