ಕಲ್ಪ ಮೀಡಿಯಾ ಹೌಸ್ | ಸೊರಬ |
ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಸಲು ಸರ್ಕಾರ ಜಾರಿಗೆ ತಂದ ಸ್ವಾಮಿ ವಿವೇಕಾನಂದ ಯುವಕರ ಸ್ವ ಸಹಾಯ ಸಂಘ ರಚನೆಯಲ್ಲಿ ಸಾಮಾಜಿಕ ನ್ಯಾಯ ಕಣ್ಮರೆಯಾಗಿದ್ದು, ಆಡಳಿತ ಪಕ್ಷದ ಮುಖಂಡರೇ ಸಂಘಕ್ಕೆ ಸದಸ್ಯರ ಆಯ್ಕೆ ಮಾಡುತ್ತಿದ್ದಾರೆ ಎಂದು ಡಿಎಸ್‌ಎಸ್ ತಾಲೂಕು ಸಂಚಾಲಕ ಮಹೇಶ ಶಕುನವಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಾಲೂಕಿನಲ್ಲಿ ಗ್ರಾಮ ಪಂಚಾಯ್ತಿವಾರು ಸ್ವಸಹಾಯ ಸಂಘಗಳ ರಚನೆ ಮಾಡುತ್ತಿದ್ದು, ಪಂಚಾಯ್ತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ, ಬಿಜೆಪಿಯ ಪೇಜ್ ಪ್ರಮುಖರು ಮತ್ತು ಮುಖಂಡರು ರಚಿಸಿದ ಪಟ್ಟಿಗೆ ಅನುಮೋದನೆ ನೀಡುವಂತೆ ಪಂಚಾಯ್ತಿಗೆ ಕಳುಹಿಸಲಾಗಿದೆ ಎನ್ನುವ ಮಾಹಿತಿ ದೊರೆತಿದೆ. ಕೂಡಲೇ ಈ ಪಟ್ಟಿಯನ್ನು ರದ್ದುಗೊಳಿಸಿ, ಸಮಾನತೆಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಗ್ರಾಮ ಪಂಚಾಯ್ತಿಗೆ ಒಂದರಂತೆ ಸ್ವಾಮಿ ವಿವೇಕಾನಂದ ಯುವಕರ ಸ್ವಸಹಾಯ ಗುಂಪುಗಳನ್ನು ರಚಿಸಲು ಸರ್ಕಾರ ಅನುಮೋದನೆ ನೀಡಿದೆ. ಶಾಸಕರ ಅಣತಿಯಂತೆ ಬಿಜೆಪಿ ಮುಖಂಡರು ಪಟ್ಟಿ ಸಿದ್ದಪಡಿಸಿದ್ದಾರೆ. ಆದರೆ, ಹಲವು ಗ್ರಾಮ ಪಂಚಾಯ್ತಿಗಳಲ್ಲಿ ಒಂದೇ ಗ್ರಾಮಕ್ಕೆ ಆದ್ಯತೆ ನೀಡಲಾಗಿದೆ. ಪಕ್ಷಾತೀತವಾಗಿ, ಜಾತ್ಯಾತೀತವಾಗಿ ರಚನೆಯಾಗಬೇಕಾದ ಸಂಘದಲ್ಲಿ ಒಂದು ಪಕ್ಷಕ್ಕೆ ಮಾತ್ರ ಸೀಮಿತಗೊಳಿಸುವ ಕಾರ್ಯ ಮೇಲ್ನೋಟಕ್ಕೆ ಗೋಚರಿಸುತ್ತಿದೆ. ಸರ್ಕಾರದ ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕು. ಸಂಘದ ರಚನೆಯಲ್ಲಿ ಅಧಿಕಾರಿಗಳ ಮುಖೇನ ಬಿಜೆಪಿ ಮುಖಂಡರು ಒತ್ತಡ ಹೇರುತ್ತಿರುವ ಕಾರ್ಯ ಖಂಡನೀಯವಾಗಿದೆ. ಜನವರಿ ೬ ರಂದು ಶಾಸಕರು ಸಂಘಗಳ ಉದ್ಘಾಟನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ರಚನೆಯಾದ ಪಟ್ಟಿಯನ್ನು ರದ್ದುಗೊಳಿಸಬೇಕು. ಇಲ್ಲವಾದಲ್ಲಿ ಸಮಿತಿಯ ವತಿಯಿಂದ ಎಲ್ಲಾ ಗ್ರಾಮ ಪಂಚಾಯ್ತಿಗಳ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಡಿಎಸ್‌ಎಸ್ ರಾಜ್ಯ ವಿಭಾಗೀಯ ಸಂಚಾಲಕ ಗುರುರಾಜ್, ತಾಲೂಕು ಸಂಘಟನಾ ಸಂಚಾಲಕ ನಾಗರಾಜ್ ಹುರುಳಿಕೊಪ್ಪ, ಸಲಹೆಗಾರ ನಾಗಪ್ಪ ಮಾಸ್ತರ್ ಸೇರಿದಂತೆ ಇತರರಿದ್ದರು.
ವರದಿ: ಮಧುರಾಮ್, ಸೊರಬ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















