ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಇಂದು ಹಾಗೂ ನಾಳೆ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಹಾಗೂ ಆ.19ರ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಳ್ಳಾರಿ ಜೊತೆಗೆ ಬೆಂಗಳೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಲವಾದ ಗಾಳಿಯೊಂದಿಗೆ ಮಧ್ಯಮ ಹಾಗೂ ನಿರಂತರ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಆಗಸ್ಟ್ 23 ರವರೆಗೆ ಮುಂದುವ 6 ದಿನಗಳ ಕಾಲ ನಿರಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶ-ಒಡಿಶಾ ಕರಾವಳಿಯ ಬಳಿ ಬಂಗಾಳಕೊಲ್ಲಿಯಲ್ಲಿ ಅಭಿವೃದ್ಧಿಗೊಂಡಿರುವ ಕಡಿಮೆ ಒತ್ತಡದ ವ್ಯವಸ್ಥೆಯಿಂದ ಭಾರೀ ಮಳೆಯಾಗುತ್ತಿದೆ. ಆಗಸ್ಟ್ 19 ರ ವೇಳೆಗೆ ಈ ವ್ಯವಸ್ಥೆಯು ತೀವ್ರಗೊಳ್ಳಲಿದ್ದು, ರಾಜ್ಯದಲ್ಲಿ ಮತ್ತಷ್ಟು ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಸದ್ಯ ಬೆಂಗಳೂರಲ್ಲಿ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕು ಹೊರತು ಪಡಿಸಿ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಇನ್ನೂ ಕೊಡಗು ಜಿಲ್ಲೆಯಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಜಿಲ್ಲೆಯ ನಾನಾ ಭಾಗದಲ್ಲಿ ಅವಾಂತರ ಮುಂದುವರಿದಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಬೃಹತ್ ಮರಗಳು, ವಿದ್ಯುತ್ ಕಂಬಗಳು, ಧರಾಶಾಹಿಯಾಗಿವೆ.
ಶಿವಮೊಗ್ಗದಲ್ಲಿ ಮಳೆ ಅಲರ್ಟ್ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಶಾಲೆ ಮತ್ತು ಪಿಯುಸಿ ಮತ್ತು ಪದವಿ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















