ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಟಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ JNNCE College ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಮೇ 21 ರಂದು ಶನಿವಾರ ಕಾಲೇಜಿನ ಎಂ.ಬಿ.ಎ/ಎಂ.ಸಿ.ಎ ಸಭಾಂಗಣದಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಸಮಾರಂಭ – ‘ ನೆನಪಿನ ಅಂಗಳ 2022 ‘ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು 1980 ರಲ್ಲಿ ಸತ್ಯ ಮೇವ ಜಯತೆ ಎಂಬ ಲಾಛಂನದೊಂದಿಗೆ ಪ್ರಾರಂಭಗೊಂಡ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜು ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ , ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ , ಕಂಪ್ಯೂಟರ್ ಸೈನ್ಸ್ , ಟೆಲಿಕಮ್ಯುನಿಕೇಷನ್, ಇನ್ಫಾರ್ಮೇಶನ್ ಸೈನ್ಸ್ ವಿಭಾಗಗಳ ಸುಮಾರು 17000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿ ಯಶಸ್ಸಿನ ಹಾದಿಯೆಡೆಗೆ ಸಾಗಿದ್ದಾರೆ. ಅಂತಹ ಎಲ್ಲಾ ಹಳೆಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸುವುದು ಕಾರ್ಯಕ್ರಮದ ಆಶಯವಾಗಿದೆ.
ಅಂದು ಬೆಳಿಗ್ಗೆ 9:30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ 1989 ನೇ ಇಸವಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಹಳೆಯ ವಿದ್ಯಾರ್ಥಿ ಹಾಗೂ ಆಂಧ್ರಪ್ರದೇಶ ಸರ್ಕಾರದ ಕೃಷಿ, ಸಹಕಾರ, ಮಾರುಕಟ್ಟೆ ಮತ್ತು ಆಹಾರ ಸಂಸ್ಕರಣಾ ಇಲಾಖೆಯ ನೂತನ ಸಚಿವರಾದ ಕಾಕನಿ ಗೋವರ್ಧನ ರೆಡ್ಡಿ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದು , ವಿಧಾನ ಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 02:00 ಘಂಟೆಗೆ ಹಳೆಯ ವಿದ್ಯಾರ್ಥಿಗಳ ಸಂಘದ ಸರ್ವ ಸದಸ್ಯರ ಸಭೆ ನಡೆಯಲಿದ್ದು ನಂತರ ಹಳೆಯ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಪ್ರಸ್ತುತ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಮೂಲಕ ಹಳೆ ಬೇರು ಹೊಸ ಚಿಗುರಿನ ಸಂಗಮ ವೇದಿಕೆಯಲ್ಲಿ ನಡೆಯಲಿದೆ.
ಪ್ರಶಸ್ತಿಗಳ ಪ್ರಧಾನ : ಅಂದು ವಿವಿಧ ಏಳು ಕ್ಷೇತ್ರಗಳಲ್ಲಿ ಸಾಧನೆಗೈದ ಹಳೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಉದ್ಯಮಶೀಲತೆ ಕ್ಷೇತ್ರದ ಶ್ರೇಷ್ಠ ಸಾಧನೆ , ಉದ್ಯೋಗ ಕ್ಷೇತ್ರದ ಶ್ರೇಷ್ಠ ಸಾಧನೆ ( ಪುರುಷ/ಮಹಿಳೆ ), ಶೈಕ್ಷಣಿಕ ಕ್ಷೇತ್ರದಲ್ಲಿನ ಉತ್ತಮ ಸಾಧನೆಗೆ, ಸಮಾಜ ಕ್ಷೇತ್ರ , ತಾಂತ್ರಿಕ ಹಾಗೂ ಸಂಶೋಧನಾ ಕ್ಷೇತ್ರ ಸೇರಿದಂತೆ ವಿದ್ಯಾಸಂಸ್ಥೆಯ ಅಭಿವೃದ್ಧಿಗೆ ಕೊಡುಗೆ ನೀಡಿದ ಸಾಧಕ ಹಳೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
Also read: ನಗರದಲ್ಲಿ ಇದೇನಿದು ’ನದಿ’ಯೊಂದು ಓಡಿದೆ! ಧಾರಾಕಾರ ಮಳೆಗೆ ಶಿವಮೊಗ್ಗದ ಹಲವೆಡೆ ಅವಾಂತರ
ಸುದ್ದಿಗೋಷ್ಟಿಯಲ್ಲಿ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಡಾ.ಸುರೇಂದ್ರ.ಎಸ್, ಉಪಾಧ್ಯಕ್ಷರಾದ ಎಂ.ಆರ್.ರಾಜೇಂದ್ರಪ್ರಸಾದ್, ಕಾರ್ಯದರ್ಶಿ ಡಾ.ಕೆ.ಎಂ.ಬಸಪ್ಪಾಜಿ, ಪಿ.ಆರ್.ಓ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post