ಕಲ್ಪ ಮೀಡಿಯಾ ಹೌಸ್ | ಸೊರಬ |
ಸರ್ಕಾರಿ ಶಾಲೆಗಳ ಬಗ್ಗೆ ಕಾಳಜಿ ವಹಿಸುವ ಜತೆಗೆ ಶಾಲಾಭಿವೃದ್ಧಿಗೆ ನಿಸ್ವಾರ್ಥ ಸೇವೆ ಸಲ್ಲಿಸುವ ಗುಣ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಯಶೀಲಗೌಡ ಹೇಳಿದರು.
ತಾಲೂಕಿನ ಅಂಕರವಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಾಜ ಸೇವಕ ರಾಜು ಹಿರಿಯಾವಲಿ ಅವರು ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಟಿವಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಬಹುದಿನದ ಕನಸು ಸರ್ಕಾರಿ ಶಾಲೆಗಳ ಅಭಿವೃದ್ಧಿಯಾಗುವುದಾಗಿದೆ. ತಾಲೂಕಿನ ಶಾಲೆಗಳ ಅಭಿವೃದ್ದಿಗೆ ಸರ್ಕಾರದ ಜೊತೆಗೆ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಅಡಿಯಲ್ಲಿ ದಾನಿಗಳು, ಪೋಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ಕೈ ಜೋಡಿಸಬೇಕು. ಈ ನಿಟ್ಟಿನಲ್ಲಿ ರಾಜು ಹಿರಿಯಾವಲಿ ಅವರು ಇತರರಿಗೆ ಮಾದರಿಯಾಗಿದ್ದಾರೆ. ಶಿಕ್ಷಣಕ್ಕೆ ಪೂರಕವಾದ ಹಾಗೂ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವುದು ಶೈಕ್ಷಣಿಕ ಕ್ಷೇತ್ರಕ್ಕೆ ನೀಡುವ ಸೇವೆಯ ಭಾಗವಾಗಿದೆ ಎಂದರು.
ಸಮಾಜ ಸೇವಕ ರಾಜು ಹಿರಿಯಾವಲಿ ಮಾತನಾಡಿ, ಪಠ್ಯದ ಜತೆ ಪಠ್ಯೇತರ ಚಟುವಟಿಕೆಗೆ ಉತ್ತೇಜನ ನೀಡುವ ದೃಷ್ಠಿಯಿಂದ ಸ್ಮಾರ್ಟ್ ಟಿವಿ ಅವಶ್ಯಕತೆ ಕುರಿತು ಶಿಕ್ಷಕರು ಚರ್ಚಿಸಿದ್ದರು. ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಜೊತೆ ಉತ್ತಮ ಸಂಸ್ಕಾರ ನೀಡಬೇಕಿದೆ. ನಮ್ಮ ಗ್ರಾಮ ನಮ್ಮ ಶಾಲೆ ಎಂಬ ಭಾವನೆ ಪ್ರತಿಯೊಬ್ಬರಲ್ಲಿ ಬರಬೇಕಿದೆ. ಆಗ ಮಾತ್ರ ಶಾಲೆ ಗುಣಮಟ್ಟಣ ಶಿಕ್ಷಣ ಕಲಿಕೆ ಹಾಗೂ ಅಭಿವೃದ್ದಿ ಹೊಂದಲು ಸಾಧ್ಯವಿದೆ. ದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಕಲಿತವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಜಗತ್ತಿಗೆ ಮಾನವೀಯತೆಯ ಸಂದೇಶ ಹಾಗೂ ಶಿಕ್ಷಣ ಮತ್ತು ಸಂಘಟನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನದ ನಿಮಿತ್ತವಾಗಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸ್ಟಾರ್ಟ್ ಟಿವಿ ನೀಡಲಾಗುತ್ತಿದೆ ಎಂದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ. ಕೆ.ಸಿ. ಶ್ರೀಕಾಂತ್, ಪುರಸಭೆ ಮಾಜಿ ಅಧ್ಯಕ್ಷ ಈರೇಶ್ ಮೇಸ್ತ್ರಿ, ಮಾತನಾಡಿದರು.
ಎಸ್‌ಡಿಎಂಸಿ ಅಧ್ಯಕ್ಷ ಕೆಂಪರಾಜು ಗೌಡ ಅಧ್ಯಕ್ಷತೆ ವಹಿಸಿದ್ದರು. ಇಸಿಓ ಅರುಣಕುಮಾರ, ಕುಬೇರಪ್ಪ, ಸಂಜೀ ವ ಕುಮಾರ್, ಬಿಆರ್‌ಸಿ ಮಂಜಪ್ಪ, ಸಿಆರ್‌ಪಿ ಎಂ.ಎನ್. ರಾಘವೇಂದ್ರ, ಮುಖ್ಯಶಿಕ್ಷಕಿ ಸುನಂದಾ, ಶಿಕ್ಷಕ ರಾಜಶೇಖರ, ನಾಗರಾಜ, ಗಣೇಶ, ಚಂದ್ರಪ್ಪ, ಕಾಳಪ್ಪ, ಮಂಜುಳಾ ಇತರರಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post