ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹಸೇನೆಯ ಕಾರ್ಯಕರ್ತರು ಶಿವಮೊಗ್ಗ (Shivamogga) ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ (Strike) ನಡೆಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಸರ್ಕಾರ ಕೂಡಲೇ ಬೆಲೆ ಏರಿಕೆ ನಿರ್ಧಾರವನ್ನು ಪುನರ್ ಪರಿಶೀಲಿಸಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ದರ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
Shivamogga: ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಂಕಷ್ಟ
ರಾಜ್ಯ ಸರ್ಕಾರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಆರ್ಥಿಕ ಹೊರೆ ಹೇರುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳ ಮತ್ತಷ್ಟು ಸಂಕಷ್ಟ ತಂದಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಹಾಲಿನ ದರವನ್ನು ಪ್ರತಿ ಲೀಟರ್ಗೆ 8 ರೂ. ಹೆಚ್ಚಿಸಿರುವುದಾಗಿ ಸರ್ಕಾರ ಹೇಳುತ್ತಿದ್ದರೂ, ವಾಸ್ತವದಲ್ಲಿ ಗ್ರಾಹಕರಿಗೆ 12 ರೂ. ಹೆಚ್ಚಳದ ಹೊರೆ ಬೀಳುತ್ತಿದೆ. ರೈತರಿಗೆ ಅನುಕೂಲ ಮಾಡಿಕೊಡುವ ನೆಪದಲ್ಲಿ ದರ ಏರಿಕೆ ಮಾಡಲಾಗುತ್ತಿದೆ. ಆದರೆ ರೈತರಿಗೆ ನೆರವು ನೀಡಲು ಸರ್ಕಾರ ಬೇರೆ ಮಾರ್ಗಗಳನ್ನು ಅನುಸರಿಸಬೇಕು ಎಂದು ಆಗ್ರಹಿಸಿದರು.
ಇದರೊಂದಿಗೆ ಹಾಲಿನ ಉತ್ಪನ್ನಗಳಾದ ತುಪ್ಪ ಮತ್ತು ಬೆಣ್ಣೆಯ ಬೆಲೆಯನ್ನೂ ಹೆಚ್ಚಿಸಲಾಗಿದೆ. ಅಕ್ಕಿ ದರ ಏರಿಕೆಯಾಗಿದ್ದು, ಬಸ್ ಪ್ರಯಾಣ ದರ ಹೆಚ್ಚಳದಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಹೋಟೆಲ್ಗಳಲ್ಲಿ ಕಾಫಿ, ತಿಂಡಿ ಸೇರಿದಂತೆ ಆಹಾರ ಪದಾರ್ಥಗಳ ಬೆಲೆಯೂ ಹೆಚ್ಚಾಗಿದ್ದು, ಸಾಮಾನ್ಯ ಜನರ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ದೂರಿದರು.
Also Read>> ಹೋರಿಯ ಪ್ರಾಣ ಉಳಿಸಲು ಹೋಗಿ ಯುವಕನೇ ಬಲಿ! ಕೆರೆಯ ಕೆಸರಿನಲ್ಲಿ ಸಿಲುಕಿ ದುರ್ಮರಣ
ದರ ಏರಿಕೆ ಹಿಂಪಡೆಯಲು ಆಗ್ರಹ
ರಾಜ್ಯ ಸರ್ಕಾರ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ರೈತರು ಮತ್ತು ಬಡವರು ಬದುಕು ಸಾಗಿಸುವುದೇ ಕಷ್ಟವಾಗಿರುವ ಸಂದರ್ಭದಲ್ಲಿ ಜನರ ಮೇಲೆ ಮತ್ತಷ್ಟು ಬೆಲೆ ಏರಿಕೆಯ ಹೊರೆ ಹಾಕುವುದು ಸರಿಯಲ್ಲ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಹಾಲು, ಹಾಲಿನ ಉತ್ಪನ್ನಗಳು ಹಾಗೂ ಬಸ್ ಪ್ರಯಾಣ ದರ ಏರಿಕೆಯನ್ನು ಪುನರ್ ಪರಿಶೀಲಿಸಿ ಕಡಿಮೆ ಮಾಡಬೇಕು. ರೈತರಿಗೆ ನೆರವು ನೀಡಲು ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹಸೇನೆ ರಾಜ್ಯಾಧ್ಯಕ್ಷ ಎಂ. ರವಿಪ್ರಸಾದ್, ಜಿಲ್ಲಾಧ್ಯಕ್ಷ ಮಧುಸೂದನ್ ಎಸ್.ಎಂ., ಪ್ರಮುಖರಾದ ಅಭಿಜಿತ್, ನೂರುಲ್ಲಾ, ಭರತ್, ಲಿಂಗಣ್ಣ, ರಘು, ಶಿವಕುಮಾರ್, ರಫೀಕ್, ಮುಕುಂದಕುಮಾರ್, ನಿಂಗರಾಜು, ವರದರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









