ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಗಸ್ಟ್ 28ರಂದು ನಡೆಯಲಿರುವ ವಿಶ್ವ ದಾಖಲೆಯ ಯೋಗ ಪ್ರದರ್ಶನ `ಯೋಗಥಾನ್’ Yogathaan ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 25ಸಾವಿರ ಯೋಗಪಟುಗಳು ಭಾಗವಹಿಸುವ ಗುರಿಯನ್ನು ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.
`ಯೋಗಥಾನ್’ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ನಗರದ ಹೊರವಲಯದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಬೆಳಿಗ್ಗೆ 6.30ಕ್ಕೆ ಸರಿಯಾಗಿ ದೇಶಾದ್ಯಂತ ಒಂದೇ ಅವಧಿಯಲ್ಲಿ ಈ ಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಎಲ್ಲಾ ಶಾಲಾ ಕಾಲೇಜುಗಳನ್ನು ಸಂಪರ್ಕಿಸಿ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
Also read: ಸೊರಬ: ಒಂದು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಕುಮಾರ್ ಬಂಗಾರಪ್ಪ ಚಾಲನೆ
ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ವಿವಿಧ ಸಮಿತಿಗಳನ್ನು ರಚಿಸಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ, ಬೆಳಗ್ಗಿನ ಉಪಾಹಾರ, ಕುಡಿಯುವ ನೀರು ವ್ಯವಸ್ಥೆ ಮಾಡಲಾಗುವುದು. ಕಾರ್ಯಕ್ರಮ ಆಯೋಜನೆ ಮಾಡುವ ಸ್ಥಳದಲ್ಲಿ ಸ್ವಚ್ಛತೆಯನ್ನು ಕಾಪಾಡಲು, ತಾತ್ಕಾಲಿಕ ಶೌಚಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಎನ್ಸಿಸಿ, ಎನ್ಎಸ್ಎಸ್, ಸ್ಕೌಟ್ ಮತ್ತು ಗೈಡ್ಸ್ಗಳ ಸ್ವಯಂಸೇವಕರ ಸೇವೆಯನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಯೋಗ ಪ್ರದರ್ಶನದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಈಗಿನಿಂದಲೇ ತರಬೇತಿ ನೀಡುವ ಕಾರ್ಯವನ್ನು ಆರಂಭಿಸಬೇಕು. ಸರ್ಕಾರ ಈಗಾಗಲೇ 21 ಆಸನಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಈ ಆಸನಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವ ಯೋಗ ಪಟುಗಳು ಅಭ್ಯಾಸ ಮಾಡಬೇಕು ಎಂದರು.
13 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಎಸ್ಸಿ ಮತ್ತು ಎಸ್ಟಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸೂಕ್ತ ಆರೋಗ್ಯ ಸೇವೆ, ತುರ್ತು ಸೇವೆಗಳನ್ನು ಒದಗಿಸಲು ವ್ಯವಸ್ಥೆ ಮಾಡಬೇಕು. ಬೇರೆ ತಾಲೂಕುಗಳಿಂದ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಆಗಮಿಸಲು ಖಾಸಗಿ ಶಾಲಾ ಕಾಲೇಜುಗಳು ತಮ್ಮ ವಾಹನ ಒದಗಿಸಲು ಕೋರಲಾಗುವುದು ಎಂದು ಹೇಳಿದರು.
ಶಿವಮೊಗ್ಗ ಉಪವಿಭಾಗಾಧಿಕಾರಿ ದೊಡ್ಡಗೌಡರ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post