ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಷ್ಟೀಯ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಲಾ ಎಸ್. ಕುಂದರ್ ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಹಿಳಾ ಸೌಲಭ್ಯ ಮತ್ತು ದೌರ್ಜನ್ಯದ ಬಗ್ಗೆ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಾಲೋಚನೆ ನಡೆಸಿದರು.
ಎಲ್ಲಾ ಸರ್ಕಾರಿ ಕಚೇರಿಗಳು ಮಾತ್ರವಲ್ಲದೆ, ಖಾಸಗಿ ಸಂಸ್ಥೆಗಳಲ್ಲೂ ಮಹಿಳೆಯರು ದೂರು ದಾಖಲಿಸಲು ಅನುಕೂಲವಾಗುವಂತೆ ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು. ಮತ್ತು ಈ ಕುರಿತು ಅಧಿಕಾರಿಗಳು ಪರಿಶೀಲಿಸಿ ಖಾತ್ರಿ ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಮಹಿಳಾ ಕಾರ್ಮಿಕರನ್ನು ಕಾರ್ಮಿಕ ಕಾಯ್ದೆ ಅಡಿ ನೋಂದಣಿ ಮಾಡಿಸಿ, ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಮಹಿಳಾ ವಲಸೆ ಕಾರ್ಮಿಕರಿಗೆ ನೀಡಲಾಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಖಿ ಒನ್ ಸ್ಟಾಪ್ ಸೆಂಟರ್ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಸ್ವಂತ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಹಾಗೂ ಸಖಿ ಕೇಂದ್ರದಲ್ಲಿ, ನೊಂದ ಮಹಿಳೆಯರಿಗೆ ವೈದ್ಯಕೀಯ ನೆರವು, ಆಪ್ತ ಸಮಾಲೋಚನೆ, ಕಾನೂನು ನೆರವು ಎಲ್ಲವೂ ಒಂದೇ ಸೂರಿನಡಿ ಒದಗಿಸಲಾಗುತ್ತದೆ. ಈ ಕುರಿತು ಹೆಚ್ಚಿನ ಅರಿವು ಮೂಡಿಸುವ ಕಾರ್ಯ ಗ್ರಾಮೀಣ ಮಟ್ಟದಲ್ಲೂ ನಡೆಯಬೇಕು ಎಂದು ತಿಳಿಸಿದರು.
ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸುವುದಕ್ಕಿಂತ ಆಪ್ತ ಸಮಾಲೋಚನೆ, ಪರಸ್ಪರ ಮಾತುಕತೆಗೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಒಂದು ವರ್ಷ ಅವಧಿಯಲ್ಲಿ 109 ಬಾಲ್ಯ ವಿವೀಹ ಪ್ರಕರಣಗಳು ವರದಿಯಾಗಿದ್ದು ಇವುಗಳ ಪೈಕಿ, 89 ವಿವಾಹಗಳನ್ನು ತಡೆಯಲಾಗಿದೆ. ಬಾಲ್ಯ ವಿವಾಹ ತಡೆಗೆ ಇನ್ನಷ್ಟು ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಕೆ.ಎಂ.ಶಾಂತರಾಜ್, ಎಎಸ್ಪಿ ಡಾ.ಶೇಖರ್, ಸಿಇಒ ವೈಶಾಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post