ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಗುರುತಿಸುವ ನಿಟ್ಟಿನಲ್ಲಿ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಬಾಲಕಾರ್ಮಿಕರನ್ನು ಪತ್ತೆ ಹಚ್ಚುವ ಸಮೀಕ್ಷೆ ಕಾರ್ಯದಲ್ಲಿ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರೇತರ ಸಂಘಸಂಸ್ಥೆಗಳು, ಎಲ್ಲಾ ಅನುಷ್ಟಾನ ಇಲಾಖೆಗಳ ಸಹಕಾರವನ್ನು ಪಡೆದುಕೊಳ್ಳಬೇಕು. ಎಲ್ಲಾ ಇಲಾಖೆಗಳು ಸಮೀಕ್ಷೆ ಕಾರ್ಯಕ್ಕೆ ಸಹಕಾರ ನೀಡಬೇಕು. ಸಮೀಕ್ಷೆ ಕಾರ್ಯವನ್ನು ಕೈಗೊಳ್ಳುವವರಿಗೆ ಸೂಕ್ತ ತರಬೇತಿ ಕಾರ್ಯಾಗಾರವನ್ನು ಆಯೋಜಿಸುವಂತೆ ಅವರು ಸೂಚನೆ ನೀಡಿದರು.
ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಬಾಲಕಾರ್ಮಿಕರ ಬಗ್ಗೆ ತಪಾಸಣಾ ಕಾರ್ಯವನ್ನು ಹೆಚ್ಚಿಸಲಾಗಿದ್ದು, ಒಟ್ಟು 483 ತಪಾಸಣೆ ನಡೆಸಲಾಗಿದ್ದು, ಒಂದು ಬಾಲಕಾರ್ಮಿಕ ಪ್ರಕರಣ ಪತ್ತೆ ಹಚ್ಚಿ ಪ್ರಕರಣ ದಾಖಲಿಸಲಾಗಿದೆ. ಪ್ರಸ್ತುತ ಸಾಲಿನಲ್ಲಿ ಇದುವರೆಗೆ 52 ತಪಾಸಣೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 2016ರಿಂದ ಇದುವರೆಗೆ ಒಟ್ಟು 21 ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ಪುನರ್ವಸತಿ ಕಲ್ಪಿಸಲಾಗಿದೆ. ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ವಲಯವನ್ನಾಗಿ ಮಾಡುವ ನಿಟ್ಟಿನಲ್ಲಿ ಅರಿವು ಮೂಡಿಸಲಾಗುತ್ತಿದೆ. ಪ್ರತಿ ವಾರ್ಡ್, ಗ್ರಾಮ ಪಂಚಾಯತ್‍ವಾರು ಸದಸ್ಯರು ಮತ್ತು ಸ್ಥಳೀಯ ಸಂಸ್ಥೆ, ಉದ್ಯಮ ಮಾಲಿಕರಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಮುಚ್ಚಳಿಕೆ ಪಡೆಯಲಾಗುತ್ತಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ ಅವರು ತಿಳಿಸಿದರು.
ಬಾಲಕಾರ್ಮಿಕ ಪದ್ಧತಿ ಕಾಯ್ದೆ ಪ್ರಕಾರ 14 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ದಿಮೆ/ಕೈಗಾರಿಕೆಗಳು ಮಾತ್ರವಲ್ಲದೆ ಅಪಾಯಕಾರಿ ಅಲ್ಲದ ಉದ್ದಿಮೆ/ಕೈಗಾರಿಕೆಗಳಲ್ಲಿ ಕೆಲಸ ಮಾಡುವಂತಿಲ್ಲ. ಅಂತಹ ಮಕ್ಕಳನ್ನು ಕೆಲಸದ ಸ್ಥಳದಿಂದ ಮುಕ್ತಗೊಳಿಸಿ ವಿದ್ಯಾಭ್ಯಾಸ, ಆರೋಗ್ಯ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಿ ಮುಖ್ಯವಾಹಿನಿಗೆ ತರುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಘುನಾಥ್ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಶಿವಮೊಗ್ಗ ಉಪವಿಭಾಗ ಆಯುಕ್ತ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















