ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಪಕ್ಷಾತೀತವಾಗಿ ಅಭಿನಂದಿಸಿ, ಸಾರ್ವಜನಿಕವಾಗಿ ಗೌರವಿಸುತ್ತಿರುವುದು ಅತ್ಯಂತ ಸಕಾಲಿಕವಾಗಿದ್ದು, ಅಭಿಮಾನಿಗಳ ಈ ನಡೆಯನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸ್ವಾಗತಿಸಿದೆ.
ಈ ಕುರಿತು ಹೇಳಿಕೆ ನೀಡಿರುವ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವೈದ್ಯ, ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್ ಅವರು, ಪತ್ರಕರ್ತರೊಂದಿಗೆ ವಿಶೇಷವಾದ ಆತ್ಮೀಯ ಬಾಂಧವ್ಯವನ್ನು ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಮುಖ್ಯವಾಗಿ ಕರೋನಾ ಸಂದರ್ಭದಲ್ಲಿ ಪತ್ರಕರ್ತರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ನೆರವು ನೀಡಿದ್ದಾರೆ. ಅಲ್ಲದೇ ಕರ್ತವ್ಯ ನಿರತ ಪತ್ರಕರ್ತರು ಮರಣಹೊಂದಿದ ಸಂದರ್ಭದಲ್ಲಿ ಪರಿಹಾರ ರೂಪದಲ್ಲಿ ಐದು ಲಕ್ಷ ರೂ.ಗಳ ಆರ್ಥಿಕ ನೆರವನ್ನು ಅವರ ಕುಟುಂಬವರ್ಗದವರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಮುಖ್ಯಮಂತ್ರಿಗಳ ಈ ನೆರವು, ಪತ್ರಕರ್ತರಲ್ಲಿ ಅತ್ಮವಿಶ್ವಾಸ ಹೆಚ್ಚಿಸಿದೆ ಎಂದಿದ್ದಾರೆ.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮನವಿಗೆ ಸಂದರ್ಭಾನುಸಾರವಾಗಿ ಸ್ಪಂದಿಸಿ, ಬೇಡಿಕೆಗಳನ್ನು ಈಡೇರಿಸುವುದರ ಮೂಲಕ ಮುಖ್ಯಮಂತ್ರಿ ಅವರು ಪತ್ರಕರ್ತರ ಭಾವನೆಗಳಿಗೆ ಸ್ಪಂದಿಸುತ್ತಿರುವುದು ನಿಜಕ್ಕೂ ಕೂಡಾ ಶ್ಲಾಘನೀಯ ಎಂದರು.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪಕ್ಷಾತೀತವಾಗಿ ಎಲ್ಲರೊಂದಿಗೆ ಬೆರೆಯುತ್ತಿರುವುದು ಅವರ ಮುತ್ಸದ್ಧಿತನದ ಸಂಕೇತ. ಹೀಗಾಗಿ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಸನ್ಮಾನ ಮಾಡುತ್ತಿರುವುದು ಸಕಾಲಿಕ ಎಂದಿದ್ದಾರೆ.
ಮುಖ್ಯಮಂತ್ರಿಗಳಿಗೆ ದೀರ್ಘಾಯುಷ್ಯ ಕೋರಿರುವ ಅವರು, ಅವರ ಈ ಅಧಿಕಾರಾವಧಿಯಲ್ಲಿ ರಾಜ್ಯದ ಎಲ್ಲ ವರ್ಗ, ಸಮುದಾಯ ಅಭಿವೃದ್ಧಿಯನ್ನು ಕಾಣುವಂತಾಗಲಿ ಎಂದು ಆಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post