ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
ಜಿಲ್ಲೆಯ ಶಿವಮೊಗ್ಗ, ಶಿಕಾರಿಪುರ, ಸೊರಬ, ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಮುಳುಗಡೆ ಸಂತ್ರಸ್ತರೆಂದು ಗುರುತಿಸಲ್ಪಟ್ಟು ಸುಮಾರು 9773 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಭೂಮಿಯ ಹಕ್ಕನ್ನು ದಾಖಲೆ ಮಾಡುವ ನಿಟ್ಟಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯವರು ಜಂಟಿ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.
ಈ ಸಮೀಕ್ಷೆಯ ಆಧಾರದಲ್ಲಿ ಸಂತ್ರಸ್ತರಿಗೆ ವೈಯಕ್ತಿಕ ಪಹಣಿ ದಾಖಲಿಸಲು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ (ಎನ್’ಓಸಿ ) ನೀಡುವಂತೆ ಕೋರಲಾಗಿದೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮೈಸೂರು ಕಾಗದ ಕಾರ್ಖಾನೆಯ ಅರಣ್ಯ ಪ್ರದೇಶದಲ್ಲಿ ಬೆಳೆದಿರುವ ಮರಗಳನ್ನು ಕಟಾವು ಮಾಡಿ, ಮಾರಾಟ ಮಾಡುವ ಮೂಲಕ ಸಿಬ್ಬಂದಿ ವೇತನ ಪಾವತಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈಗಾಗಲೇ ಪುನರ್ವಸತಿ ತಡವಾಗಿದ್ದು ನಿಗದಿತ ದಿನಾಂಕದ ಒಳಗೆ ಕೆಲಸ ಮಾಡಬೇಕು ಅಂತ ಮಾನ್ಯ ಮುಖ್ಯಮಂತ್ರಿಗಳು ಹಾಗು ಶಿವಮೊಗ್ಗ ದ ಸಂಸದ ಬಿ.ವೈ. ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ, ಎಂಎಸ್’ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ, ಮುಳುಗಡೆ ಸಂತ್ರಸ್ತರ ವಾಸ್ತವಿಕ ಸಮಸ್ಯೆಗಳನ್ನು ವಿವರಿಸಿದರು.
ಸಭೆಯಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ, ಕುಮಾರ ಬಂಗಾರಪ್ಪ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post