ಶಿವಮೊಗ್ಗ: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದಿರಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಪ್ರವಾಹ ಪರಿಸ್ಥಿತಿಯ ಅವಲೋಕನದ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಪ್ರವಾಹದ ಪ್ರಮಾಣ ಮತ್ತು ಎಲ್ಲೆಲ್ಲಿ ಅತೀ ಹೆಚ್ಚು ಪ್ರವಾಹಕ್ಕೆ ಹಾನಿಗಳಾಗಿವೆ ಎಂದು ಸವಿವರವನ್ನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ಪ್ರವಾಹಕ್ಕೆ ಸಂಬಂಧಿಸಿದಂತೆ ತುರ್ತು ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ನೆರೆಯಲ್ಲಿ ಸಿಕ್ಕಿ ಹಾಕಿಕೊಂಡಿರುವ ಕುಟುಂಬಗಳಿಗೆ ಕೂಡಲೇ ಪರಿಹಾರ ಕಾರ್ಯ ಕೈಗೊಳ್ಳಲು ಅಗತ್ಯಕ್ರಮ ವಹಿಸಲು ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಹಾಗು ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.















