ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಜಿಲ್ಲೆಗಳ ಪೈಕಿ ಮುಂಚೂಣಿಯಲ್ಲಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಘಟಾನುಘಟಿ ರಾಜಕೀಯ ನಾಯಕರು ಮತದಾನ ಮಾಡಿದರು.
ತಾಲೂಕಿನ ಶಿಕಾರಿಪುರದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ರಾಘವೇಂದ್ರ, ಅಭ್ಯರ್ಥಿ ವಿಜಯೇಂದ್ರ ಸೇರಿದಂತೆ ಕುಟುಂಬದ ಸದಸ್ಯರು, ಕಾರ್ಯಕರ್ತರು ಪಟ್ಟಣದ ಹುಚ್ಚೂರಾಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮತಗಟ್ಟೆಗೆ ತೆರಳಿ ಕುಟುಂಬ ಸಮೇತರಾಗಿ ಮತದಾನ ಮಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಮಾತನಾಡಿ, ಎಲ್ಲರ ಆಶೀರ್ವಾದದಿಂದ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರ ಸ್ಥಾನವನ್ನು ವಿಜಯೇಂದ್ರ ಅವರು ತುಂಬಲಿದ್ದಾರೆ. ಯಡಿಯೂರಪ್ಪ ಅವರ ಚುನಾವಣಾ ರಾಜಕಾರಣದಿಂದ ದೂರ ಸರಿದಿರಬಹುದು, ಆದರೆ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಯಡಿಯೂರಪ್ಪ ಅವರು ಈ ವಯಸ್ಸಿನಲ್ಲಿಯೂ ಪ್ರತಿ ದಿನ ಐದಾರು ಸಭೆ ನಡೆಸಿದ್ದಾರೆ. ರಾಜ್ಯದಾದ್ಯಂತ ಓಡಾಟ ನಡೆಸಿ ಕೆಲಸ ಮಾಡಿದ್ದಾರೆ. ಬಿಜೆಪಿ ಸಂಘಟನೆಗೆ ಶಕ್ತಿ ತುಂಬಿದ್ದಾರೆ ಎಂದರು.
ಈ ಬಾರಿ ರಾಜ್ಯದಲ್ಲಿ ಬಿಜೆಪಿ 123 ರಿಂದ 127 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ ನಗರದ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ Chennabasappa ಅವರು ಇಂದು ಮುಂಜಾನೆ ಕುಟುಂಬ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೋಟೆ ಆಂಜನೇಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಗೋ ಪೂಜೆ ಮಾಡುವ ಮೂಲಕ ಕುಟುಂಬದ ಸಮೇತರಾಗಿ ಮತಗಟ್ಟೆಗೆ ತೆರಳಿ ಮತದಾನಮಾಡಿದರು.
ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ Ashok Naik ರವರು ಹಸೂಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತಗಟ್ಟೆ ಸಂಖ್ಯೆ 207 ರಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು.
ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಿಮ್ಮನೆ ರತ್ನಾಕರ್, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಮತದಾನ ಮಾಡಿದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post