ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ವ್ಯಾಪ್ತಿಯಲ್ಲಿ ಅರ್ಹ ಬಡ ಕುಟುಂಬಗಳ ಬಿಪಿಎಲ್ (BPL) ಪಡಿತರ ಚೀಟಿಗಳನ್ನು ಏಕಾಏಕಿ ರದ್ದುಗೊಳಿಸಿರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿರುವ ಘಟನೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೇಷನ್ ಕಾರ್ಡ್ ರದ್ದತಿಯಿಂದ ತೊಂದರೆಗೊಳಗಾದ ನೂರಾರು ನಾಗರಿಕರು ಶಾಸಕರ ಕಚೇರಿಗೆ ಭೇಟಿ ನೀಡಿ ಅಹವಾಲು ಸಲ್ಲಿಸಿದ ಹಿನ್ನೆಲೆಯಲ್ಲಿ, ಶಾಸಕ ಚನ್ನಬಸಪ್ಪ ಅವರು ತಮ್ಮ ಕಾರ್ಯಾಲಯದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ತುರ್ತು ಸಭೆ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾವುದೇ ತಪ್ಪಿಲ್ಲದಿದ್ದರೂ ಅರ್ಹ ಬಡವರ ಪಡಿತರ ಚೀಟಿಗಳನ್ನು ರದ್ದುಪಡಿಸಿರುವುದು ಅತ್ಯಂತ ಬೇಜವಾಬ್ದಾರಿತನದ ಕ್ರಮವಾಗಿದೆ ಎಂದು ಹೇಳಿದರು. ನಿಯಮಾವಳಿಗಳ ಹೆಸರಿನಲ್ಲಿ ನೈಜ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
Also read: SWR | Celebrates International Yoga Day with Enthusiastic Participation
ನಗರದಲ್ಲಿ ರದ್ದಾಗಿರುವ ಬಿಪಿಎಲ್ ಕಾರ್ಡ್‌ಗಳ ಕುರಿತು ಸಮಗ್ರ ಮರುಪರಿಶೀಲನೆ ನಡೆಸಿ, ಅರ್ಹ ಕುಟುಂಬಗಳಿಗೆ ತಕ್ಷಣವೇ ಪಡಿತರ ಚೀಟಿಗಳನ್ನು ಮರುಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಕೈಗೊಂಡ ಕ್ರಮಗಳ ಸವಿಸ್ತಾರ ವರದಿಯನ್ನು ಶೀಘ್ರದಲ್ಲೇ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಕ್ರಮಗಳ ಮೂಲಕ ಬಡವರ ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿರಬೇಕು ಎಂದು ಶಾಸಕ ಚನ್ನಬಸಪ್ಪ ಅವರು ಒತ್ತಿ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















