ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅ.17 ರ ಬೆಳಿಗ್ಗೆ 11-00 ಕ್ಕೆ ಕುವೆಂಪು ರಂಗಮಂದಿರದಲ್ಲಿ ವಾಲ್ಮೀಕಿ ಜಯಂತಿ #Valmiki Jayanthi ಆಚರಣೆ ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ #DC Gurudutta Hegde ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಾಲ್ಮೀಕಿ ಜಯಂತಿ ಆಚರಣೆ ಕುರಿತು ವಿವಿಧ ಸಮಾಜದ ಮುಖಂಡರೊಂದಿಗೆ ಚರ್ಚಿಸಲು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅ.17 ರ ಬೆಳಿಗ್ಗೆ 9 ಗಂಟೆಯಿಂದ ಮಹರ್ಷಿ ವಾಲ್ಮೀಕಿರವರ ಭಾವಚಿತ್ರವನ್ನು ಕಲಾಮೇಳದೊಂದಿಗೆ ಮೆರವಣಿಗೆ ಮೂಲಕ ಕುವೆಂಪು ರಂಗಮಂದಿರಕ್ಕೆ ತರಲಾಗುವುದು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ, ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದ ಅವರು, ಮಹರ್ಷಿ ವಾಲ್ಮೀಕಿರವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡುವ ಉಪನ್ಯಾಸಕರನ್ನು ಆಯ್ಕೆ ಮಾಡಿ ತಿಳಿಸುವಂತೆ ಹೇಳಿದರು.
ಮೆರವಣಿಗೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಾನಪದ ಕಲಾತಂಡಗಳನ್ನು ನೀಡುವಂತೆ ತಿಳಿಸಿದ ಅವರು, ಕಾರ್ಯಕ್ರಮಕ್ಕೆ ಅಗತ್ಯವಾದ ಕುಡಿಯುವ ನೀರು, ರಂಗಮಂದಿರ ಸ್ವಚ್ಚತೆ, ವಿದ್ಯುತ್ ಅಲಂಕಾರ ವ್ಯವಸ್ಥೆ, ಭಾವಚಿತ್ರ, ತಳಿರು-ತೋರಣದ ವ್ಯವಸ್ಥೆಯನ್ನು ಮಹಾನಗರಪಾಲಿಕೆ ವತಿಯಿಂದ ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿ 10 ನೇ ತರಗತಿ ಮತ್ತು ಪಿಯುಸಿ ಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಸ್ನಾತಕೋತ್ತರ ಪದವಿಯಲ್ಲಿ ರ‍್ಯಾಂಕ್ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ, ಉತ್ಸಾಹದಿಂದ ಆಚರಣೆ ಮಾಡಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಶ್ರೀನಿವಾಸ್, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಟಿ ಬಳಿಗಾರ್, ವಾಲ್ಮೀಕಿ ಸಮಾಜದ ಮುಖಂಡರಾದ ಚಂದ್ರಕಾಂತ್,ಮೋಹನ್, ಹುಚ್ಚರಾಯಪ್ಪ,ಮಂಜಪ್ಪ, ಡಿಎಸ್‌ಎಸ್ ಮುಖಂಡರಾದ ರಾಜಕುಮಾರ್, ಗುರುಮೂರ್ತಿ, ಹಾಲೇಶಪ್ಪ, ಆನಂದ್, ಹಾಗೂ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post