ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹೊಸಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕಾಂಕ್ರೀಟ್ ಬಾಕ್ಸ್ ಡ್ರೈನೇಜ್ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿಯು ಸಂಪೂರ್ಣ ಅವೈಜ್ಞಾನಿಕ ಹಾಗೂ ಕಳಪೆಯಾಗಿದೆ ಎಂದು ಆಗ್ರಹಿಸಿ ಇಂದು ಸಾರ್ವಜನಿಕರು ಹಾಗೂ ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ರವರ ನೇತೃತ್ವದಲ್ಲಿ ವೀಕ್ಷಣೆಗೆ ಆಗಮಿಸಿದ ಸ್ಮಾರ್ಟ್ ಸಿಟಿಯ ಮುಖ್ಯ ಇಂಜಿನಿಯರ್ ಶಿವಕುಮಾರ್ ಇಂಜಿನಿಯರ್ ಗಳಾದ ವಿಜಯಕುಮಾರ್ ಮಲ್ಲಿಕಾರ್ಜುನ್ ಹಾಗೂ ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡರು.
ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹೆಸರಿನಲ್ಲಿ ಎಲ್ಲಿ ಬೇಕೆಂದರಲ್ಲಿ ಗುಂಡಿಗಳನ್ನು ಹೊಡೆದು ಹದಿನೈದು-ಇಪ್ಪತ್ತು ದಿನಗಳಾದರೂ ಗುಂಡಿಗಳನ್ನು ಮುಚ್ಚದೆ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದ್ದು ಬಡಾವಣೆಯಲ್ಲಿ ನಡೆಯುತ್ತಿರುವ ಬಾಕ್ಸ್ ಡ್ರೈನೇಜ್ ಕಾಮಗಾರಿಯು ಸಂಪೂರ್ಣ ಕಳಪೆ ಹಾಗೂ ಅವೈಜ್ಞಾನಿಕವಾಗಿದ್ದು ಈ ಕೂಡಲೇ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಮಾತನಾಡಿ, ಈಗಾಗಲೇ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳ ಟೆಂಡರ್ ಪಡೆದ ಗುತ್ತಿಗೆದಾರರು ತುಂಡು ಗುತ್ತಿಗೆದಾರರಿಗೆ ನೀಡಿದ್ದು ಅವರು ಬೇಕಾಬಿಟ್ಟಿ ಯಾಗಿ ಅರ್ಧಂಬರ್ಧ ಕೆಲಸ ಮಾಡುತ್ತಿದ್ದು ಎಲ್ಲೆಂದರಲ್ಲಿ ಗುಂಡಿಗಳನ್ನು ಹೊಡೆದು ನಾಗರಿಕರಿಗೆ ದಿನನಿತ್ಯ ತೊಂದರೆ ಅನುಭವಿಸುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತುಂಡು ಗುತ್ತಿಗೆಯನ್ನು ರದ್ದುಗೊಳಿಸಿ ಉತ್ತಮ ರೀತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ತಾಕೀತು ಮಾಡಿದರು.
ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಎಚ್.ಸಿ. ಯೋಗೀಶ್ ರವರು ಸ್ಮಾರ್ಟ್ ಸಿಟಿ ಇಂಜಿನಿಯರ್ ಗಳಿಗೆ ಈ ಕೂಡಲೇ ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಅನಾನುಕುಲತೆ ಆಗದ ರೀತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶಮೀರ್ ಖಾನ್, ಯುವ ಮುಖಂಡರಾದ ಕೆ. ರಂಗನಾಥ್ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಪ್ರವೀಣ್ ಕುಮಾರ್ ನಗರಾಧ್ಯಕ್ಷ ಎಚ್.ಪಿ. ಗಿರೀಶ್ ಚಂದ್ರು ಗೆಡ್ಡೆ ಮಹೇಂದ್ರ ಜೈನ್ ಹಾಗೂ ಬಡಾವಣೆಯ ನಾಗರಿಕರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post