ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಣ ಬಹು ಮುಖ್ಯವಾಗಿದ್ದು ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಶಿಕ್ಷಕರು ಹಾಗೂ ಅಧಿಕಾರಿಗಳು ಮಕ್ಕಳನ್ನು ಶಾಲೆಗೆ ಮರಳಿ ಕರೆ ತರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಅಪರ್ಣಾ ಕೊಳ್ಳ ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಜಿಲ್ಲಾ ಡಯಟ್ ತರಬೇತಿ ಸಂಸ್ಥೆಯಲ್ಲಿ “ ಬಾಲನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೊಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳು, ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ” ಕುರಿತು ಭಾಗೀದಾರ ಇಲಾಖೆಯ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರವು ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ, ಪೌಷ್ಟಿಕ ಆಹಾರ, ವಸತಿ ಸೌಲಭ್ಯ, ಪಠ್ಯ ಪುಸ್ತಕಗಳನ್ನು ನೀಡುತ್ತಿದೆ. ಆದರೂ ಮಕ್ಕಳು ಶಾಲೆಗೆ ಗೈರಾಗುತ್ತಿದ್ದಾರೆ. ಇದನ್ನು ಅಧಿಕಾರಿಗಳು ಹಾಗೂ ಶಿಕ್ಷಕರು ಗಂಭೀರವಾಗಿ ಪರಿಗಣಿಸಿ ಮಕ್ಕಳು ಹಾಗೂ ಅವರ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿ ಶಾಲೆಗೆ ಮಕ್ಕಳನ್ನು ಕರೆತರಬೇಕು. ಸರ್ಕಾರಿ ಸೌಲಭ್ಯಗಳನ್ನು ಮಕ್ಕಳು ಪಡೆದು ಶಾಲೆಯಲ್ಲಿ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆಗಳ ಬಗ್ಗೆ ಮಕ್ಕಳಿಗೆ ಶಾಲೆಯಲ್ಲಿ ಶಿಕ್ಷಕರು ಅರಿವು ಮೂಡಿಸಬೇಕು. ತೆರೆದ ಮನೆ ಕಾರ್ಯಕ್ರಮದಡಿಯಲ್ಲಿ ಪೊಲೀಸ್ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ತಮ್ಮ ಹಕ್ಕುಗಳ ಬಗ್ಗೆ ತಿಳಿಸಬೇಕು. ಶಿಕ್ಷಕರು ಹಾಗೂ ಅಧಿಕಾರಿಗಳು ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ಬಾಲ್ಯ ವಿವಾಹ ಹಾಗೂ ಪೊಕ್ಸೋದಂತಹ ಅನಿಷ್ಟ ಪದ್ದತಿ ಕುರಿತು ಜಾಗೃತಿ ಮೂಡಿಸಿ ಅದನ್ನು ತಡೆಯಬೇಕು, ರಜೆ ದಿನಗಳಲ್ಲಿ ಶಾಲಾ ಆವರಣದಲ್ಲಿ ಅನೈತಿಕ ಚಟುವಟಿಕೆಗಳು ನಡೆಯದಂತೆ ಪೊಲೀಸ್ ವ್ಯವಸ್ಥೆ ಬಿಗಿಗೊಳಿಸಬೇಕು ಎಂದರು.
ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದರೆ ಹಾಗೂ ಶಾಲೆಗಳಲ್ಲಿ ಸರ್ಕಾರ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸದಿದ್ದಲ್ಲಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ಮಕ್ಕಳು ತಮ್ಮ ಅಹವಾಲು ನೀಡಬಹುದು ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್.ಆರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಮಕ್ಕಳ ರಕ್ಷಣೆಗೋಸ್ಕರ ಮಿಷನ್ ಸುರಕ್ಷಾ ವೆಬ್‌ಸೈಟ್‌ನ್ನು ಒಂದು ವಾರದಲ್ಲಿ ಬಿಡುಗಡೆ ಮಾಡಲಿದ್ದು, ಇದು ಬಾಲ್ಯವಿವಾಹ ಹಾಗೂ ಪೋಕ್ಸೋ ಪ್ರಕರಣ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ 214 ಪೋಕ್ಸೋ ಹಾಗೂ 54 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಇಲಾಖೆಯು ಏಪ್ರಿಲ್‌ನಿಂದ ಡಿಸೆಂಬರ್ ವರೆಗೂ 60 ಬಾಲ್ಯವಿವಾಹಗಳನ್ನು ತಡೆಗಟ್ಟಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ‘ಒಂದು ಬಾಲ್ಯ ವಿವಾಹ ತಡೆಗಟ್ಟಿದರೆ ಒಂದು ಕುಟುಂಬದ ಜೀವ ಉಳಿಸಿದಂತೆ’ ಈ ನಿಟ್ಟಿನಲ್ಲಿ ಮಕ್ಕಳಿಗೆ ರಕ್ಷಣೆ ನೀಡಲು ಸರ್ಕಾರ ಅನೇಕ ಕಾಯ್ದೆಗಳನ್ನು ಜಾರಿ ಮಾಡಿದ್ದು ಇದನ್ನು ನಾವೆಲ್ಲರೂ ಚಾಚೂ ತಪ್ಪದೆ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಿ ಬಾಲ್ಯವಿವಾಹ ಮುಕ್ತ ಸಮಾಜವನ್ನು ನಿರ್ಮಿಸಬೇಕು. ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದಲ್ಲಿ ಮಕ್ಕಳು ಸೇರಿದಂತೆ ಶಿಕ್ಷಕರೂ ಸಹ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ.ಜಿ.ಕಾರ್ಯಪ್ಪ, ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯೆ ರೇಖಾ.ಜಿ.ಎಂ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ರತ್ನ, ಡಯಟ್ ಪ್ರಾಂಶುಪಾಲರಾದ ಹೆಚ್.ಆರ್. ಕೃಷ್ಣಮೂರ್ತಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















