ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಸುರೇಶ್ ಕುಮಾರ್ ಎನ್ನುವವರು ಹನುಮಂತಪುರದ ಅಡಿಕೆ ತೋಟವೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣ ಕುರಿತಂತೆ ಜಿಲ್ಲಾ ರಕ್ಷಣಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.
ಏನಿದು ಘಟನೆ?
ಶಿವಮೊಗ್ಗದ ಅಕ್ಷರ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುರೇಶ್ ಅವರು ಮದುವೆ ಸಮಾರಂಭವೊಂದಕ್ಕೆ ಹೋಗಿ ಬರುವುದಾಗಿ ತಿಳಿಸಿ ಶನಿವಾರ ಮನೆಯಿಂದ ಹೊರಟಿದ್ದರು. ಆದರೆ, ಇಂದು ಮುಂಜಾನೆ ಅವರದ್ದೇ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್, ಸುರೇಶ್ ಅವರು ಅವರದ್ದೇ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳ ತಲುಪಿದಾಗ ಶವದ ಸುತ್ತ ಬೆಂಕಿ ಉರಿಯುತ್ತಿತ್ತು. ಈ ಪ್ರಕರಣನ್ನು ಪ್ರಾಥಮಿಕವಾಗಿ ಕೊಲೆ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಮೃತ ಸುರೇಶ್ ಅವರ ದ್ವಿಚಕ್ರ ವಾಹನ ಮತ್ತು ಬ್ಯಾಗ್ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದು ಕೊಲೆ ಎಂಬ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸುರೇಶ್ ಅವರ ಮೊಬೈಲ್ ಫೋನ್ ಸ್ಥಳದಲ್ಲಿ ಸಿಕ್ಕಿದೆ. ಅದನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.
ಇನ್ನು, ಪ್ರಮುಖಗಾವಿ ಮೃತ ಸುರೇಶ್ ಕುಟುಂಬಸ್ಥರು ಯಾರ ವಿರುದ್ಧವೂ ಸಹ ಅನುಮಾನ ವ್ಯಕ್ತಪಡಿಸಿಲ್ಲ. ಆದರೂ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ತನಿಖೆಗೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















