ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಿ, ವರದಿ ನೀಡುವಂತೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೆ ಅನುಮೋದನೆಗೊಂಡಿರುವ ಕಾಮಗಾರಿಗಳಿಗೆ ಬಿಡುಗಡೆಯಾಗಿರುವ ಅನುದಾನ ಸರ್ಕಾರಕ್ಕೆ ವಾಪಸ್ ಹೋಗದಂತೆ ಬಿಡುಗಡೆಯಾದ ಅನುದಾನವನ್ನು ನಿಯೋಜಿತ ಉದ್ದೇಶಕ್ಕಾಗಿ ಸಕಾಲದಲ್ಲಿ ಸದ್ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸುವಂತೆ ಅವರು ಸೂಚಿಸಿದರು.
ವಸತಿ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳು ಕಳೆದ ಕೆಲವು ವರ್ಷಗಳಿಂದ ಮನೆಯನ್ನು ಕಟ್ಟಿಕೊಳ್ಳದಿರುವುದನ್ನು ಗಮನಿಸಲಾಗಿದೆ. ಅಲ್ಲದೇ ಕಳೆದ ಸಾಲಿನಲ್ಲಿ ಮಳೆಯಿಂದ ಪೂರ್ಣ ಪ್ರಮಾಣದಲ್ಲಿ ಹಾಗೂ ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ತಿ ಹಾಗೂ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆದಾಗ್ಯೂ ಅನೇಕ ಫಲಾನುಭವಿಗಳು ಕಟ್ಟಡ ನಿರ್ಮಿಸಿಕೊಳ್ಳುವಲ್ಲಿ ಹಿಂದೇಟು ಹಾಕುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಸಂತ್ರಸ್ಥ ಫಲಾನುಭವಿಗಳು, ಈಗಾಗಲೇ ಮನೆ ನಿರ್ಮಿಸಿಕೊಂಡಲ್ಲಿ ಅಥವಾ ದುರಸ್ತಿ ಮಾಡಿಸಿಕೊಂಡಲ್ಲಿ ಅಂತಹ ಫಲಾನುಭವಿಗಳಿಗೆ ನಿಂiiಮಾನುಸಾರ ಸಹಾಯಧನ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೊರೋನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೆ ಶೇ.20ರಷ್ಟು ಮಂದಿ ಮೊದಲ ಹಂತದ ಹಾಗೂ 52ರಷ್ಟು ಮಂದಿ 2ನೇ ಹಂತದ ಲಸಿಕೆ ಪಡೆದಿದ್ದಾರೆ. ಆದರೆ 2ನೇ ಹಂತದ ಲಸಿಕೆ ಪಡೆಯುವಲ್ಲಿ ಬಹುಸಂಖ್ಯೆಯ ಜನ ಹಿಂದೇಟು ಹಾಕುತ್ತಿದ್ದಾರೆ. ದ್ವಿತೀಯ ಹಂತದ ಲಸಿಕೆ ಹೊಂದದಿರುವವರ ಮನವೊಲಿಸಿ ಲಸಿಕೆ ಕೊಡಿಸುವಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂಧಿಗಳು ಅವಿರತವಾಗಿ ಶ್ರಮಿಸುತ್ತಿದ್ದಾರೆ. 2ನೇ ಹಂತದ ಲಸಿಕೆ ಪಡೆಯುವುದರಿಂದ ಮುಂದಿನ ದಿನಗಳಲ್ಲಿ ಸಂಭವನೀಯ ಕೊರೋನ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿದೆ. ಆದ್ದರಿಂದ ಈವರೆಗೆ ಲಸಿಕೆ ಪಡೆದುಕೊಳ್ಳದಿರುವ ಜನರು ತಮ್ಮ ಸಮೀಪದ ಆರೋಗ್ಯ ಕೇಂದ್ರಕ್ಕೆ ತೆರಳಿ ಆರೋಗ್ಯ ಕ್ಷಮತೆ ಹೆಚ್ಚಿಸುವ ಲಸಿಕೆಯನ್ನು ಪಡೆಯುವಂತೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂಧಿಗಳು ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ವಿವಿಧ ನಿಗಮ-ಮಂಡಳಿಗಳಲ್ಲಿ ಅನುಷ್ಠಾನದಲ್ಲಿರುವ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಕೊಳವೆಬಾವಿ ಕೊರೆಸಿಕೊಡುವ ಹಾಗೂ ಈಗಾಗಲೆ ಕೊರೆಸಲಾಗಿರುವ ಕೊಳವೆಬಾವಿಗಳಿಗೆ ಮೋಟಾರ್ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸಂಬಂಧಿತ ನಿಗಮಗಳ ಅಧಿಕಾರಿಗಳು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದರು.
ರೈತರ ಆತ್ಮಹತ್ಯೆ, ಬಣವೆ ನಷ್ಟ, ಹಾವುಕಡಿತ, ಆಕಸ್ಮಿಕ ಮರಣ ಮುಂತಾದ ಪ್ರಕರಣಗಳಲ್ಲಿ ಸಂತ್ರಸ್ಥ ಕುಟುಂಬಗಳಿಗೆ ಸಹಾಯಧನ ಬಿಡುಗಡೆ ಮಾಡಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವವರೆಗೆ ವಿಳಂಬ ಮಾಡದೇ ಜಿಲ್ಲಾಡಳಿತದಲ್ಲಿರುವ ಅನುದಾನವನ್ನು ಬಳಸಿ ಪರಿಹಾರಧನ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಪ್ರಸ್ತುತ ಸುರಿಯುತ್ತಿರುವ ಮಳೆಯಿಂದ ಬೆಳೆ, ಜೀವಹಾನಿ ಮುಂತಾದವುಗಳ ಮಾಹಿತಿ ಪಡೆದು ಸಲ್ಲಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಗಮನಹರಿಸುವಂತೆ ಸೂಚಿಸಿದರು.
ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ ಮುಂತಾದ ಇಲಾಖೆಗಳ ಮೂಲಕ ಜಿಲ್ಲೆಯಲ್ಲಿ ಅನುಷ್ಠಾನದಲ್ಲಿರುವ ಯೋಜನೆಗಳ ಪ್ರಗತಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post