ಕಲ್ಪ ಮೀಡಿಯಾ ಹೌಸ್ | ಮುಂಬೈ |
ಭಾರತರತ್ನ, ಗಾನಕೋಗಿಲೆ, ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್(92 ಅವರು ಇಂದು ವಿಧಿವಶರಾಗಿದ್ದಾರೆ.
ಲತಾ ಮಂಗೇಶ್ಕರ್ ಅವರು ಕೋವಿಡ್ ಸೋಂಕಿನ ಸೌಮ್ಯ ಲಕ್ಷಣ ಕಂಡುಬಂದು ಕಳೆದ ಜ.8ರಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದರು. ಕೆಲವು ದಿನಗಳ ನಂತರ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿದ್ದರಿಂದ ವೆಂಟಿಲೇಟರ್ ನೆರವನ್ನು ತೆಗೆಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.
ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಮಂಗೇಶ್ಕರ್ ಅವರು 1942ರಲ್ಲಿ 13ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.
ಸುಮಾರು 36 ಭಾಷೆಗಳಲ್ಲಿ 50 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿರುವ ಇವರು, ಭಾರತದ ನೈಟಿಂಗೇಲ್(ಗಾನ ಕೋಗಿಲೆ) ಎಂದು ಕರೆಯಲ್ಪಡುತ್ತಿದ್ದರು.ಇವರ ಸಾಧನೆಗೆ ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಬಹು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಗೌರವಗಳು ಸಂದಿವೆ.
ಅವರು ಹಾಡಿದ ’ಲಗ್ ಜಾ ಗಲೇ’, ’ಯೇ ಗಲಿಯಾನ್ ಯೇ ಚೌಬಾರಾ’, ’ರ್ಪ್ಯಾ ಕಿಯಾ ತೊ ಡರ್ನಾ ಕ್ಯಾ’, ’ಬಹೋನ್ ಮೇ ಚಲೇ ಆವೋ’, ’ರ್ವೀ ಜರಾ’ದ ’ತೇರೆ ಲಿಯೇ’ ಮತ್ತು ಇನ್ನೂ ಅನೇಕ ಹಾಡುಗಳು ಜನಪ್ರಿಯವಾಗಿವೆ.
ಲತಾ ಅವರು ಬಹುಶಃ ಹಿಂದಿಯ ಪ್ರತಿಯೊಬ್ಬ ಸಂಗೀತ ನಿರ್ದೇಶಕರ ಜೊತೆ ಕೆಲಸ ಮಾಡಿದ್ದಾರೆ. ಇದಕ್ಕೆ ಒಂದೇ ಅಪವಾದವೆಂದರೆ ಓ.ಪಿ. ನಯ್ಯರ್. ಅದೇ ರೀತಿ ಅವರೊಂದಿಗೆ ಹಿಂದಿಯ ಪ್ರತಿಯೊಬ್ಬ ಗಾಯಕನ ಜೊತೆಯೂ ಹಾಡಿದ್ದಾರೆ. ಹಿಂದಿ ಚಿತ್ರರಂಗದ ಬಹುತೇಕ ನಟಿಯಾರಿಗಾಗಿ ಲತಾ ಹಾಡಿದ್ದಾರೆ. ಐವತ್ತರ ದಶಕದಲ್ಲಿ ಮೇಲೇರಿದ ಅವರ ಕೀರ್ತಿ ಪತಾಕೆ ಕೆಳಕ್ಕೆ ಇಳಿಯಲೇ ಇಲ್ಲ. ಗಜಲ್, ಪ್ರೇಮಗೀತೆ, ಭಜನೆ, ಜನಪದ ಗೀತೆ, ಯುಗಳಗೀತೆ, ಕ್ಲಬ್ ಸಾಂಗ್ … ಹೀಗೆ ಪ್ರತಿಯೊಂದೂ ಬಗೆಯ ಹಾಡುಗಳನ್ನು ಲತಾ ಹಾಡಿದ್ದಾರೆ. ಹಿಂದಿಯಲ್ಲದೆ ಭಾರತದ ಪ್ರತಿಯೊಂದು ಭಾಷೆಯಲ್ಲೂ ಅವರು ಹಾಡಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅವರನ್ನು “ಲತಾ ದೀದಿ” ಎಂದೇ ಕರೆಯುತ್ತಾರೆ. ಲತಾ ಅವರು ವಿವಾಹವಾಗಲಿಲ್ಲ. ತಮ್ಮ ಜೀವನವನ್ನು ಸಂಗೀತಕ್ಕೇ ಮುಡಿಪಾಗಿಟ್ಟರು. ಲತಾ ಅವರ ಕುಟುಂಬದಲ್ಲಿ ಪ್ರತಿಯೊಬ್ಬರೂ ಸಂಗೀತ ಕ್ಷೇತ್ರದಲ್ಲಿರುವುದು ಒಂದು ವಿಶೇಷ. ಆಶಾ ಮತ್ತು ಲತಾ, ಉಷಾ ಮತ್ತು ಲತಾ, ಮೀನಾ ಮತ್ತು ಲತಾ ಹಾಡಿರುವ ಕೆಲವು ಯುಗಳಗೀತೆಗಳೂ ಪ್ರಸಿದ್ಧವಾಗಿವೆ. ತಮ್ಮ ಹೃದಯನಾಥ್ ಮಂಗೇಷ್ಕರ್ ಸಂಗೀತ ನಿರ್ದೇಶನದಲ್ಲಿ ಲತಾ ಅನೇಕ ಗೀತೆಗಳನ್ನು ಹಾಡಿದ್ದಾರೆ – ಉದಾ. ಮೀರಾ ಭಜನೆಗಳು. ಲತಾ ಅವರು “ಲೇಕಿನ್” ಎಂಬ ಕಲಾತ್ಮಕ ಚಿತ್ರವನ್ನು ನಿರ್ಮಿಸಿದರು.ಚೀನಾ-ಭಾರತ ಯುದ್ಧದಲ್ಲಿ ಭಾರತದ ಅನೇಕ ಸೈನಿಕರು ತಮ್ಮ ಪ್ರಾಣ ತೆತ್ತರು. ಇವರ ನೆನಪಿನಲ್ಲಿ ಒಂದು ವಿಶೇಷಗೀತೆಯನ್ನು ಪ್ರದೀಪ್ ಎಂಬ ಕವಿ ರಚಿಸಿದರು. ಈ ಗೀತೆಯನ್ನು ಸಿ. ರಾಮಚಂದ್ರ ಅವರ ಸಂಗೀತ ನಿರ್ದೇಶನದಲ್ಲಿ ಲತಾ ಅವರು 1963 ಜನವರಿ 27ರಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಹಾಡಿದರು. “ಐ ಮೇರೆ ವತನ್ ಕೇ ಲೋಗೋಂ, ಜರಾ ಆಂಖ್ ಮೇ ಭರಲೋ ಪಾನಿ … ” ಎಂದು ಪ್ರಾರಂಭವಾಗುವ ಗೀತೆಯನ್ನು ಕೇಳಿ ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಅವರ ಕಣ್ಣಿನಲ್ಲಿ ನೀರಾಡಿತು. ಅವರು ಲತಾ ಮಂಗೇಶ್ಕರ್ ಅವರೊಂದಿಗೆ ಕಾರ್ಯಕ್ರಮದ ನಂತರ ಮಾತಾಡಿ “ನೀನು ನನ್ನನ್ನು ಅಳಿಸಿಬಿಟ್ಟೆ,” ಎಂದು ಭಾವುಕರಾಗಿ ಹೇಳಿದರಂತೆ. ಈ ಹಾಡನ್ನು ನವದೆಹಲಿಯಲ್ಲಿ ಪ್ರತಿ ಜನವರಿ 26ರ ಸಮಾರಂಭದಲ್ಲಿ ಕೇಳಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post