ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ನೌಕರರ ಗೃಹ ನಿರ್ಮಾಣ ಸಹಕಾರ ಸಂಘ, ನೌಕರರ ಸೌಹಾರ್ಧ ಸಹಕಾರ ನಿ., ಇವುಗಳ ಸರ್ವ ಸದಸ್ಯರ ಮಹಾಸಭೆ, ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ಡಿ.25ರಂದು ಬೆಳಿಗ್ಗೆ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಇಲಾಖೆಗಳಲ್ಲಿ ಅಪೂರ್ವ ಸೇವೆ ಸಲ್ಲಿಸಿ ಸರ್ವೋತ್ತಮ ಸೇವಾ ಪುರಸ್ಕಾರಕ್ಕೆ ಬಾಜನರಾದ ನೌಕರರಿಗೆ ಅಭಿನಂದನೆ, ನೌಕರರ ಸಂಘದ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಹಾಗೂ ಕೊರೋನ ನಿಯಂತ್ರಣ ಕಾರ್ಯದಲ್ಲಿ ಅವಿರತವಾಗಿ ಶ್ರಮಿಸಿದ ಆರೋಗ್ಯ ಇಲಾಖೆಯ ನೌಕರರು ಹಾಗೂ ಕೊರೋನ ವಾರಿಯರ್ಸ್‌ಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ಕೇಂದ್ರ ನೌಕರರ ಸಂಘದ ಪದಾಧಿಕಾರಿಗಳಿಗೆ ಅಭಿನಂದಿಸಲಾಗುವುದು ಎಂದರು.ಈ ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಉದ್ಘಾಟಿಸುವರು. ಸಂಸದ ಬಿ.ವೈ. ರಾಘವೇಂದ್ರ ಅವರು ಕ್ಯಾಲೆಂಡರ್ ಬಿಡುಗಡೆಗೊಳಿಸುವರು. ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಅವರು ಪಾಲ್ಗೊಳ್ಳಲಿದ್ದಾರೆ.
ನಿನ್ನೆ ನಡೆದ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಚಿಂತನಶೀಲ ಹೊಸ ಪ್ರತಿನಿಧಿಗಳು ಆಯ್ಕೆಯಾಗಿದ್ದು, ಅವರೆಲ್ಲರನ್ನು ಅಭಿನಂದಿಸುವುದಾಗಿ ತಿಳಿಸಿದ ಅವರು ಇತ್ತೀಚೆಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಿಂದ ಈವರೆಗೆ 1200ಕ್ಕೂ ಹೆಚ್ಚಿನ ನೌಕರರಿಗೆ ಅತ್ಯಂತ ಕಡಿಮೆ ದರದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಅಲ್ಲದೆ ನೌಕರರ ಬೇಡಿಕೆಗೆ ತಕ್ಕಂತೆ ನಗರಕ್ಕೆ ಸಮೀಪದಲ್ಲಿ ಇನ್ನಷ್ಟು ಬಡಾವಣೆಗಳನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಅಲ್ಲದೇ ಈಗಾಗಲೇ ವಿನ್ಯಾಸಗೊಳಿಸಿರುವ ಕೃಷಿ ವಿಶ್ವವಿದ್ಯಾಲಯದ ಎದುರಿನ ಬಡಾವಣೆಯಲ್ಲಿ 3 ಎಕರೆ ವಿಸ್ತೀರ್ಣದಲ್ಲಿ 100 ಮನೆಗಳಿರುವ ಅಪಾರ್ಟ್‌ಮೆಂಟ್‌ನ್ನು ನಿರ್ಮಿಸಿ, ನಿವೇಶನದ ಬೆಲೆಯಲ್ಲಿ ಮನೆಯನ್ನು ಒದಗಿಸಲು ಉದ್ದೇಶಿಸಲಾಗಿದ್ದು, ಡಿ. 25ರಂದೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು.
ಕೇಂದ್ರ ಸಂಘದ ಜಗದೀಶ್ ಗೌಡಪ್ಪ ಪಾಟೀಲ, ಆರ್. ಶ್ರೀನಿವಾಸ್, ವಿ.ವಿ. ಶಿವರುದ್ರಯ್ಯ, ಬೆಂಗಳೂರು ವಿಭಾಗೀಯ ಉಪಾಧ್ಯಕ್ಷ ಆರ್. ಮೋಹನ್‌ಕುಮಾರ್, ಕಾರ್ಯದರ್ಶಿ ಐ.ಪಿ. ಶಾಂತರಾಜು ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post