ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನ್ನಡ ಎನೆ ಕುಣಿದಾಡುವುದೆನ್ನೆದೆ ಕನ್ನಡ ಎನೆ ಕಿವಿ ನಿಮಿರುವುದು ಎಂಬ ಕವಿ ವಾಣಿಯಂತೆ ನವೆಂಬರ್ ತಿಂಗಳು ಬಂತೆಂದರೆ ಕನ್ನಡ ನಾಡಿನಾದ್ಯಂತ ಎಲ್ಲರ ಮನೆ ಮನಗಳಲ್ಲಿ ಸಂಭ್ರಮ ಪುಟಿದೇಳುತ್ತದೆ. ವಿಶ್ವದೆಲ್ಲೆಡೆ ಪಸರಿಸಿರುವ ಕನ್ನಡಿಗರು ಇಂದು ಸಂಭ್ರಮದಿಂದ ಕನ್ನಡದ ಹಬ್ಬವನ್ನು ಆಚರಿಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದ ನೆಹರೂ ಕ್ರೀಡಾಂಗಣದದ್ದಿಂದು ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆ, ಇಲ್ಲಿನ ಆಚರಣೆ ಎಲ್ಲವೂ ಅನನ್ಯವಾಗಿದ್ದು ವಿಶ್ವಮಾನ್ಯವಾಗಿದೆ. ಕನ್ನಡನಾಡು ವಿವಿಧ ಧರ್ಮ ಸಂಸ್ಕೃತಿಗಳ ಸಮಾಗಮವಾಗಿದೆ. ಮೌರ್ಯರು, ಕದಂಬರು, ಗಂಗರು, ಹೊಯ್ಸಳರು, ವಿಜಯನಗರದ ಅರಸರು, ಚಾಲುಕ್ಯರು, ರಾಷ್ಟ್ರಕೂಟರು, ಮೈಸೂರಿನ ಒಡೆಯರು, ಕೊಡವರು ಮುಂತಾದ ಅನೇಕ ರಾಜ ಮನೆತನಗಳು ಈ ನಾಡಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು.
ದಾಸಶ್ರೇಷ್ಠ ಕನಕದಾಸರು, ಪುರಂದರದಾಸರು, ಸರ್ವಜ್ಞ, ಶಿಶುನಾಳ ಷರೀಫ ಅವರಂಥ ಸಂತಕವಿಗಳು, ಸಾಮಾಜಿಕ ಕ್ರಾಂತಿಯ ಹರಿಕಾರರಾದ ಜಗಜ್ಯೋತಿ ಬಸವಣ್ಣನವರಂಥ ವಚನಕಾರರು ಮತ್ತು ಹಲವಾರು ದಾರ್ಶನಿಕರು ಬಾಳಿ ಬದುಕಿದ ನೆಲ ಹೆಮ್ಮೆಯ ಕನ್ನಡ ನಾಡು. ಧರ್ಮ ಸಹಿಷ್ಣತೆ, ಸಮನ್ವಯತೆ, ಸೌಹಾರ್ದತೆಯಿಂದ ಬದುಕುತ್ತಿರುವ ನಾಡು ನಮ್ಮದು. ಕನ್ನಡ ಭಾಷೆ ಅತ್ಯಂತ ಶ್ರೀಮಂತ ಸಾಹಿತ್ಯ ಹೊಂದಿದ್ದು, ಕನ್ನಡದ 8 ಜನ ಸಾಹಿತ್ಯ ಪರಿಚಾರಕರು, ಸಾಹಿತ್ಯದ ಅತ್ಯುನ್ನತ ಪ್ರಶಸ್ತಿಯಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಇಡೀ ದೇಶದಲ್ಲೇ 2ನೇ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಭಾಷೆ ನಮ್ಮ ಕನ್ನಡ ನಾಡಿನ ಏಕೀಕರಣದ ಬೀಜಾಂಕುರದ ಫಲವಾಗಿ ಮತ್ತು ಕನ್ನಡಿಗರ ಶ್ರೇಯೋಭಿವೃದ್ದಿಗಾಗಿ 1890ರ ಜುಲೈ 20ರಂದು ಕರ್ನಾಟಕ ವಿದ್ಯಾವರ್ಧಕ ಸಂಘ ಸ್ಥಾಪನೆಯಾಯಿತು ಎಂದು ಹೇಳಿದರು.
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಬದುಕು ಬಾಳಿನ ನಿಧಿಯು ಸಧಬಿಮಾನದ ಗೂಡು… ಎಂಬ ನಾಡಗೀತೆಯನ್ನು ಹುಯಿಲಗೋಳ ನಾರಾಯಣರಾಯರು ಕರ್ನಾಟಕ ಏಕೀಕರಣ ಚಳವಳಿ ಸಂದರ್ಭದಲ್ಲಿ ಮೊಟ್ಟಮೊದಲ ಬಾರಿಗೆ ಹಾಡುವ ಮೂಲಕ ಕನ್ನಡ ನಾಡು, ನುಡಿ ಸಂಸ್ಕೃತಿ, ಭಾಷೆಯ ಐಕ್ಯತೆಯ ಆಶಯಕ್ಕೆ ಚುರುಕು ನೀಡಿದರು ಎಂದರು.
ಕರ್ನಾಟಕ ಏಕೀಕರಣಕ್ಕಾಗಿ ದುಡಿದವರ ಸಂಖ್ಯೆ ಅಸಂಖ್ಯಾತ. ಡೆಪ್ಯೂಟಿ ಚೆನ್ನಬಸಪ್ಪ ಮತ್ತು ವೆಂಕಟ ರಂಗೋಕಟ್ಟಿ ಅವರಂತಹ ಮಹಾನ್ ಕನ್ನಡಿಗರಿಂದ ಪ್ರಾರಂಭವಾದ ಕರ್ನಾಟಕ ಏಕೀಕರಣ ಚಳುವಳಿ ಅನಂತರ ಸಾವಿರಾರು ಜನರ ಅವಿರತ ಹೋರಾಟವಾಗಿ ರೂಪುಗೊಂಡದ್ದು ಭವ್ಯ ಇತಿಹಾಸ. ಕರ್ನಾಟಕ ಏಕೀಕರಣ ಮತ್ತು ನಾಮಕರಣದ ಸುದೀರ್ಘ ಹೋರಾಟದ ಫಲವಾಗಿ, 1956ರ ನ.1ರಂದು ಹೊಸ ರಾಜ್ಯ ಅಸ್ತಿತ್ವಕ್ಕೆ ಬಂದಿತು. ಆದರೆ ಕನ್ನಡ ನಾಡನ್ನು ಮೈಸೂರು ರಾಜ್ಯವೆಂದೇ ಕರೆಯಲಾಗುತ್ತಿತ್ತು ಎಂದರು.
ನಾಡು ಏಕೀಕರಣಗೊಂಡ ಬಗ್ಗೆ ಇರುವ ದೀರ್ಘ ಚರಿತ್ರೆಯಂತೆ ಕರ್ನಾಟಕ ಎಂಬ ಹೆಸರಿನ ನಾಮಕರಣಕ್ಕೂ ತನ್ನದೇ ಆದ ಚರಿತ್ರೆ ಇದೆ. ಅನೇಕರ ಒತ್ತಾಸೆಯಂತೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸುರವರ ಸಮ್ಮುಖದಲ್ಲಿ 1973 ರ ನವೆಂಬರ್ 1 ರಂದು ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಲಾಯಿತು ಎಂದು ತಿಳಿಸಿದರು.
ಭಾರತೀಯ ಭಾಷೆ ಮತ್ತು ಸಾಹಿತ್ಯಗಳಲ್ಲಿ ಉನ್ನತ ಶ್ರೇಣಿಯಲ್ಲಿ ಇರುವ ಚೆಲುವ ಕನ್ನಡ ಭಾಷೆಗೆ ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಕರ್ನಾಟಕದ ಸ್ಥಾನ ಇಂದು ಭಾರತದ ಅಭಿವೃದ್ಧಿ ನಕ್ಷೆಯಲ್ಲಿ ಅಗ್ರ ಪಂಕ್ತಿಯಲ್ಲಿದೆ. ಭಾರತದ ಒಟ್ಟಾರೆ ಆರ್ಥಿಕ ವರಮಾನದಲ್ಲಿ ಕರ್ನಾಟಕದ್ದೇ ಸಿಂಹಪಾಲು. ಮಾಹಿತಿ ತಂತ್ರಜ್ಞಾನದ ದಿಗ್ಗಜರು ನಾವು. ಶೈಕ್ಷಣಿಕವಾಗಿ ರಾಷ್ಟ್ರದಲ್ಲಿಯೇ ಮುಂಚೂಣಿಯಲ್ಲಿರುವ ನಾಡು ನಮ್ಮದು ಎಂದು ಅಭಿಪ್ರಾಯಪಟ್ಟರು.
ವಿಜ್ಞಾನಿಗಳ ಕರ್ಮಭೂಮಿ ನಮ್ಮ ಕರ್ನಾಟಕ ಕೆ.ಎಸ್. ನರಸಿಂಹಸ್ವಾಮಿ ಅವರು ತಮ್ಮ ಕವನದಲ್ಲಿ ಹೇಳಿರುವಂತೆ ಕನ್ನಡವೇ ಪ್ರಾಣ ಪದಕವೆಂದು ನಾವು ಭಾವಿಸಿರುವುದು ನಿಜ. ಆದರೆ ನಮ್ಮ ಮಕ್ಕಳು ತಮ್ಮ ಭವಿಷ್ಯದ ಹಾದಿ ಕಂಡುಕೊಳ್ಳಲು ಭಾಷೆಗಳು ನೆರವಾಗಬೇಕು. ನಾವು ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳುವುದರ ಜತೆಗೆ ಇತರ ಭಾಷೆ, ಸಂಸ್ಕೃತಿಗಳನ್ನು ನಮ್ಮದಾಗಿಸಿಕೊಳ್ಳಬೇಕಿದೆ ಎಂದರು.
ಶಿವಮೊಗ್ಗದ ನೆಲ ಸಮಸಮಾಜದ ಪರಿಕಲ್ಪನೆಯ ನೆಲೆವೀಡು, ಕದಂಬರು, ಚಾಲುಕ್ಯರು, ಗಂಗರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರದ ಅರಸರು, ಮೈಸೂರು ಸಂಸ್ಥಾನ ಮತ್ತು ಕೆಳದಿ ಮನೆತನ ಈ ಪ್ರದೇಶವನ್ನು ಆಳುತ್ತ ಕನ್ನಡತನದ ಸೊಗಡನ್ನು ಇನ್ನಷ್ಟು ವಿಸ್ತರಿಸುವಲ್ಲಿ ತನ್ನ ಕೊಡುಗೆ ನೀಡಿದೆ. ಅನುಭವ ಮಂಟಪದ ಅಲ್ಲಮಪ್ರಭು ಬಳ್ಳಿಗಾವಿಯವರು, ಅಕ್ಕ ಮಹಾದೇವಿಯವರು ಉಡುತಡಿಯವರು, ಶರಣ ಚಿಂತನೆಗಳ ನೆಲೆವೀಡು ಎಂದೇ ಖ್ಯಾತವಾದ ಕಲ್ಯಾಣ ಚಳುವಳಿಯ ಮೇರು ವ್ಯಕ್ತಿತ್ವಗಳು ಶಿವಮೊಗ್ಗ ಜಿಲ್ಲೆಯವರು ಎಂಬುದು ನಮ್ಮ ಹೆಮ್ಮೆ. ಕನ್ನಡ ಸಾರಸ್ವತ ಲೋಕಕ್ಕೆ ಇಬ್ಬರು ರಾಷ್ಟ್ರಕವಿಗಳನ್ನು ಕೊಟ್ಟ ಹಿರಿಮೆ ಅಷ್ಟೇ ಅಲ್ಲ, ಕುವೆಂಪು ಮತ್ತು ಯು.ಆರ್. ಅನಂತಮೂರ್ತಿ ಅವರಂತಹ ಇಬ್ಬರು ಜ್ಞಾನಪೀಠ ಪುರಸ್ಕೃತರನ್ನು ಪೊರೆದ ಮಣ್ಣಿದು ಎಂದು ತಿಳಿಸಿದರು.
ಕರ್ನಾಟಕವೆಂದರೆ ಕೇವಲ ಗಡಿ ರೇಖೆಯ ಒಳಗೆ ಸೀಮಿತವಾದ ಒಂದು ಭೌಗೋಳಿಕ ಪ್ರದೇಶವಲ್ಲ. ಅದು ಒಟ್ಟಾರೆ ರಾಷ್ಟ್ರೀಯ ಸಂಸ್ಕೃತಿಯನ್ನು, ಕನ್ನಡದ ಸ್ವಂತ ವ್ಯಕ್ತಿತ್ವದ ಹಿನ್ನೆಲೆಯಲ್ಲಿ ಪ್ರತಿಪಾದಿಸುವ ಅತ್ಯುನ್ನತವಾದ ಭಾವ. ಕರ್ನಾಟಕದ ಹಿರಿಮೆಗೆ ಕುಂದು ಬಾರದಂತೆ ನಾವೆಲ್ಲರೂ ನೋಡಿಕೊಳ್ಳಬೇಕಿದೆ. ಪ್ರಸ್ತುತ ಜಾಗತೀಕರಣದ ಹಿನ್ನೆಲೆಯಲ್ಲಿ ಇಂಗ್ಲಿಷ್ ಭಾಷಾ ಜ್ಞಾನ ಅವಶ್ಯಕವಾಗಿದ್ದರೂ ಎಂದಿಗೂ ಮಾತೃ ಭಾಷೆ ಕನ್ನಡಕ್ಕೆ ಮೊದಲ ಆದ್ಯತೆ. ನಮ್ಮ ಶಿಕ್ಷಣ ನೀತಿಯೂ ಮಾತೃ ಭಾಷೆಗೆ ಹೆಚ್ಚಿನ ಒತ್ತನ್ನು ನೀಡಿದ್ದರೂ ಕನ್ನಡ ಭಾಷೆಯನ್ನು ಉಳಿಸಿಕೊಳ್ಳುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ ಎಂದರು.
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಸರ್ಕಾರ ಕೈಗೊಂಡಿದ್ದು, ಕನ್ನಡ ಭಾಷೆಯ ಸೊಗಡನ್ನು ಉಳಿಸಿಕೊಂಡು ಅದನ್ನು ಇನ್ನೂ ಹೆಚ್ಚಿಸುವ ಕೆಲಸದಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ.ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಕನ್ನಡಕ್ಕಾಗಿ ನಾವು ಅಭಿಯಾನದ ಮೂಲಕ ಕನ್ನಡ ನಾಡು ನುಡಿ ಸಂಸ್ಕೃತಿ ಭಾಷೆಯ ಸಿರಿಯನ್ನು ಹೆಚ್ಚಿಸಿ ಪಸರಿಸುವ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ವರ್ಷ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರ್ಣಗೊಂಡಿರುವುದು ಅತ್ಯಂತ ಸಂತಸದ ವಿಚಾರ. ಈ ಅಮೃತ ಮಹೋತ್ಸವವನ್ನು ದೇಶಾದ್ಯಂತ ಒಂದು ವರ್ಷ ಕಾಲ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ವಿವಿಧ ಜನಪರ, ಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರೂ ಕೂಡ ಇದಕ್ಕೆ ಕೈಜೋಡಿಸಿರುವುದು ರಾಷ್ಟ್ರಪ್ರೇಮ ಮತ್ತು ಕಲ್ಯಾಣದ ದ್ಯೋತಕವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮರ್ಥ ನಾಯಕತ್ವದಲ್ಲಿ ನಮ್ಮ ರಾಜ್ಯ ಅಭಿವೃದ್ಧಿಯ ಹೊಸ ಮನ್ವಂತರಕ್ಕೆ ತೆರೆದುಕೊಳ್ಳುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದು. ಸುಶಿಕ್ಷಿತ, ಸುಸಂಸ್ಕೃತ ಸಮಾಜವನ್ನು ಕಟ್ಟಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಸ್ವಾತಂತ್ರ್ಯದ ಅಮೃತೋತ್ಸವದ ಸವಿನೆನಪಿಗೆ ರಾಜ್ಯದ ಪ್ರತಿ ತಾಲೂಕಿನಲ್ಲಿ ಅಮೃತ ಗ್ರಾಮ ಪಂಚಾಯತ್ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಜಿಲ್ಲೆಯ 32 ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡಲಾಗಿದ್ದು, ಮೂಲಸೌಲಭ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಈ ಯೋಜನೆಯಡಿ ಮಾರ್ಚ್ ಅಂತ್ಯದವರೆಗೆ ಎಲ್ಲಾ ಯೋಜನೆಗಳಲ್ಲಿ ಉತ್ತಮ ಸಾಧನೆ ಮಾಡಿದ ಗ್ರಾಮ ಪಂಚಾಯತ್‌ಗಳಿಗೆ 25ಲಕ್ಷ ರೂ. ಅನುದಾನ ಒದಗಿಸಲಾಗುವುದು ಎಂದರು.
ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ವೃತ್ತಿ ತರಬೇತಿ ನೀಡಲಾಗುತ್ತಿದೆ. ಈಗಾಗಲೇ 30 ಜನ ಸ್ವಸಹಾಯ ಸಂಘದ ಮಹಿಳೆಯರಿಗೆ ವಾಹನ ಚಾಲನಾ ತರಬೇತಿ ನೀಡಿಲಾಗಿದ್ದು, ಕಸ ವಿಲೇವಾರಿ ಘಟಕದ ವಾಹನವನ್ನು ಚಲಾಯಿಸುವ ಉದ್ಯೋಗ ಕಂಡುಕೊಂಡಿದ್ದಾರೆ. ಮುಂದಿನ ತಿಂಗಳಲ್ಲಿ ಇನ್ನೂ 185 ಮಹಿಳೆಯರಿಗೆ ತರಬೇತಿ ನೀಡಲಾಗುವುದು. ಸ್ವ ಉದ್ಯೋಗ ಆರಂಭಿಸಲು 151 ಗ್ರಾಮ ಪಂಚಾಯತ್ ಒಕ್ಕೂಟಗಳಿಗೆ 16.22 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಸಾಲ ನೀಡಲಾಗಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ, ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಮನೆ ಮನೆಗೆ ಉದ್ಯೋಗ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ 109 ಕೋಟಿ ರೂ. ಅನುದಾನ ವೆಚ್ಚ ಮಾಡಲಾಗಿದ್ದು, 28.52 ಲಕ್ಷ ಮಾನವ ದಿನ ಸೃಜಿಸಲಾಗಿದೆ. ಪ್ರಧಾನಮಂತ್ರಿ ಜೀವನ ಬಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಯೋಜನೆಯಡಿ 65, 300 ಮಹಿಳೆಯರನ್ನು ನೋಂದಣಿ ಮಾಡಲಾಗಿದೆ. ಅಮೃತ ವಸತಿ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಸ್ವಂತ ಮನೆ ಇಲ್ಲದವರಿಗೆ ಮನೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.
ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ನಲ್ಲಿ ಮೂಲಕ ನೀರು ಸರಬರಾಜು ಮಾಡುವ ಜಲ ಜೀವನ್ ಮಿಷನ್ 2024ರೊಳಗೆ ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಇದುವರೆಗೆ 14.10ಕೋಟಿ ರೂ. ವೆಚ್ಚದಲ್ಲಿ 615 ಒಟ್ಟು ಕಾಮಗಾರಿಗಳ ಪೈಕಿ 181 ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದರು.
ಸ್ವಚ್ಛ ಭಾರತ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ 120 ಸ್ವಚ್ಛ ಸಂಕೀರ್ಣಗಳನ್ನು ನಿರ್ಮಿಸಲಾಗಿದ್ದು, 248 ಕಸ ಸಂಗ್ರಹಿಸುವ ವಾಹನಗಳನ್ನು ಒದಗಿಸಲಾಗಿದೆ. 268 ಗ್ರಾಮ ಪಂಚಾಯತ್‌ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳು ಕಾರ್ಯಾರಂಭ ಮಾಡಿವೆ. ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ನೀರಾವರಿ ಯೋಜನೆಗಳು, ವಿಮಾನ ನಿಲ್ದಾಣ, ರಸ್ತೆ ಸಂಪರ್ಕ ಸೇರಿದಂತೆ ಮೂಲಸೌಲಭ್ಯ ಅಭಿವೃದ್ಧಿ ಕಾರ್ಯಕ್ರಮಗಳು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳ್ಳುವ ಹಾದಿಯಲ್ಲಿವೆ. ಕನ್ನಡ ರಾಜ್ಯೊತ್ಸವದ ಈ ಶುಭ ಸಂದರ್ಭದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟರಸಿಕರ ಕಂಗಳ ಸೆಳೆಯುವ ನೋಟ ಹಿಂದೂ, ಕ್ರೈಸ್ತ, ಮುಸಲ್ಮಾನ ಪಾರಸಿಕ ಜೈನರುದ್ಯಾನ… ಈ ಉದಾತ್ತ ಭಾವವನ್ನು ಎಂದಿಗೂ ಜೀವಂತವಾಗಿರಿಸುವ ಪ್ರತಿಜ್ಞೆ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.
ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಿದ ನಮ್ಮ ನಾಡು ಇಂದು, ಮುಂದು, ಎಂದೆಂದೂ ಎಲ್ಲಾ ಜಾತಿ, ಧರ್ಮ, ಶ್ರದ್ಧೆಗಳ ಜನರೂ ಸಾಮರಸ್ಯದಿಂದ ಬದುಕುವ ಒಂದು ಸುಂದರ ತೋಟವಾಗಿಯೇ ಉಳಿಯಬೇಕು. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯವನ್ನು ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post