ಕಲ್ಪ ಮೀಡಿಯಾ ಹೌಸ್ | ಸೊರಬ |
ಪೈಲ್ವಾನರಾ… ಹಿಡಿರಿ ಹೋರಿ, ಹರಿ ಕೊಬ್ಬರಿ, ಹೊಡಿರಿ ಕೇಕೆ.. ಇದು ತಾಲೂಕಿನ ತಾವರೆಕೊಪ್ಪ ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬದ ಧಮಾಕಾ. ಗ್ರಾಮದಲ್ಲಿ ಹೋರಿ ಹಬ್ಬ ಆಚರಣಾ ಸಮಿತಿ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬ ಅಕ್ಷರಶಃ ರೋಚಕತೆ ತಂದಿತ್ತು. ನೆರೆದವರ ಕೇಕೆ, ಹಲಗೆ ಸದ್ದಿಗೆ ಹೋರಿಗಳ ಹೂಂಕರಿಸುವಿಕೆ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಗಿತ್ತು.
ಮಲೆನಾಡು ಹಾಗೂ ಬಯಲುಸೀಮೆ ಭಾಗದ ಹಬ್ಬವಾಗಿರುವ ಜನಪದ ಕ್ರೀಡೆ ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ ಸಡಗರ ಸಂಭ್ರದಿಂದ ಜರುಗಿತು. ದೀಪಾವಳಿಯ ನಂತರ ಗ್ರಾಮೀಣ ಭಾಗದಲ್ಲಿ ಹೋರಿ ಬೆದರಿಸುವ ಹಬ್ಬಕ್ಕೆ ಸಾಕಷ್ಟು ಮಹತ್ವವಿದೆ. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವ ದೃಶ್ಯ ನೋಡುಗರಲ್ಲಿ ಮೈನವಿರೇಳಿಸಿತು. ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಟೇಪು, ಬಲೂನುಗಳು ಮತ್ತು ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು.
Also read: ದರ್ಶನ್’ಗೆ ಮತ್ತೊಂದು ಸಂಕಷ್ಟ | ಜಾಮೀನು ಆದೇಶ ಸುಪ್ರೀಂನಲ್ಲಿ ಪ್ರಶ್ನಿಸಲು ಸರ್ಕಾರ ಗ್ರೀನ್ ಸಿಗ್ನಲ್

ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕು ಸೇರಿದಂತೆ ನೆರೆಯ ತಾಲೂಕು ಮತ್ತು ಜಿಲ್ಲೆಯ ವಿವಿಧ ಗ್ರಾಮಗಳಿಂದ ಭಾರಿ ಸಂಖ್ಯೆಯಲ್ಲಿ ಹೋರಿ ಪ್ರಿಯರು ಆಗಮಿಸಿದ್ದರು. ಹೋರಿಗಳು ಓಡಿ ಬರುತ್ತಿದ್ದಂತೆ ನೆರೆದವರಿಂದ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿಬಂದವು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲಪ್ರದರ್ಶನ ತೋರಿದ ಪೈಲ್ವಾನರನ್ನು ಸಮಿತಿ ವತಿಯಿಂದ ಗುರುತಿಸಲಾಯಿತು. ಅಖಾಡದ ಎರಡು ಬದಿಯಲ್ಲಿ ಬೇಲಿ ನಿರ್ಮಿಸಿ, ಒಂದೊAದೆ ಹೋರಿಗಳನ್ನು ಓಡಿಸುವ ಮೂಲಕ ಸಮಿತಿಯವರು ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post