ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಂಘಟನೆಯೇ ಸಾಧನೆಗೆ ಮೊದಲ ಹೆಜ್ಜೆ, ಯಾವುದೇ ಸಂಸ್ಥೆ ಸದೃಢವಾಗಿ ಬೆಳವಣಿಗೆ ಹೊಂದಲು ಒಳ್ಳೆಯ ಸಂಘಟನೆ ಬಹಳ ಮುಖ್ಯ ಎಂದು ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್.ಅರುಣ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ನಗರದಲ್ಲಿ ಜವಳಿ ವರ್ತಕರ ಸಂಘದ ವತಿಯಿಂದ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಗೌರವ ಸಮರ್ಪಣೆ ಮತ್ತು ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದರು.
ಜವಳಿ ವರ್ತಕರ ಸಂಘವು ಶಿವಮೊಗ್ಗದಲ್ಲಿ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಎಲ್ಲ ಸಂಕಷ್ಟದ ಸಂದರ್ಭಗಳಲ್ಲಿಯು ಸಕರಾತ್ಮಕವಾಗಿ ಮತ್ತು ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ. ವೃತ್ತಿಯ ಜತೆಯಲ್ಲಿ ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಮುನ್ನಡೆಯುತ್ತಿದೆ ಎಂದು ತಿಳಿಸಿದರು.
ಪ್ರಸ್ತುತ ದಿನಗಳಲ್ಲಿ ಜವಳಿ ವರ್ತಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ತುಂಬಾ ಹತ್ತಿರದಿಂದ ಗಮನಿಸಿದ್ದೇನೆ. ಆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಸಂಪೂರ್ಣವಾಗಿ ಪ್ರಯತ್ನಿಸುತ್ತೇನೆ. ಅಧಿಕಾರ ಶಾಶ್ವತವಲ್ಲ, ಆದರೆ ಅಧಿಕಾರ ಅವಧಿಯಲ್ಲಿ ನಾವು ಮಾಡುವ ಒಳ್ಳೆಯ ಕೆಲಸಗಳು ಎಂದಿಗೂ ನೆನಪಿನಲ್ಲಿ ಉಳಿಯುತ್ತವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ವಿವಿಧ ಸಂಘ ಸಂಸ್ಥೆಗಳನ್ನು ಭೇಟಿ ಮಾಡಿದ್ದೇನೆ ಎಂದರು.
ಜವಳಿ ವರ್ತಕರ ಸಂಘದ ಅಧ್ಯಕ್ಷ ಟಿ.ಆರ್.ವೆಂಕಟೇಶ್‌ಮೂರ್ತಿ ಮಾತನಾಡಿದರು. ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್.ಅರುಣ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಉತ್ತಮ ಯೋಜನೆಗಳನ್ನು ರೂಪಿಸಿ ನಮ್ಮ ಅಧಿಕಾರ ಅವಧಿಯಲ್ಲಿ ಅನುಷ್ಠಾನಗೊಳಿಸುವ ಅನೇಕ ಕನಸುಗಳಿವೆ. ಅವುಗಳ ಅನುಷ್ಠಾನದತ್ತ ಮುಂದಿನ ದಿನಗಳಲ್ಲಿ ಸಕಲ ರೀತಿಯಲ್ಲಿ ಪ್ರಯತ್ನ ನಡೆಸಲಾಗುವುದು ಎಂಧು ಹೇಳಿದರು.
ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಜವಳಿ ವರ್ತಕರ ಸಂಘದ ಕಾರ್ಯದರ್ಶಿ ಪ್ರಭಾಕರ್, ಜಾನ್ ಭಾಸ್ಕರ್, ಬಿ.ಸುರೇಶ್, ಹನುಮಾನ್, ಪ್ರಮೋದ್, ನಿರ್ದೇಶಕರು ಹಾಗೂ ಸದಸ್ಯರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post