ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
(Shivamogga) ನಗರದ ಪ್ರಮುಖ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಕ ಪಡೆ (Akka Pade) ಮತ್ತೊಂದು ಕಾರ್ಯಾಚರಣೆ ನಡೆಸಿದ್ದು, ಕೆಎಸ್’ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಗೆ ಸಾರ್ವಜನಿಕವಾಗಿ ಉಪಟಳ ನೀಡುತ್ತಿದ್ದ ಯುವಕನೊಬ್ಬನನ್ನು ವಶಕ್ಕೆ ಪಡೆದಿದೆ.
ಸೆ.15ರಂದು ಶಿವಮೊಗ್ಗ ನಗರದ ಕೆಎಸ್’ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಅಕ್ಕ ಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಸ್ತು ತಿರುಗುತ್ತಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಯುವತಿಯೊಂದಿಗೆ ಸಾರ್ವಜನಿಕವಾಗಿ ಅನುಚಿತವಾಗಿ ವರ್ತಿಸುತ್ತಿರುವುದು ಹಾಗೂ ಆಕೆಗೆ ಉಪಟಳ ನೀಡುತ್ತಿರುವುದು ಸಿಬ್ಬಂದಿಯ ಗಮನಕ್ಕೆ ಬಂದಿದೆ.
Shivamogga : ಅಕ್ಕ ಪಡೆಯ ಸಿಬ್ಬಂದಿ ಕಾರ್ಯಾಚರಣೆ
ತಕ್ಷಣವೇ ಕಾರ್ಯಪ್ರವೃತ್ತರಾದ ಅಕ್ಕ ಪಡೆಯ ಸಿಬ್ಬಂದಿ, ಯುವಕನನ್ನು ಸ್ಥಳದಲ್ಲೇ ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಆತನನ್ನು ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಯುವಕನ ವಿರುದ್ಧ ಲಘು ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಆತನಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ.
ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಹಾಗೂ ಯುವತಿಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಕ್ಕ ಪಡೆಯ ಸಿಬ್ಬಂದಿ ನಿರಂತರವಾಗಿ ಗಸ್ತು ಹಾಗೂ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತವಾಗಿ ವರ್ತಿಸುವುದು ಅಥವಾ ಮಹಿಳೆಯರಿಗೆ ತೊಂದರೆ ನೀಡುವ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








