ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅತಿವೃಷ್ಟಿ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

Also read: ಹರ್ ಘರ್ ತಿರಂಗಾ ಅಭಿಯಾನ: ಧ್ವಜ ತಯಾರಿಕೆ ಘಟಕಕ್ಕೆ ಶಾಸಕ ಕುಮಾರ್ ಬಂಗಾರಪ್ಪ ಚಾಲನೆ
ಅತಿವೃಷ್ಟಿಯಿಂದಾಗಿ ಭದ್ರಾವತಿ ತಾಲೂಕಿನಲ್ಲಿ 189ಮನೆಗಳು ಜಲಾವೃತಗೊಂಡಿದ್ದು, ಇವುಗಳ ಪೈಕಿ 82ಮನೆಗಳಿಗೆ 8.20ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆಯಾಗಿ 711 ಮನೆಗಳು ಭಾಗಶಃ ಹಾನಿ, 192ಮನೆಗಳು ತೀವ್ರ ಹಾನಿ ಹಾಗೂ 58ಮನೆಗಳು ಪೂರ್ಣ ಹಾನಿಗೊಂಡಿವೆ. 62 ಕೊಟ್ಟಿಗೆ ಮನೆಗಳು ಸಹ ಹಾನಿಗೀಡಾಗಿವೆ. ರಾಜೀವ್ ಗಾಂಧಿ ವಸತಿ ನಿಗಮದ ಪೋರ್ಟಲ್‍ನಲ್ಲಿ ಹಾನಿ ವಿವರಗಳನ್ನು ದಾಖಲಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಅತಿಮಳೆಯಿಂದಾಗಿ 4 ಮಾನವ ಜೀವ ಹಾನಿ ಉಂಟಾಗಿದ್ದು, 3ಪ್ರಕರಣಗಳಲ್ಲಿ ಒಟ್ಟು 15ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. 9ಜಾನುವಾರುಗಳು ಸಾವಿಗೀಡಾಗಿದ್ದು, 1.50ಲಕ್ಷ ರೂ. ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.

ಅತಿವೃಷ್ಟಿಯಿಂದಾಗಿ ನಾಶನಷ್ಟ ಉಂಟಾಗಬಹುದಾದ 163 ಗ್ರಾಮಗಳನ್ನು ಗುರುತಿಸಲಾಗಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ರಕ್ಷಣಾ ತಂಡಗಳು ಜಿಲ್ಲೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿದ್ದು ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.









Discussion about this post