ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಎಪ್ರಿಲ್ ೨೧ರಂದು ಆಚರಿಸಲಾಗುತ್ತಿದ್ದು, ಅದೇ ದಿನ ಉತ್ತಮ ಸೇವೆಗಾಗಿ ನೀಡಲಾಗುವ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರಿ ನೌಕರರ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸರ್ಕಾರದ ಕೋವಿಡ್ ಮಾರ್ಗಸೂಚಿ ಪ್ರಕಾರ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು ಮತ್ತು ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು. ಶಿಷ್ಟಾಚಾರ ಪ್ರಕಾರ ಆಮಂತ್ರಣ ಪತ್ರವನ್ನು ಸಿದ್ಧಪಡಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಾರ್ಯಕ್ರಮ ಆಯೋಜನೆ ಕುರಿತು ಸರ್ಕಾರ ಸ್ಪಷ್ಟ ಮಾರ್ಗಸೂಚಿಯನ್ನು ಪ್ರಕಟಿಸಲಿದ್ದು, ಅದರಂತೆ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.

ಇದುವರೆಗೆ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿತ್ತು. ಇದೀಗ ಸರ್ಕಾರದ ಸೂಚನೆಯಂತೆ ಸರ್ಕಾರಿ ನೌಕರರ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಜನಸ್ನೇಹಿ ಆಡಳಿತದ ಕುರಿತು ತಜ್ಞ ಸಂಪನ್ಮೂಲ ವ್ಯಕ್ತಿಯಿಂದ ಉಪನ್ಯಾಸ ನಡೆಸಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಲಘು ಉಪಾಹಾರದ ವ್ಯವಸ್ಥೆ ಮಾಡಬೇಕು. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಅವರು ಹೇಳಿದರು.

ಸರ್ಕಾರಿ ನೌಕರರ ಸಂಘದ ಮನವಿಯನ್ನು ಪುರಸ್ಕರಿಸಿ ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಸರ್ಕಾರಿ ನೌಕರರ ದಿನಾಚರಣೆಯನ್ನು ಆಯೋಜಿಸಲು ಒಪ್ಪಿಕೊಂಡಿರುವುದು ಎಲ್ಲರಿಗೂ ಸಂತಸ ತಂದಿದೆ. ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಮಟ್ಟದ ಅಧಿಕಾರಿಗಳು, ನೌಕರರ ಸಂಘದ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post