Read - 2 minutes
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
1946 ರಲ್ಲಿ ಶಿವಮೊಗ್ಗ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಿಂದ ಸ್ಥಾಪನೆಗೊಂಡ ರಾಷ್ಟ್ರೀಯ ಶಿಕ್ಷಣ ಸಮಿತಿಯು ಕೇವಲ 16 ವಿದ್ಯಾರ್ಥಿಗಳಿಂದ ಪ್ರಾರಂಭಗೊಂಡು ಇಂದು 18000 ಕ್ಕು ಹೆಚ್ಚು ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳುವ ಹೆಮ್ಮರವಾಗಿ ಬೆಳೆದು ನಿಂತಿದೆ. 36 ಶಾಲಾ ಕಾಲೇಜುಗಳು 1800 ಕ್ಕು ಹೆಚ್ಚು ಸಿಬ್ಬಂದಿಗಳು ವೃತ್ತಿ ಬದುಕು ಕಟ್ಟಿಕೊಂಡಿದ್ದಾರೆ.
ಪ್ರಸ್ತುತ ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತಮಹೋತ್ಸವದ ಶುಭ ಸಂದರ್ಭದಲ್ಲಿ ಅನೇಕ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದ್ದು, ಪ್ರತಿ ತಿಂಗಳು ವಿವಿಧ ಕ್ಷೇತ್ರಗಳ ಸಾಧಕರಿಂದ ಉಪನ್ಯಾಸ ಮಾಲಿಕೆ ಏರ್ಪಡಿಸಿಕೊಂಡು ಬರಲಾಗುತ್ತಿದೆ. ಇಸ್ರೋ ಮಾಜಿ ಅಧ್ಯಕ್ಷರಾದ ಡಾ.ಕೆ.ಶಿವನ್ ಅವರಿಂದ ಮೊದಲ್ಗೊಂಡು ಇನ್ಫೋಸಿಸ್ ಫೌಂಡೇಶನ್ ಸುಧಾಮೂರ್ತಿ, ಶಿಕ್ಷಣ ತಜ್ಞ ವೈ.ಎಸ್.ವಿ ದತ್ತಾ, ಡಾ.ಗುರುರಾಜ ಕರಜಗಿ, ಪತ್ರಕರ್ತ ವಿಶ್ವೇಶ್ವರ ಭಟ್, ನ್ಯಾಯಮೂರ್ತಿ ಕೃಷ್ಣಾದೀಕ್ಷಿತ್, ಖಾಜಿ, ನಾಗರತ್ನ, ನ್ಯಾಯವಾದಿ ಅಶೋಕ್ ಹಾರನಹಳ್ಳಿ, ಖ್ಯಾತ ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ಅವರು ಉಪನ್ಯಾಸ ನೀಡುವುದರ ಮೂಲಕ ನಮ್ಮನ್ನು ಶ್ರೀಮಂತಗೊಳಿಸಿದ್ದಾರೆ.
ಇದರ ಮುಂದುವರಿದ ಭಾಗವಾಗಿ ಮೂರು ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಜ.23 ರ ಸೋಮವಾರ ಬೆಳಗ್ಗೆ 11ಗಂಟೆಗೆ ಉಪನ್ಯಾಸ ಮಾಲಿಕೆಯ 09 ನೇ ಸರಣಿ ಕಾರ್ಯಕ್ರಮವನ್ನು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಪದ್ಮಭೂಷಣ ಡಾ.ಬಿ.ಎನ್.ಸುರೇಶ್ ‘ರಾಷ್ಟ್ರಕ್ಕೆ ಬಾಹ್ಯಾಕಾಶ ತಂತ್ರಜ್ಞಾನದ ಕೊಡುಗೆ : ಅಂದು, ಇಂದು, ಮುಂದು’ ವಿಷಯವಾಗಿ ಮಾತನಾಡಲಿದ್ದಾರೆ. ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ವಿಜ್ಞಾನ ಅನ್ವಯಿಕ ಕಾಲೇಜು ಕಾರ್ಯಕ್ರಮ ಸಂಯೋಜಿಸಲಿದ್ದಾರೆ.
ಜ.25 ರ ಬುಧವಾರ ಬೆಳಗ್ಗೆ 11ಗಂಟೆಗೆ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಿಸಿರುವ 400 ಕಿಲೊವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕರಾದ ಕೆ.ಎಸ್.ಈಶ್ವರಪ್ಪ, ಸಂಸದರಾದ ಬಿ.ವೈ ರಾಘವೇಂದ್ರ ಉದ್ಘಾಟಿಸಲಿದ್ದಾರೆ.
ಜ.30 ರ ಸೋಮವಾರ ಬೆಳಗ್ಗೆ 11ಗಂಟೆಗೆ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಸರ್ವೋದಯ ಮಂಡಲದ ಸಂಯುಕ್ತಾಶ್ರಯದಲ್ಲಿ ಸರ್ವೋದಯ ದಿನಾಚರಣೆ ಮತ್ತು ಕರ್ನಾಟಕ ರಾಜ್ಯ ಸಮಾವೇಶ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸುದ್ದಿಗೋಷ್ಟಿಯಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಸಹಾಯಕ ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಡಾ.ನಾಗಭೂಷಣ್, ಡಾ.ಕೆ.ಎಲ್.ಅರವಿಂದ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Discussion about this post