ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಮಾ.21 ರಿಂದ ಏ.04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು #SSLC Exam ನಡೆಯಲಿದ್ದು, ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಪಂ ಸಿಇಓ ಹೇಮಂತ್ ಎನ್ ತಿಳಿಸಿದರು.
ಕುವೆಂಪು ರಂಗಮಂದಿರದಲ್ಲಿ ಮಾ.17 ರಂದು ಪರೀಕ್ಷೆಗೆ ನಿಯೋಜಿತಗೊಂಡ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾ.21 ರಿಂದ ಏ.4 ರವರೆಗೆ ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. 23162 ರೆಗ್ಯುಲರ್, 266 ಪುನರಾವರ್ತಿತ, 439 ಖಾಸಗಿ ನೋಂದಾಯಿತ, 130 ಖಾಸಗಿ ಪುನರಾವರ್ತಿತ ಸೇರಿ ಒಟ್ಟು 23997 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ಸೂಕ್ತ ವ್ಯವಸ್ಥೆ ಇರುವುದನ್ನು ಬಿಇಓ ಗಳು ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಬೇಕು.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಯಾವುದೇ ಜೆರಾಕ್ಸ್ ಅಂಗಡಿಗಳು ಅಲ್ಲಿ ಕಾರ್ಯ ನಿರ್ವಹಿಸುವಂತಿಲ್ಲ. ಮೊಬೈಲ್ ಸೇರಿದಂತೆ ಯಾವುದೇ ರೀತಿಯ ವಿದ್ಯುನ್ಮಾನ ಉಪಕರಣಗಳಿಗೆ ಅವಕಾಶವಿರುವುದಿಲ್ಲ.
Also read: ಈ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಆರ್’ಎಸ್’ಎಸ್’ನ್ನು ಟೀಕಿಸುತ್ತಾರೆ | ಬೊಮ್ಮಾಯಿ ಹೇಳಿದ್ದೇನು?
ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಓಆರ್‌ಎಸ್, ಪ್ರಥಮ ಚಿಕಿತ್ಸೆ ಕಿಟ್ ಇರಿಸಿಕೊಳ್ಳಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಿಬ್ಬಂದಿ ಮತ್ತು ಜಾಗೃತ ದಳ ಅಧಿಕಾರಿಗಳನ್ನು ಹೊರತುಪಡಿಸಿ ಇನ್ನಾವ ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ ಪ್ರವೇಶ ಇರುವುದಿಲ್ಲ.
ಜಿಲ್ಲೆಯಲ್ಲಿ ಪರೀಕ್ಷೆಗಳು ಪಾರದರ್ಶಕವಾಗಿ ನಡೆದು ಬರುತ್ತಿವೆ. ಈ ಬಾರಿಯ ಪರೀಕ್ಷೆಗಳು ಸಹ ಶಿಸ್ತಿನಿಂದ ಆಗಬೇಕು. ಕಳೆದ ವರ್ಷದಿಂದ ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ವೆಬ್‌ಕಾಸ್ಟಿಂಗ್‌ನಲ್ಲಿ 3 ಹಂತದಲ್ಲಿ ವೀಕ್ಷಣೆ ಮಾಡಲಾಗುತ್ತದೆ. ಈ ಬಾರಿ ಕೃತಕ ತಂತ್ರಜ್ಞಾನ ಬಳಸಿ ಫೇಸ್ ಡಿಟೆಕ್ಷನ್ ಮಾಡಲಾಗುತ್ತಿದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಕೊಠಡಿಯಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು. ಹಾಗೂ ಪರೀಕ್ಷೆ ನಿಯೋಜಿತ ಅಧಿಕಾರಿಗಳು ಎಚ್ಚರಿಕೆಯಿಂದ ಪರೀಕ್ಷೆಗಳನ್ನು ನಡೆಸಬೇಕು ಎಂದ ಅವರು ಜಿಲ್ಲೆಯಲ್ಲಿ ಈ ಬಾರಿಯೂ ಉತ್ತಮ ಫಲಿತಾಂಶ ಲಭಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















