ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಸೆಪ್ಟಂಬರ್ 2ರಂದು ಶಿವಮೊಗ್ಗಕ್ಕೆ ಆಗಮಿಸಿ, ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಯ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಪೂರ್ವಸಿದ್ದತಾ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಪ್ರಸಕ್ತ ಆಡಳಿತಾರೂಢ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಪೂರ್ಣಗೊಳ್ಳುತ್ತಿರುವ, ಲೋಕಾರ್ಪಣೆಗೆ ಸಿದ್ಧಗೊಂಡಿರುವ ಕಟ್ಟಡಗಳು, ನೂತನವಾಗಿ ಮಂಜೂರಾಗಿ ಶಂಕುಸ್ಥಾಪನೆಗೆ ಸಿದ್ಧವಾಗಿರುವ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಅವರು, ಲೋಕಾರ್ಪಣೆಗೆ ಸಿದ್ಧವಾಗಿರುವ ಕಟ್ಟಡಗಳು, ಸಮುದಾಯಭವನಗಳು, ಶಾಲೆ-ಅಂಗನವಾಡಿ ಕಟ್ಟಡಗಳು, ರಸ್ತೆಗಳು, ಕೆರೆಗಳ ವಿವರವಾದ ಮಾಹಿತಿಯನ್ನು ಆಗಸ್ಟ್ 25ರೊಳಗಾಗಿ ಜಿಲ್ಲಾಧಿಕಾರಿಗಳಿಗೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳು ಹಾಗೂ ನಿಗಮ-ಮಂಡಳಿಗಳಿಂದ ನೀಡಲಾಗುವ ಸೌಲತ್ತುಗಳಿಗೆ ಆಯ್ಕೆಯಾಗಿರುವ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳಿಗೆ ನೀಡಲಾಗುವ ಸೌಲಭ್ಯಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಸೆಪ್ಟಂಬರ್ 2ರಂದು ಬೆಳಿಗ್ಗೆ 11ಗಂಟೆಗೆ ನಗರದ ಫ್ರೀಡಂಪಾರ್ಕ್ ಆವರಣದಲ್ಲಿ ನಡೆಯಲಿರುವ ಈ ಭವ್ಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ಸಚಿವರು, ಉನ್ನತ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಪ್ರತಿ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಚಟುವಟಿಕೆಗಳಿಗೆ ತಲಾ 52ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಅವಶ್ಯಕವಾಗಿರುವ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ನೀಡಿದ್ದಾರೆ ಎಂದ ಅವರು, ಈಗಾಗಲೇ ಕೆಲವು ಕಾರ್ಯಕ್ರಮಗಳನ್ನು ಆರಂಭಗೊಳಿಸಲಾಗಿವೆ. ಇನ್ನೂ ಕೆಲವು ಉದ್ಘಾಟನೆಗೆ ಸಿದ್ಧವಾಗಿವೆ ಎಂದರು.
ವಿಶೇಷವಾಗಿ ಲೋಕೋಪಯೋಗಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸ್ಮಾರ್ಟ್‍ಸಿಟಿ ಕಾಮಗಾರಿಗಳು, ಸಣ್ಣ ಮತ್ತು ಭಾರೀ ನೀರಾವರಿ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ಕಾರ್ಯಕ್ರಮಗಳು ಉದ್ಘಾಟನೆ ಮತ್ತು ಶಂಕುಸ್ಥಾಪನೆಗೊಳ್ಳಲಿವೆ. ಅದಕ್ಕಾಗಿ ಆಹ್ವಾನಪತ್ರಿಕೆಯೊಂದಿಗೆ ಇಲಾಖಾ ಕಾರ್ಯಕ್ರಮಗಳ ಎಲ್ಲಾ ವಿವರಗಳನ್ನು ಹೊಂದಿರುವ ಕಿರುಹೊತ್ತಿಗೆಯನ್ನು ಪ್ರಕಟಿಸಲು ಉದ್ದೇಶಿಸಲಾಗಿದೆ ಎಂದರು.
Also read: ಕೊಟ್ಟೂರು ತಾಲೂಕಿನ ಶ್ರೀ ಮೂಗ ಬಸವೇಶ್ವರ ಜಾತ್ರೆಗೆ ನಿಷೇಧ
ಈ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಎಲ್ಲಾ ಸಮುದಾಯದ ಮುಖಂಡರು, ಗಣ್ಯರು, ಹಿರಿಯರನ್ನು ಆಹ್ವಾನಿಸಲಾಗುವುದು ಎಂದ ಅವರು ಎಲ್ಲಾ ಇಲಾಖೆಯ ಅಧಿಕಾರಿಗಳು ಆಗಸ್ಟ್ 25ರೊಳಗಾಗಿ ಮಾಹಿತಿಯನ್ನು ಒದಗಿಸಲು ಸೂಚಿಸಿರುವುದಾಗಿ ಅವರು ನುಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ, ಮೇಯರ್ ಶ್ರೀಮತಿ ಸುನಿತಾಅಣ್ಣಪ್ಪ, ಸೂಡಾ ಅಧ್ಯಕ್ಷ ನಾಗರಾಜ್, ಮೂಕಪ್ಪ ಕರಭೀಮಣ್ಣನವರ್, ಚಿದಾನಂದ ಎಸ್.ವಟಾರೆ, ಮಾಯಣ್ಣಗೌಡ, ದೊಡ್ಡಗೌಡರ್, ಶ್ರೀಧರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















