ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ (Shivamogga) ನಗರದ ಬೈಪಾಸ್ ರಸ್ತೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್ಪಾತ್ ಹಾಗೂ ರಸ್ತೆ ಬದಿಯ ಅಕ್ರಮ ಒತ್ತುವರಿಯನ್ನು ಟ್ರಾಫಿಕ್ ಪೊಲೀಸರು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್ ಅವರ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ಅಂಗಡಿಗಳು, ವ್ಯಾಪಾರ ಸಾಮಗ್ರಿಗಳು ಹಾಗೂ ಇತರೆ ವಸ್ತುಗಳನ್ನು ತೆರವುಗೊಳಿಸಲಾಯಿತು. ಬೈಪಾಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಇದರ ಜೊತೆಗೆ ರಸ್ತೆ ಬದಿ ಮತ್ತು ಫುಟ್ಪಾತ್ಗಳ ಒತ್ತುವರಿಯಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದರು.
ವಿಶೇಷವಾಗಿ ರಸ್ತೆ ಬದಿಯಲ್ಲೇ ವ್ಯಾಪಾರ ಸಾಮಗ್ರಿಗಳನ್ನು ಇಟ್ಟುಕೊಳ್ಳುವುದು, ಅನಧಿಕೃತವಾಗಿ ಅಂಗಡಿಗಳನ್ನು ಸ್ಥಾಪಿಸುವುದು ಹಾಗೂ ಫುಟ್ಪಾತ್ಗಳನ್ನು ಆಕ್ರಮಿಸಿಕೊಳ್ಳುವುದರಿಂದ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸುವ ಅನಿವಾರ್ಯತೆ ಎದುರಾಗಿತ್ತು. ಇದರಿಂದ ವಾಹನಗಳ ಸುಗಮ ಸಂಚಾರಕ್ಕೂ ಅಡ್ಡಿಯಾಗುತ್ತಿತ್ತು. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಟ್ರಾಫಿಕ್ ಪೊಲೀಸರು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದರು.
Shivamogga: ಸಂಚಾರ ವ್ಯವಸ್ಥೆ ಸುಧಾರಣೆಗೆ ನಿರಂತರ ಕ್ರಮ
ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ರಸ್ತೆ ಬದಿ ಒತ್ತುವರಿ ತೆರವು, ವಾಹನಗಳ ಸುಗಮ ಸಂಚಾರಕ್ಕೆ ಆದ್ಯತೆ ಹಾಗೂ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ವಿಶೇಷ ಗಮನ ಹರಿಸುತ್ತಿದ್ದಾರೆ.
ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಯಾಗುವ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೈಗೊಳ್ಳುತ್ತಿರುವ ಕ್ರಮಗಳಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
Also Read>> ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಬೆಳಗಾವಿ–ಬೆಂಗಳೂರು–ಹುಬ್ಬಳ್ಳಿ ವಿಶೇಷ ರೈಲು
ಫುಟ್ಪಾತ್ ಸಾರ್ವಜನಿಕರಿಗಾಗಿ: ಪೊಲೀಸರ ಎಚ್ಚರಿಕೆ
ರಸ್ತೆಗಳು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಇರುವುದೇ ಹೊರತು ಖಾಸಗಿ ಒತ್ತುವರಿಗಾಗಿ ಅಲ್ಲ. ಫುಟ್ಪಾತ್ಗಳು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಮೀಸಲಾಗಿದ್ದು, ಅವುಗಳನ್ನು ವ್ಯಾಪಾರ ಅಥವಾ ಇತರೆ ಖಾಸಗಿ ಉದ್ದೇಶಗಳಿಗೆ ಬಳಸಬಾರದು ಎಂದು ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ರಸ್ತೆ ಹಾಗೂ ಫುಟ್ಪಾತ್ಗಳನ್ನು ಒತ್ತುವರಿ ಮಾಡಿಕೊಳ್ಳದೆ ಸಾರ್ವಜನಿಕ ಸಂಚಾರಕ್ಕೆ ಸಹಕರಿಸಬೇಕು. ವಾಹನ ಸವಾರರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









