ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹಾಗೂ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಪ್ರಗತಿ ಪರಿಶೀಲಿಸಿ ಶೀಘ್ರವೇ ಸಮಸ್ಯೆಗಳನ್ನು ಬಗೆಹರಿಸಬೇಕು ಹಾಗೂ ಸಂತ್ರಸ್ತರ ಡಿ-ನೋಟಿಫಿಕೇಷನ್ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲು ಕ್ರಮ ಕೈಗೊಳ್ಳುವಂತೆ ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ.ಶ್ರೀನಿವಾಸ್ ಒತ್ತಾಯಿಸಿದರು.
ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧುಬಂಗಾರಪ್ಪ ಹಾಗೂ ಬಿ.ವೈ.ರಾಘವೇಂದ್ರ ಅವರು ಸಂತ್ರಸ್ತರ ಸಮಸ್ಯೆಯನ್ನು ಬಗೆಹರಿಸಲು ನಾವೇ ಪ್ರಯತ್ನಪಟ್ಟಿರುವವರು ಎಂದು ಹಲವಾರು ಬಾರಿ ಪರಸ್ಪರ ಮಾತಿನ ಕದನ ನಡೆಸಿದ್ದಾರೆ. ಆದರೆ ಈ ಸಮಸ್ಯೆ ಬಗೆಹರಿಪರಿಸುವ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏನು ಕೆಲಸ ಮಾಡಿದ್ದಾರೆ ಎಂಬುದನ್ನು ಸರಿಯಾಗಿ ಪರಿಶೀಲಿಸಿಲ್ಲ ಎಂದು ದೂರಿದರು.
ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್‍ನಲ್ಲಿ ರಾಜ್ಯ ಸರ್ಕಾರದ ಕಾರ್ಯದರ್ಶಿ, ಕೇಂದ್ರ ಸರ್ಕಾರದ ಕಾರ್ಯದರ್ಶಿ ಪರಸ್ಪರ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ ಎಂದು ಆದೇಶಿಸಿದ್ದು, ಇವರಿಬ್ಬರು ಪರಸ್ಪರ ಸಮಸ್ಯೆ ಬಗೆಹರಿಸಲು ತೀರ್ಮಾನಿಸಿದ್ದಾರೆ. ಆದರೆ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಮಸ್ಯೆ ಬಗೆಹರಿಸಲು ಗಂಭೀರವಾದ ಕ್ರಮಕೈಗೊಂಡಿಲ್ಲ. ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳನ್ನು ವಿಚಾರಿಸಿದಾಗ ಜಿಲ್ಲಾಧಿಕಾರಿ ಕಚೇರಿಯಿಂದ ಡಿನೋಟಿಫಿಕೇಷನ್‍ಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎನ್ನುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ವರ್ಷವಾದರೂ ಪ್ರಸ್ತಾವನೆ ಕಳುಹಿಸಲು ವಿಳಂಬವಾಗುತ್ತಿದೆ ಎಂದು ಆರೋಪಿಸಿದರು.
ಸಂತ್ರಸ್ತರ ಕೈಬಿಟ್ಟಿರುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಹಿಂದಿನ ಜಿಲ್ಲಾಧಿಕಾರಿ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ 8-10 ದಿನಗಳಲ್ಲಿ ಕೇಂದ್ರಮಟ್ಟದಲ್ಲಿ ಬಗೆಹರಿಯುವುದು ಎಂದು ಹೇಳಿರುವುದು ಸುಳ್ಳಾಗಿದೆ. ಆದ್ದರಿಂದ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರು ಪ್ರಗತಿ ಪರಿಶೀಲಿಸಿ ವಾಸ್ತವಾಂಶ ತಿಳಿಸಬೇಕು ಎಂದು ಆಗ್ರಹಿಸಿದರು.
ಕೆಪಿಸಿ ಲಿಂಗನಮಕ್ಕಿ ಅಣೆಕಟ್ಟು ಕಟ್ಟಲು ಭೂಸ್ವಾಧೀನ ಮಾಡಿಕೊಂಡ ಸಾವಿರಾರು ಎಕರೆ ಭೂಮಿಯನ್ನು ಇನ್ನೂ ಅಣೆಕಟ್ಟಿಗೆ ಹಾಗೂ ಯೋಜನೆಗೆ ಯಾವುದೇ ರೀತಿ ಬಳಸಿಕೊಂಡಿಲ್ಲ. ಆ ಪ್ರದೇಶದಲ್ಲಿ ಮುಳುಗಡೆ ಸಂತ್ರಸ್ತರು ಹಾಗೂ ಭೂರೈತರು ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕ ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ರೈತರ, ಭೂಮಾಲೀಕರ ಜಮೀನನ್ನು ಸರ್ಕಾರದ ಯಾವುದೇ ಉದ್ದೇಶಕ್ಕೆ ಭೂಸ್ವಾಧೀನ ಮಾಡಿಕೊಂಡರೆ 5 ವರ್ಷದೊಳಗಾಗಿ ಭೂಮಿಯನ್ನು ಬಳಸಿಕೊಳ್ಳಬೇಕು. ಇಲ್ಲವಾದಲ್ಲಿ ಆ ಭೂಮಿಯನ್ನು ಮೂಲ ಮಾಲೀಕರಿಗೆ ವಾಪಾಸ್ ಕೊಡಬೇಕು ಎಂದರು.
ರಾಜ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಮಾಡಿದಾಗ ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ಇನ್ನೂ ನಮಗೆ ಪ್ರಸ್ತಾವನೆ ಬಂದಿಲ್ಲ. ಅವರು ಕಳುಹಿಸಿದ ತಕ್ಷಣ ನಾವು ಕೇಂದ್ರಕ್ಕೆ ಕಳುಹಿಸುತ್ತೇವೆ ಎಂದಿದ್ದಾರೆ. ಆದರೆ ಜಿಲ್ಲಾಡಳಿತದಿಂದ ಇನ್ನೂ ಯಾವುದೇ ಪ್ರಸ್ತಾವನೆ ರಾಜ್ಯ ಸರ್ಕಾರಕ್ಕೆ ಹೋಗಿಲ್ಲ ಸುಮ್ಮನೆ ಉಸ್ತುವಾರಿ ಸಚಿವರು ಮತ್ತು ಸಂಸದರು ನಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಕೂಡಲೇ ಸರ್ಕಾರ ಗಂಭೀರವಾಗಿ ಶರಾವತಿ ಸಂತ್ರಸ್ತರ ಬಗ್ಗೆ ಕ್ರಮಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅಶೋಕ್ ಜಂಬಳ್ಳಿ, ಚಕ್ರಪಾಣಿ ಬಿ.ಎಲ್. ಕೊಡಸರ, ಸುಗಂದರಾಜ ಜೈನ್, ಮಂಜಪ್ಪ ಆರನಬೈಲು, ಮಂಜುನಾಥ್, ಅಶೋಕ ಬೇಸೂರು, ಕೃಷ್ಣಪ್ಪ, ವಸಂತ, ಸರ್ವೊತ್ತಮ, ಕೌಶಿಕ್ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















