ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮೂರನೇ ದಿನವಾದ ಶನಿವಾರ ನಡೆದ ಎಸ್’ಎಸ್’ಎಲ್’ಸಿ ಗಣಿತ ವಿಷಯ ಪರೀಕ್ಷೆಯು ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಿರುವುದು ಮಕ್ಕಳ ಮತ್ತು ಪೋಷಕರ ಗಟ್ಟಿತನವನ್ನು ಎತ್ತಿತೋರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ತಿಳಿಸಿದ್ದಾರೆ.
ಪರೀಕ್ಷೆಯ ನಂತರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆ ಕುರಿತ ಮಾಹಿತಿ ನೀಡಿದ ಅವರು, ಮೂರನೇ ದಿನವಾದ ಶನಿವಾರ ನಡೆದ ಗಣಿತ ವಿಷಯ ಪರೀಕ್ಷೆಗೆ ನೊಂದಾಯಿತ 8,08,650 ವಿದ್ಯಾರ್ಥಿಗಳ ಪೈಕಿ 7,91,987 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟಾರೆ ಶೇ. 97.93ರಷ್ಟು ಇಂದು ಹಾಜರಾತಿ ಇದೆ. 16,663 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ತಿಳಿಸಿದರು.
ಈ ಪರೀಕ್ಷೆಗೆ ಕಳೆದ 2018-19ನೇ ಸಾಲಿಗೆ 8,03,949 ವಿದ್ಯಾರ್ಥಿಗಳ ಪೈಕಿ 7,93,353 ವಿದ್ಯಾರ್ಥಿಗಳು ಹಾಜರಾಗಿದ್ದು, 10,596 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶೇ. 98.68 ಹಾಜರಾತಿ ಇತ್ತು ಎಂದು ಅವರು ಹೇಳಿದರು.
ಮೊದಲ ಬಾರಿಗೆ 7,44,901 ಶಾಲಾ ವಿದ್ಯಾರ್ಥಿಗಳು ಹಾಗೂ 20,923 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಂಟೈನ್‍ಮೆಂಟ್ ಪ್ರದೇಶಗಳ 2048 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 292 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ 6 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಸರ್ಕಾರಿ/ಖಾಸಗಿ ವಸತಿ ನಿಲಯಗಳಲ್ಲಿ ಇದ್ದು, 1442 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯಗಳಿಂದ 659 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 59 ವಿದ್ಯಾರ್ಥಿಗಳು ಗೈರು ಹಾಜರಿಯಾಗಿ -600 ಪರೀಕ್ಷೆ ಬರೆದಿದ್ದಾರೆ. 12,644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, 12,539 ವಿದ್ಯಾರ್ಥಿಗಳು ಹಾಜರಾಗಿದ್ದರೆ, 105 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಹೋಂ ಕ್ವಾರಂಟೈನಲ್ಲಿ 57 ವಿದ್ಯಾರ್ಥಿಗಳಿದ್ದಾರೆ. ಕೋವಿಡ್ ಪಾಸಿಟೀವ್ ಎಂದು 25 ವಿದ್ಯಾರ್ಥಿಗಳು ಗುರುತಿಸಲ್ಪಟ್ಟಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕೇಂದ್ರಕ್ಕೆ 3,212 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get In Touch With Us info@kalpa.news Whatsapp: 9481252093
Discussion about this post