ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದ್ದು, ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆಯಲ್ಲಿ ಪಠ್ಯಾಂಶಗಳನ್ನು ಅಂತಿಮಗೊಳಿಸಿಲ್ಲ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಗಮನಿಸಿದ್ದು, ಈ ಶೈಕ್ಷಣಿಕ ವರ್ಷ ಪ್ರಾರಂಭವಾಗದಿರುವುದರಿಂದ ನಮಗೆ ಎಷ್ಟು ದಿನಗಳು ದೊರೆಯುತ್ತವೆಂಬುದು ಇನ್ನೂ ಅಸ್ಪಷ್ಟವಾಗಿರುವುದರಿಂದ ಸಿಲೆಬಸ್‍ನ್ನು ಅಂತಿಮಗೊಳಿಸಿಲ್ಲ. ಮುಂದಿನ ದಿನಗಳಲ್ಲಿ ಲಭ್ಯ ಅವಧಿಯ ಆಧಾರದ ಮೇಲೆ ಮಾಡಲಾಗುವ ಪಠ್ಯ ಕಡಿತವು ವೈಜ್ಞಾನಿಕವಾಗಿರಲಿದ್ದು, ಯಾವುದೇ ಪಠ್ಯವನ್ನು ಅನಗತ್ಯವಾಗಿ ಕಡಿತ ಮಾಡುವುದಿಲ್ಲ. ಹಾಗಾಗಿ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲ ಎಂದು ಹೇಳಿದ್ದಾರೆ.
ಈ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಾಗಬಹುದಾದ ಬೋಧನಾ ಅವಧಿ, ಸಮೂಹಮಾಧ್ಯಮಗಳು ಅಥವಾ ತಂತ್ರಜ್ಞಾನಾಧಾರಿತ ಬೋಧನೆಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬಹುದಾದ ಪಠ್ಯಗಳನ್ನು ಗುರುತಿಸಿ ಇಲಾಖೆಯ ತಂತ್ರಜ್ಞಾನಾಧಾರಿತ ಕಲಿಕಾ ನೀತಿಗನುಗುಣವಾಗಿ ಪಠ್ಯ ಬೋಧನೆಯ ಮಾದರಿಗಳನ್ನು ರಚನೆ ಮಾಡಲು ತಾವು ಇಲಾಖಾಧಿಕಾರಿಗಳಿಗೆ ಸೂಚಿಸಿದ್ದು, ಈ ಎಲ್ಲ ಕ್ರಮಗಳು ಅಂತಿಮಗೊಳ್ಳುವ ಪೂರ್ವದಲ್ಲಿಯೇ ಅಚಾತುರ್ಯದಿಂದ ಇಲಾಖೆಯ ಜಾಲತಾಣದಲ್ಲಿ ಅನುಮೋದಿತವಾಗದ ಪಠ್ಯಾಂಶಗಳನ್ನು ಪ್ರಕಟಿಸಲಾಗಿದೆ. ಇದನ್ನು ಕೂಡಲೇ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತಿಹಾಸಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ, ದಾಖಲೆಯ, ಸಂಗತಿಯ ಐತಿಹ್ಯವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರವು ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತದೆಯೇ ವಿನಾ ಕೆಡವುವ ಕೆಲಸವನ್ನು ಮಾಡುವುದಿಲ್ಲ. ಇದು ಅನವಶ್ಯಕ ರಾಜಕೀಯ ಗೊಂದಲಗಳಿಗೆ ಅವಕಾಶ ಕಲ್ಪಿಸಬೇಕಿಲ್ಲ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get In Touch With Us info@kalpa.news Whaಪಠ್ಯ ಪುಸ್ತಕ, tsaಪಠ್ಯ ಪುಸ್ತಕ,pp: 9481252093
Discussion about this post