Read - 2 minutes
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೆಡಿಎಸ್ ವರಿಷ್ಠ ದೇವೆಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಯವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದೇನೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಜೊತೆ ಹಲವು ಮುಖಂಡರು ಸಹ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಈ ಬಾರಿ ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು ಗೆಲ್ಲಿಸುವ ದೃಷ್ಟಿಯಿಂದ ಜೆಡಿಎಸ್ ಸೇರ್ಪಡೆಯಾಗಿದ್ದೇನೆ ಎಂದರು.
ನಗರದ ಅಭಿವೃದ್ಧಿ ಮತ್ತು ಶಿವಮೊಗ್ಗವನ್ನು ಶಾಂತಿಯಾಗಿಡಲು ನಾನು ಜೆಡಿಎಸ್ ಸೇರ್ಪಡೆಗೊಂಡಿದ್ದೇನೆ. ನನ್ನ ಅಭಿಮಾನಿಗಳು, ಕಾರ್ಯಕರ್ತರೊಂದಿಗೆ ಸಮಾಲೋಚಿಸಿಯೇ ಈ ನಿರ್ಧಾರ ಮಾಡಿದ್ದೇನೆ. ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕ ರೀತಿಯಲ್ಲಿ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಈ ಬಾರಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಆಯನೂರು ಮಂಜುನಾಥ್ ಗೆ ಟಿಕೆಟ್ ಎಂದಾಗ ಅದನ್ನು ವಿರೋಧಿಸಿದ್ದೆವು. ನಗರದಲ್ಲಿ ಅಶಾಂತಿ ಸೃಷ್ಟಿಸುವವರು ಒಬ್ಬರು, ಮತ್ತೊಬ್ಬರು ಅಶಾಂತಿ ಸೃಷ್ಟಿಸಿದಾಗ ಸಿಹಿ ಹಂಚಿದ್ದಾರೆ. ಹೀಗಾಗಿ ನಾನು ಕಾಂಗ್ರೆಸ್ ಪಕ್ಷದಿಂದ ಹೊರ ಬಂದಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ, ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಶತ ಪ್ರಯತ್ನ ನಡೆಸುವುದಾಗಿ ಹೇಳಿದರು.
ಮುಂದಿನ ದಿನಗಳಲ್ಲಿ ಸರ್ಕಾರ ರಚನೆ ಸಂದರ್ಭದಲ್ಲಿ ಬೇರೆ ಪಕ್ಷಗಳ ಜೊತೆ ವಿಲೀನದ ಪ್ರಶ್ನೆ ಬರುವುದೇ ಇಲ್ಲ. ಈ ಬಾರಿ ರಾಜ್ಯದಾದ್ಯಂತ ಜೆಡಿಎಸ್ ಪರವಾಗಿ ಅಲೆ ಇದೆ. ಮತದಾರರು ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ. ರಾಜ್ಯದಲ್ಲಿ ಕನಿಷ್ಠ 125 ಹೆಚ್ಚಿನ ಸ್ಥಾನಗಳನ್ನು ಗಳಿಸುವುದರ ಮೂಲಕ ಜೆಡಿಎಸ್ ಅಧಿಕಾರಿಗೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Discussion about this post