ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಆರಂಭವಾಗಿರುವ ಕ್ರಾಂತಿಗೆ ಪೂರಕವಾಗಿ ಹುಲಿ-ಸಿಂಹಧಾಮದಲ್ಲಿ 120 ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಸಿಂಹ ಧಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 120 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿಯಾಗಲಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ 5 ಕೋಟಿ ರೂ., ಕೇಂದ್ರ ಮೃಗಾಲಯ ಪ್ರಾಧಿಕಾರದಿಂದ 6 ಕೋಟಿ ರೂ. ಹಾಗೂ ಮೈಸೂರು ಮೃಗಾಲಯ ಪ್ರಾಧಿಕಾರದಿಂದ 2 ಕೋಟಿ ರೂ. ಅನುದಾನ ತರಲಾಗಿದೆ ಎಂದರು.
ಇಲ್ಲಿ ಪಕ್ಷಿಗಳಿಗೆ ಪ್ರತ್ಯೇಕ ಸುಸಜ್ಜಿತ ಕ್ಯಾಬಿನ್ ನಿರ್ಮಾಣವಾಗುತ್ತಿದ್ದು, ಅಭಿವೃದ್ಧಿ ಕಾರ್ಯದ ನಂತರ ಹಲವು ಪ್ರಾಣಿಗಳನ್ನು ತರಿಸಲಾಗುತ್ತಿದೆ. ಕಾಡು ಕೋಣಕ್ಕೆ ಪ್ರತ್ಯೇಕ ಸಫಾರಿ ನಿರ್ಮಾನವಾಗುತ್ತಿದ್ದು, ನೀರಾನೆ ಸೇರಿದಂತೆ ಹಲವು ಪ್ರಾಣಿಗಳು ಇಲ್ಲಿಗೆ ಆಗಮಿಸಲಿವೆ ಎಂದರು.
ಇನ್ನು, ಸಕ್ರೆಬೈಲು ಅಭಿವೃದ್ಧಿಗಾಗಿ 20 ಕೋಟಿ ರೂ. ಅನುದಾನವನ್ನು ರಾಜ್ಯ ಸಚಿವ ಸಂಪುಟ ಅನುಮೋದನೆ ಮಾಡಿದ್ದು, ಇಲ್ಲಿರುವ ನೈಸರ್ಗಿಕ ದ್ವೀಪಕ್ಕೆ ತೆರಳುವ ಮಾರ್ಗ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ಜಂಗಲ್ ಲಾಡ್ಜ್, ವಾಕ್ ಥ್ರೂ 6 ಕಿಮೀ ಸಫಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಯ ಪರ್ವ ಆರಂಭವಾಗಿದೆ. ಜಿಲ್ಲೆಯಲ್ಲಿ ದೇಶದಲ್ಲೇ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ ಎಂದರು.
ಮೇಯರ್ ಸುವರ್ಣಾ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಉಪಾಧ್ಯಕ್ಷ ಎಸ್. ದತ್ತಾತ್ರಿ, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಪ್ರಮುಖರಾದ ಚನ್ನಬಸಪ್ಪ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post