ಕಲ್ಪ ಮೀಡಿಯಾ ಹೌಸ್
ಸೊರಬ: ಗ್ರಾಮ ಪಂಚಾಯತಿಯಲ್ಲಿ ರಾಜಕೀಯ ಬೆರಸದೆ ಹಳ್ಳಿಗಳ ಅಭಿವೃದ್ಧಿಗೆ ಸದಸ್ಯರು ಒಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಜನತೆಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಗ್ರಾಮೀಣಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಪಟ್ಟಣದ ರಂಗಮಂದಿರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು, ಜಿಪಂ ಮತ್ತು ತಾಪಂ ಸಹಯೋಗದಲ್ಲಿ ಹಮ್ಮಿಕೊಂಡ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರುಗಳ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗಬೇಕಾದರೆ ಸ್ಥಳೀಯ ಜನ ಪ್ರತಿನಿಧಿಗಳು ಸರ್ಕಾರದ ಯೋಜನೆಗಳನ್ನು ತಿಳಿದುಕೊಳ್ಳಬೇಕು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜೊತೆ ಚರ್ಚೆಗಳು ನಡೆಯಬೇಕು. ನಿತ್ಯ ಮನೆಗಳಿಗೆ ಭೇಟಿ ನೀಡಿ, ಜನತೆಯ ಮೂಲಭೂತ ಸಮಸ್ಯೆಗಳ ಕುರಿತು ಅರಿತುಕೊಳ್ಳಬೇಕು. ಗ್ರಾಮದ ಕೆರೆಗಳ ಅಭಿವೃದ್ಧಿ, ಸ್ವಚ್ಛತೆ, ಕುಡಿಯುವ ನೀರು, ಜಲಸಂರಕ್ಷಣೆ ಅನೇಕ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಬಹುದಾಗಿದೆ ಎಂದರು.
ಅಧಿಕಾರಿಗಳು ಗ್ರಾಮ ಸಭೆಗೆ ಕಡ್ಡಾಯವಾಗಿ ಹಾಜರಾಗಿ ಅಲ್ಲಿಯ ಆಗಬೇಕಾದ ಕೆಲಸಗಳನ್ನು ಪಟ್ಟಿ ಮಾಡಿ ಅವುಗಳ ಬಗ್ಗೆ ಒತ್ತು ನೀಡಬೇಕು, ಗ್ರಾಮ ಸಭೆಗೆ ಅಧಿಕಾರಿಗಳು ಗೈರಾದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಗುರುವಾರ ಕುಪ್ಪಗಡ್ಡೆ ಗ್ರಾಮ ಪಂಚಾಯತಿಯಲ್ಲಿ ಮಹಿಳೆ ಅಧ್ಯಕ್ಷೆಯೊಬ್ಬರು ಅಧಿಕಾರಿಗಳು ಗೈರಾಗಿರುವುದನ್ನು ಖಂಡಿಸಿ ಸಭೆಯನ್ನೇ ರದ್ದು ಪಡೆಸುವ ಉತ್ತಮ ನಿರ್ಧಾರ ತೆಗೆದುಕೊಂಡಿರುವುದು ಮೆಚ್ಚುವಂತಹದ್ದಾಗಿದೆ ಎಂದರು.
ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಣ ಅಧಿಕಾರಿ ಎಂ.ಎಲ್. ವೈಶಾಲಿ ಪ್ರಸ್ತಾವಿಕವಾಗಿ ಮಾತನಾಡಿದರು. ಶಾಸಕ ಕುಮಾರ ಬಂಗಾರಪ್ಪ, ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್, ಸಂಪನ್ಮೂಲ ವ್ಯಕ್ತಿಗಳಾದ ಶಿವಾನಂದ ಕಳವೆ, ಪ್ರಮೋದ ಹೆಗಡೆ, ಸ್ವಪ್ನ, ಜಿ ಮಲ್ಲಿಕಾರ್ಜುನ ಸ್ವಾಮಿ, ಪ್ರಕಾಶ, ಮನು, ಮಂಜುನಾಥ, ತಾಪಂ ಇಒ ಕೆ.ಜಿ. ಕುಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post