ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ 60ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ಕಾಯಿಲೆಗಳಿಂದ ಬಾಧಿತರಾಗಿರುವ 45ವರ್ಷ ಮೇಲ್ಪಟ್ಟವರು ಸರ್ಕಾರವು ಈಗಾಗಲೇ ಹೊರಡಿಸಿರುವ ಮಾನದಂಡಗಳನ್ನು ಅನುಸರಿಸಿ ಹಾಗೂ ವೈದ್ಯರ ಸಲಹೆಯ ಮೇರೆಗೆ ಕೊರೋನಾ ಸೋಂಕಿನಿಂದ ರಕ್ಷಣೆ ಪಡೆಯುವವರಿಗೆ ಲಸಿಕೆಗಳನ್ನು ನೀಡಲು ಆರೋಗ್ಯ ಇಲಾಖೆಯು ಸಕಲ ಸಿದ್ಧತೆ ಕೈಗೊಂಡಿದೆ ಎಂದು ಗ್ರಾಮೀಣಾಭಿವೃಧ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳೊಂದಿಗೆ ಕೊರೋನಾ ಸೋಂಕಿನ ನಿಯಂತ್ರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಈವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು. ಲಸಿಕೆ ಪಡೆಯಲಿಚ್ಚಿಸುವವರು ತಮ್ಮ ವೈಯಕ್ತಿಕ ವಿವರಗಳನ್ನು ಆನ್‌ಲೈನ್ ಮೂಲಕ ಅಥವಾ ಆರೋಗ್ಯ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಹೆಸರು ನೋಂದಾಯಿಸಿಕೊಂಡು ಉಚಿತವಾಗಿ ಲಸಿಕೆ ಪಡೆಯಬಹುದಾಗಿದೆ. ಅಲ್ಲದೇ ನಗರದ ಆಯ್ದ 12 ಖಾಸಗಿ ಆಸ್ಪತ್ರೆಗಳಲ್ಲಿಯೂ ಲಸಿಕೆ ಲಭ್ಯವಿದ್ದು, 250ರೂ. ಗಳನ್ನು ಪಾವತಿಸಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ನುಡಿದರು.
ಜಿಲ್ಲೆಯ ಜನರ ಬೇಡಿಕೆಗೆ ಪೂರಕವಾಗಿ ಲಸಿಕೆ ದಾಸ್ತಾನಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ. ಒಂದೊಮ್ಮೆ ಹೆಸರು ನೋಂದಾಯಿಸಿಕೊಂಡವರು ನಿಗಧಿಪಡಿಸಿದ ದಿನಾಂಕದಂದು ಲಸಿಕೆ ಪಡೆಯಲು ಸಾಧ್ಯವಾಗದಿದ್ದಲ್ಲಿ ಮರುದಿನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಲಸಿಕೆ ಹೊಂದುವವರು ಅನಗತ್ಯವಾಗಿ ಚಿಕಿತ್ಸಾಲಯಕ್ಕೆ ಓಡಾಡದಂತೆ ಕ್ರಮ ವಹಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲೆಯ 124 ಉಪ ಆರೋಗ್ಯ ಕೇಂದ್ರಗಳಲ್ಲಿ, 103 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, 7 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 6 ತಾಲೂಕು ಆಸ್ಪತ್ರೆಗಳಲ್ಲಿ, ಸಿಮ್ಸ್, ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜುಗಳ ತಲಾ ಒಂದು ಕೇಂದ್ರಗಳಲ್ಲಿ ಹಾಗೂ ಸ್ಥಳೀಯ ನೋಂದಾಯಿತ 12 ಖಾಸಗಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 173 ಕೇಂದ್ರಗಳಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಸಿಮ್ಸ್‌ನಲ್ಲಿ ಕೊರತೆಯಿರುವ ಸಿಬ್ಬಂದಿಗಳನ್ನು ಭರ್ತಿ ಮಾಡಿಕೊಳ್ಳಲು ತಾತ್ಕಾಲಿಕ ಅನುಮತಿ ದೊರೆತಿದ್ದು, ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಸಿಮ್ಸ್‌ನ ಆಡಳಿತ ವ್ಯವಸ್ಥೆ ಹಾಗೂ ಕೋವಿಡ್ ನಿಯಂತ್ರಣದ ಹಿನ್ನಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಏಪ್ರಿಲ್ 17ರ ನಾಳೆ ಬೆಳಿಗ್ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ , ಸಿಮ್ಸ್ ಆಡಳಿತಾಧಿಕಾರಿ ಡಾ. ಸಿದ್ಧಪ್ಪ, ಡಾ. ಶಂಕರಪ್ಪ, ಡಾ. ನಾಗರಾಜ್‌ನಾಯ್ಕ್, ಡಾ. ಶಮಾ ಸೇರಿದಂತೆ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















