ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಮುಂದುವರೆಸುವಂತೆ ಆಗ್ರಹಿಸಿ ಅರ್ಯವ್ಯೆಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ. ಎಸ್. ಅರುಣ್ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮವನ್ನು 2014ರಿಂದ ಜಾರಿಗೊಳಿಸಲಾಗಿರುತ್ತದೆ. ಇದು ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು, ಈ ಯೋಜನೆಯಡಿಯಲ್ಲಿ ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ನೀಡಲು ಅವಕಾಶವಿರುತ್ತದೆ. ರಾಜ್ಯ ಸರ್ಕಾರವು ಇದರಲ್ಲಿ ಸಾಮಾನ್ಯ ವರ್ಗಕ್ಕೆ ಸೇರಿರುವ ಆರ್ಥಿಕವಾಗಿ ಹಿಂದುಳಿದ ಇತರೆ ಸಮುದಾಯದವರಿಗೆ ಶೇ. 5ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿದ್ದು, ಪ್ರಸ್ತುತ ಈ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳು ಸದರಿ ಯೋಜನೆಯಿಂದ ವಂಚಿತರಾಗಿರುತ್ತಾರೆ ಎಂದು ವಿವರಿಸಿದರು.
ಈ ಸಂಬಂಧ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಅನೇಕ ವಿದ್ಯಾರ್ಥಿಗಳು ನಿಗಮಕ್ಕೆ ದೂರುಗಳನ್ನು ಸಲ್ಲಿಸಿದ್ದರೂ, ಯಾವುದೇ ರೀತಿಯ ಶುಲ್ಕ ಮರುಪಾವತಿ ಅಥವಾ ಶುಲ್ಕ ವಿನಾಯಿತಿ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿರುವುದಿಲ್ಲ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಾಗೂ ನಿಗಮವು ಸಹ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡದೆ ಇರುವುದು ವಿಷಾದನೀಯ ಸಂಗತಿಯಾಗಿರುತ್ತದೆ ಎಂದು ತಿಳಿಸಿದರು.
ಪ್ರಸ್ತುತ ಸಾಲಿನಲ್ಲಿ ನಿಗಮಕ್ಕೆ ರೂ.5 ಕೋಟಿ ಅನುದಾನವನ್ನು ಒದಗಿಸಿದ್ದು, ಸದರಿ ಅನುದಾನದಲ್ಲಿ ನಿಗಮದ ವತಿಯಿಂದ 2 ಸಾಲ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮಾತ್ರ ಸಾಧ್ಯವಾಗುತ್ತದೆ ಹಾಗೂ ಅನುದಾನ ಕೊರತೆಯಿಂದ ಯಾವುದೇ ನವೀನ ಯೋಜನೆಗಳನ್ನು ಸಹ ಹಮ್ಮಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಹಲವಾರು ವಿದ್ಯಾರ್ಥಿಗಳು ಶುಲ್ಕ ಮರುಪಾವತಿ ಮಾಡಬೇಕೆಂದು ನಿಗಮಕ್ಕೆ ಮನವಿ ಮಾಡಿದ್ದು, ಅಂದಾಜು 2000 ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಿದ್ದು ಇವರುಗಳಿಗೆ ನಿಗಮದ ವತಿಯಿಂದ ಶುಲ್ಕ ಮರುಪಾವತಿ ಮಾಡಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ತಾನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರನ್ನು ಭೇಟಿ ಮಾಡಿ ಅವರಿಗೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಕುರಿತು ವಿವರಣೆ ನೀಡಿರುತ್ತೇನೆ. ಈಗಾಗಲೇ ಸಚಿವರು ಅರ್ಹ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಕೂಡಲೇ ಶುಲ್ಕ ಮರುಪಾವತಿ ಮಾಡಲು ಹಾಗೂ ಮುಂಬರುವ ಸಾಲುಗಳಲ್ಲೂ ಸಹ ಶುಲ್ಕ ಮರುಪಾವತಿ ಮಾಡಬೇಕೆಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ಟಿ. ಆರ್. ಅಶ್ವತ್ಥ್ ನಾರಾಯಣ ಶೆಟ್ಟಿ, ಎಸ್. ಕೆ. ಶೇಷಾಚಲ, ಡಿ. ಎಲ್. ಮಂಜುನಾಥ್, ಬೆಲಗೂರು ಮಂಜುನಾಥ್, ಡಿ. ಎಂ. ಅರವಿಂದ್, ಕಾರಾ ನಾಗರಾಜ್ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post