ಕಲ್ಪ ಮೀಡಿಯಾ ಹೌಸ್ | ಸೊರಬ |
ಮಿಂಚಿನ ಓಟ ಓಡುತ್ತಿದ್ದ ಹೋರಿಗಳು, ಬಲ ಪ್ರದರ್ಶನ ತೋರಲು ಮುಂದಾಗಿದ್ದ ಪೈಲ್ವಾನರು, ಹೋರಿ ಪ್ರಿಯರ ಹರ್ಷೋದ್ಗಾರದ ನಡುವೆ ಪಟ್ಟಣದ ಹೊರವಲಯದ ಹಳೇಸೊರಬ ಗ್ರಾಮದಲ್ಲಿ ರಾಮೇಶ್ವರ ಯುವಕ ಸಂಘ ಹಾಗೂ ಗ್ರಾಮಾಭಿವೃದ್ಧಿ ಸಮಿತಿಯಿಂದ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬ ವಿಜೃಂಭಣೆಯಿಂದ #Bull Bullying Festival ಜರುಗಿತು.
ಹಬ್ಬಕ್ಕೆ ಚಾಲನೆ ನೀಡಿದ ಸಾಗರ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಜನಪದ ಕ್ರೀಡೆಯಾದ ಹೋರಿ ಹಬ್ಬ ಉಳಿಯಬೇಕು ಮತ್ತು ಬೆಳೆಯಬೇಕು. ರೈತ ಸಮುದಾಯದವರು ಸಂಭ್ರಮಿಸುವ ಹಬ್ಬವಾಗಿದೆ. ಯಾವುದೇ ಜಾತಿ ಧರ್ಮವಿಲ್ಲದೇ ಎಲ್ಲರೂ ಒಗ್ಗೂಡಿ ಹಬ್ಬ ಆಚರಿಸುತ್ತಾರೆ. ಹಬ್ಬದಲ್ಲಿ ಪಾಲ್ಗೊಳ್ಳುವವರು ಸುರಕ್ಷತೆಗೆ ಹೆಚ್ಚಿನ ಗಮನ ನೀಡಬೇಕು ಎಂದರು.

ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಟೇಪು, ಬಲೂನುಗಳು ಮತ್ತು ಒಣ ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು. ಕೊಬ್ಬರಿ ಹೋರಿ, ಆ್ಯಕ್ಷನ್ ಹೋರಿ, ಪೀಪಿ ಹೋರಿ ಹೀಗೆ ವಿವಿಧ ರೀತಿಯಲ್ಲಿ ಹೋರಿಗಳನ್ನು ವಿಂಗಡಿಸಿ ಓಡಿಸಲಾಯಿತು.

ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲಪ್ರದರ್ಶನ ತೋರಿದ ಪೈಲ್ವಾನರನ್ನು ಸಮಿತಿ ವತಿಯಿಂದ ಗುರುತಿಸಲಾಯಿತು. ಅಖಾಡದ ಎರಡು ಬದಿಯಲ್ಲಿ ಬೇಲಿ ನಿರ್ಮಿಸಿ, ಒಂದೊಂದೆ ಹೋರಿಗಳನ್ನು ಓಡಿಸುವ ಮೂಲಕ ಸಮಿತಿಯವರು ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post