ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಬಾಹ್ಯ ಮೂಲಕ ಹಾಗೂ ಅಂಕಗಳನ್ನು ತಿರಸ್ಕರಿಸಿ, ಪುನಃ ಪರೀಕ್ಷೆ ಬರೆಯಲಿಚ್ಚಿಸುವ ಅಭ್ಯರ್ಥಿಗಳು ಸೇರಿದಂತೆ ಒಟ್ಟು 578ವಿದ್ಯಾರ್ಥಿಗಳಿಗೆ ಜಿಲ್ಲೆಯ ಆಯಾ ತಾಲೂಕು ಕೇಂದ್ರಗಳಲ್ಲಿ ಆಗಸ್ಟ್ 19ರಿಂದ ಸೆಪ್ಟಂಬರ್ 3ರವರೆಗೆ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಅವರು ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಿದ್ದ ಪರೀಕ್ಷೆಗೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂಧಿಗಳೊಂದಿಗೆ ಪರೀಕ್ಷಾ ಪೂರ್ವಸಿದ್ದತೆಯ ಕುರಿತ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಪರೀಕ್ಷೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೇಲುಸ್ತುವಾರಿ ನೋಡಿಕೊಳ್ಳಲು ತ್ರಿಸದಸ್ಯ ಸಮಿತಿಗಳನ್ನು ರಚಿಸಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪ್ರತಿ ವಿದ್ಯಾರ್ಥಿಗೆ ಕೋವಿಡ್ ಸೋಂಕು ತಪಾಸಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸೋಂಕಿತ ಹಾಗೂ ಶಂಕಾಸ್ಪದ ಅಭ್ಯರ್ಥಿಗಳಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಸುರಕ್ಷತಾ ಕ್ರಮಗಳೊಂದಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಸಲು ಅವಕಾಶ ಒದಗಿಸಲಾಗುವುದು ಎಂದರು.


ಇದೇ ಆಗಸ್ಟ್ 28ರಂದು ಬಯಾಲಜಿ ಮತ್ತು ಗಣಿತ ಹಾಗೂ 29ರಂದು ಫಿಜಿಕ್ಸ್ ಮತ್ತು ಕೆಮಿಸ್ಟ್ರಿ ವಿಷಯಗಳಿಗೆ ಸಂಬಂಧಿಸಿದಂತೆ 4 ಅಧಿವೇಶನಗಳಲ್ಲಿ ವೃತ್ತಿಪರ ಪ್ರವೇಶಕ್ಕಾಗಿ ಸಿ.ಇ.ಟಿ. ಪರೀಕ್ಷೆಗಳು ನಡೆಯುತ್ತಿದೆ. 18 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 6,744ವಿದ್ಯಾರ್ಥಿಗಳು ಸದರಿ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಅದರ ಮೇಲುಸ್ತುವಾರಿಗಾಗಿ ೬ಸಮಿತಿಗಳನ್ನು ರಚಿಸಲಾಗಿದೆ ಎಂದರು.
ಸದರಿ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಪ್ರತಿ ವಿದ್ಯಾರ್ಥಿಯು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಪ್ರತಿ ವಿದ್ಯಾರ್ಥಿಗೆ ತಪಾಸಣೆ ನಡೆಸಿ ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದು. ಅಲ್ಲದೇ ಸರ್ಕಾರದ ಕೋವಿಡ್ ಸುರಕ್ಷತಾ ಮಾರ್ಗಸೂಚಿಯನ್ವಯ ಪರೀಕ್ಷೆಗಳು ಕಟ್ಟುನಿಟ್ಟಾಗಿ ನಡೆಯಲಿವೆ ಎಂದರು.

ಈ ಪರೀಕ್ಷೆಗಳಲ್ಲಿ ಭಾಗವಹಿಸಲಿಚ್ಚಿಸುವ ವಿದ್ಯಾರ್ಥಿಯು ಕೇಂದ್ರದೊಳಕ್ಕೆ ಸ್ಮಾರ್ಟ್‌ವಾಚ್, ಮೊಬೈಲ್ ಮುಂತಾದ ಪರಿಕರಗಳು ತರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರದ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪರೀಕ್ಷಾರ್ಥಿಗಳು, ಕರ್ತವ್ಯಕ್ಕೆ ನಿಯೋಜಿತ ಸಿಬ್ಬಂಧಿಗಳಲ್ಲದೇ ಸಾರ್ವಜನಿಕರು ಪ್ರವೇಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಕೇಂದ್ರದ ಸುತ್ತಮುತ್ತಲಿನ ಝೆರಾಕ್ಸ್ ಅಂಗಡಿಗಳು, ಕಂಫ್ಯೂಟರ್ ಸೆಂಟರ್‌ಗಳು ತೆರೆಯುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸಕಾಲದಲ್ಲಿ ಸುರಕ್ಷಿತವಾಗಿ ತಲುಪಿಸಿ, ವಾಪಸ್ ತರಲು ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿ-ಸಿಬ್ಬಂಧಿಗಳು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರದಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಳ್ಳಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜ್ ಕಾತರಕಿ ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















