ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪ್ರದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ಶಾಲೆಗಳಿಗೆ ಭೌತಿಕವಾಗಿ ತುರ್ತು ಅಗತ್ಯವಾಗಿರುವ ವಿಷಯಗಳನ್ನು ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಇಂದು ಶಿವಮೊಗ್ಗದ ಜೋಸೆಫ್‌ನಗರ, ವೆಂಕಟೇಶನಗರ, ಬಸವನಗುಡಿ ಮತ್ತು ಬೊಮ್ಮನಕಟ್ಟೆಯ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು.
ಕಳೆದ ಸಾಲಿನಲ್ಲಿ ಬಿದ್ದ ಭಾರೀ ಮಳೆಯಿಂದಾಗಿ ನಗರ ವ್ಯಾಪ್ತಿಯ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕಟ್ಟಡಗಳು ಸಾಮಾನ್ಯದಿಂದ ಭಾರೀ ಪ್ರಮಾಣದಲ್ಲಿ ಹಾನಿಗೀಡಾಗಿದ್ದವು. ಈ ಸಂದರ್ಭದಲ್ಲಿ ಮಾನ್ಯ ಸಚಿವರು ಸರ್ಕಾರದ ಗಮನಸೆಳೆದು 10 ಕೋಟಿ ರೂ.ಗಳನ್ನು ಮಂಜೂರು ಮಾಡಿಸಿ, ಕಟ್ಟಡಗಳ ದುರಸ್ತಿ ಮಾಡಿಸಲು ಮುಂದಾಗಿದ್ದರು.
ಬಿಡುಗಡೆಯಾದ ಅನುದಾನವನ್ನು ಬಳಸಿಕೊಂಡು ದುರಸ್ತಿಯಾಗಿರುವ ಕಟ್ಟಡಗಳ ದುರಸ್ತಿ, ಸುಣ್ಣ-ಬಣ್ಣ, ಮೇಲ್ಚಾವಣಿ, ಶೌಚಾಲಯ, ಕಾಂಪೌಂಡ್ ನಿರ್ಮಾಣ ಮುಂತಾದ ಕಾಮಗಾರಿಗಳನ್ನು ಖುದ್ದು ವೀಕ್ಷಿಸಿದ ಸಚಿವರು ಜೋಸೆಫ್ ನಗರ ಸೇರಿದಂತೆ ಕೆಲವು ಶಾಲೆಗಳಲ್ಲಿ ಇನ್ನಷ್ಟು ಕಾಮಗಾರಿಗಳು ಬಾಕಿ ಇದ್ದು, ಅವುಗಳನ್ನು ಹೆಚ್ಚುವರಿಯಾಗಿ ಮಾಡಿಸುವಂತೆ ಹಾಗೂ ಅದಕ್ಕೆ ಅಗತ್ಯವಾಗಿರುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆಗೊಳಿಸಲು ಯತ್ನಿಸುವುದಾಗಿ ಅವರು ತಿಳಿಸಿದರು.
ಅಲ್ಲದೇ ಪ್ರಸ್ತುತ ದುರಸ್ತಿಗೊಳಗಾದ ಹಾಗೂ ದುರಸ್ತಿಗೊಳಗಾಗದಿರುವ ಶಾಲೆಗಳಲ್ಲಿ ಸ್ಥಳಾವಕಾಶ ಹಾಗೂ ಮಕ್ಕಳ ಸಂಖ್ಯೆಗನುಗುಣವಾಗಿ ಆಗಬೇಕಾಗಿರುವ ಕಾಮಗಾರಿಗಳ ಹಾಗೂ ಕುಂದುಕೊರತೆಗಳ ಪಟ್ಟಿಯನ್ನು ತಯಾರಿಸಿ, ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ .ರಮೇಶ್ ಅವರಿಗೆ ಸೂಚಿಸಿದರು.
ಕೇಂದ್ರ ಪುರಸ್ಕೃತ ಜಲಜೀವನ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗಳು ಪ್ರಗತಿಯಲ್ಲಿವೆ. ಅಂತೆಯೇ ನಗರಭಾಗದ ಸರ್ಕಾರಿ ಶಾಲೆಗಳನ್ನು ಈ ಯೋಜನೆಯ ವ್ಯಾಪ್ತಿಗೊಳಪಡಿಸಲು ಪ್ರಸ್ತಾವನೆ ಸಲ್ಲಿಸಿದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೊಮ್ಮನಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪೋಷಕರು ಸಚಿವರಿಗೆ ಮನವಿ ಸಲ್ಲಿಸಿ, ಬಹುದಿನಗಳಿಂದ ಈ ಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರೌಢಶಿಕ್ಷಣಕ್ಕಾಗಿ ನಗರದ ಶಾಲೆಗಳಿಗೆ ಹೋಗುತ್ತಿದ್ದಾರೆ. ಆದ್ದರಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪ್ರೌಢಶಾಲೆಯೊಂದನ್ನು ತೆರೆಯಲು ಬಹುದಿನಗಳಿಂದ ಮನವಿ ಸಲ್ಲಿಸಲಾಗಿದೆ. ಮನವಿಯನ್ನು ಪುರಸ್ಕರಿಸಿ, ಕಟ್ಟಡವನ್ನು ಮಂಜೂರು ಮಾಡುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ. ರಮೇಶ್ ಸೇರಿದಂತೆ ಆಯಾ ವಾರ್ಡಿನ ಪಾಲಿಕೆಯ ಸದಸ್ಯರು, ಎಸ್’ಡಿಎಂಸಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post