ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳು ಸಮಾಜಮುಖಿಯಾಗಿದ್ದು, ನಮ್ಮ ಕುವೆಂಪು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕಾರ್ಯಕ್ರಮಗಳು ಅತ್ಯುತ್ತಮವಾಗಿ ಮೂಡಿಬರುತ್ತಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ ವೀರಭದ್ರಪ್ಪ ಅಭಿಪ್ರಾಯಪಟ್ಟರು.
ಸಹ್ಯಾದ್ರಿ ಕಾಲೇಜಿನ ರಾಧಾಕೃಷ್ಣ ಸಬಾಂಗಣದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ರಾಸೇಯೋ ಅಧಿಕಾರಿಗಳ ಮತ್ತು ಪ್ರಾಂಶುಪಾಲರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಮಾನ್ಯತೆ ದೊರೆಯುವಲ್ಲಿ ಎನ್‌ಎಸ್‌ಎಸ್ ಪ್ರಮುಖ ಪಾತ್ರ ವಹಿಸಿದೆ ಇದಕ್ಕೆ ಡಾ ನಾಗರಾಜ್ ಪರಿಸರ ಇವರ ಶ್ರಮ ಮುಖ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ. ಪದ್ಮೇಗೌಡ, ಕಟೀಲ್ ಆಶೋಕ್ ಪೈ ಸ್ಮಾರಕ ಕಾಲೇಜು ಪ್ರಾಂಶುಪಾಲರಾದ ಡಾ. ಸಂಧ್ಯಾಕಾವೇರಿ ಮಾತನಾಡಿ, ರಾಸೇಯೋ ಪ್ರಾಮುಖ್ಯತೆ ಮತ್ತು ನೂತನ ವಿಶೇಷ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸ್ವಯಂ ಸೇವಕರಲ್ಲಿ ಸಾಮಾಜಿಕ ಭದ್ದತೆ, ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ತಿಳಿಸಿದರು.
ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ ಪ್ರಾಸ್ತಾವಿಕ ನುಡಿಗಳನ್ನಾಡಿ, ಶಿವಮೊಗ್ಗ ಮತ್ತು ಚಿಕ್ಕಮಳೂರು ಎರಡೂ ಜಿಲ್ಲೆಗಳ ಎನ್‌ಎಸ್‌ಎಸ್ ಅಧಿಕಾರಿಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಎನ್‌ಎಸ್‌ಎಸ್ ಸ್ವಯಂ ಸೇವಕರು ಪರಿಸರ ಸಂರಕ್ಷಣೆ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವ ಕಾರ್ಯ ರಾಸೇಯೋ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.
ಸಹ್ಯಾದ್ರಿ ವಿಜ್ನಾನ ಕಾಲೇಜು ಪ್ರಾಂಶುಪಾಲರು ಡಾ. ರಾಜೇಶ್ವರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಸೇಯೋ ಅಧಿಕಾರಿಗಳಾದ ಡಾ ರೇಷ್ಮಾ ನಿರೂಪಿಸಿ, ಡಾ ಶುಭ ಮರವಂತೆ ಪ್ರಾರ್ಥಿಸಿ, ಡಾ. ಶಿವಮೂರ್ತಿ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















