ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಸ್ತೆ, ಸೇತುವೆ, ವಿಮಾನ ನಿಲ್ದಾಣ, ನೀರಾವರಿ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ದಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಅನುದಾನ ಒದಗಿಸಲಾಗಿದ್ದು, ಮುಂದಿನ ಎರಡೂವರೆ ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ಸಂಸದ ಬಿ.ವೈ.ರಾಫವೇಂದ್ರ ತಿಳಿಸಿದರು.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಸಮಾರಂಭದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಇದುವರೆಗೆ 22 ಇದ್ದ ರಾಷ್ಟ್ರೀಯ ಹೆದ್ದಾರಿಗಳ ಸಂಖ್ಯೆಯನ್ನು 44ಕ್ಕೆ ಹೆಚ್ಚಿಸಲಾಗಿದೆ. 423 ಕೋಟಿ ರೂ. ವೆಚ್ಚದಲ್ಲಿ ಕಳಸವಳ್ಳಿ-ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದ್ದು ಒಂದು ವರ್ಷದ ಒಳಗಾಗಿ ಪೂರ್ಣಗೊಳ್ಳಲಿದೆ. 516 ಕೋಟಿ ರೂ.ವೆಚ್ಚದಲ್ಲಿ ಚಿತ್ರದುರ್ಗ-ಶಿವಮೊಗ್ಗ ಚತುಷ್ಪಥ ರಸ್ತೆ ಅಭಿವೃದ್ದಿಯಿಂದ ಬೆಂಗಳೂರು ಸಂಪರ್ಕ ಸುಲಭವಾಗಲಿದೆ ಎಂದರು.
ಶಿವಮೊಗ್ಗ ನಗರದ ಜನತೆಯ ಬಹುವರ್ಷಗಳ ಬೇಡಿಕೆಯಾಗಿದ್ದ ವಿದ್ಯಾನಗರದ ಬಳಿ ವಿನೂತನವಾದ ವೃತ್ತಾಕಾರದ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾರ್ಯ 44 ಕೋಟಿ ರೂ. ವೆಚ್ಚದಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ನಿಟ್ಟೂರು ಮತ್ತು ಹೊಸನಗರ ಭಾಗದಲ್ಲಿ ಶಿಥಿಲಗೊಂಡಿರುವ 7 ಸೇತುವೆಗಳ ಪುನರ್ ನಿರ್ಮಾಣಕ್ಕಾಗಿ 19 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. 96 ಕೋಟಿ ರೂ. ವೆಚ್ಚದಲ್ಲಿ ಸೊಲ್ಲಾಪುರ-ಮಂಗಳೂರು ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು.
ತೀರ್ಥಹಳ್ಳಿ-ಉಡುಪಿ ರಸ್ತೆಯಲ್ಲಿ 8.20 ಕೋಟಿ ರೂ ವೆಚ್ಚದಲ್ಲಿ 3 ಕಿರು ಸೇತುವೆ ನಿರ್ಮಾಣ, ಬೈಂದೂರು-ರಾಣೆಬೆನ್ನೂರು ರಸ್ತೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 7 ಕಿರು ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸಿಆರ್‌ಎಫ್ ಯೋಜನೆಯಡಿ ಇನ್ನೂ 400 ಕೋಟಿ ರೂ. ಯೋಜನೆಗಳ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದರು.
ಶಿವಮೊಗ್ಗ ನಗರದಲ್ಲಿ 3200 ಮೀಟರ್ ಉದ್ದದ ರನ್‌ವೇ ಸೌಲಭ್ಯ ಹೊಂದಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ತುಂಗಾ ನದಿಯಿಂದ ಜಿಲ್ಲೆಯ 1500 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಈಗಾಗಲೇ ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ರಾಜ್ಯದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ಒದಗಿಸಿದೆ. 5612 ಕಿಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪಿಎಂಜಿಎಸ್‌ವೈ ಯೋಜನೆಯಡಿ 3660 ಕೋಟಿ ರೂ. ಒದಗಿಸಲಾಗಿದೆ ಎಂದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ
ಕೇಂದ್ರ ಭೂ ಸಾರಿಗೆ ಸಚಿವ ನಿತೀನ್ ಗಡ್ಕರಿ ಅವರು ಈ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು.
ವಿಧಾನ ಪರಿಷತ್ ಸದಸ್ಯರಾದ ಅಯನೂರು ಮಂಜುನಾಥ, ರುದ್ರೇಗೌಡ, ಶಾಸಕ ಅರಗ ಜ್ಞಾನೇಂದ್ರ, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post