ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕ್ವಾರೆಂಟೈನ್ ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಅವರು ಸೂಚನೆಗಳನ್ನು ನೀಡಿದರು.
ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕ್ವಾರೆಂಟೈನ್ ಮಾರ್ಗಸೂಚಿ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಹೋಂ ಕ್ವಾರೆಂಟೈನ್ ಉಲ್ಲಂಘನೆಯ ಪ್ರಥಮ ಪ್ರಕರಣದಲ್ಲಿಯೇ ಎಫ್’ಐಆರ್ ದಾಖಲಿಸಬೇಕು. ಮೂರನೆಯ ಬಾರಿ ಉಲ್ಲಂಘಿಸಿದರೆ ಐಪಿಸಿ 107ರ ಅಡಿ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಅವರು ಎಲ್ಲಾ ತಹಶೀಲ್ದಾರ್’ಗಳಿಗೆ ಸೂಚನೆ ನೀಡಿದರು.
ಮಾಸ್ಕ್ ಧರಿಸುವುದು, ಭೌತಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಭೌತಿಕ ಅಂತರವನ್ನು ಕಾಯ್ದುಕೊಳ್ಳದೇ ವ್ಯಾಪಾರ ವಹಿವಾಟು ನಡೆಸುತ್ತಿದ್ದರೆ ಅಂತಹ ಅಂಗಡಿಯವರಿಗೆ ದಂಡ ವಿಧಿಸಬೇಕು. ಮಾಸ್ಕ್ ಧರಿಸುವುದರ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲೂ ಅರಿವು ಮೂಡಿಸಿ, ಉಲ್ಲಂಘಿಸಿದರೆ ದಂಡ ವಿಧಿಸುವ ಪ್ರಕ್ರಿಯೆ ಆರಂಭಿಸಬೇಕು. ಜನರು ಸೇರುವಂತಹ ಪ್ರದೇಶಗಳಲ್ಲಿ ಧ್ವನಿವರ್ಧಕಗಳ ಮೂಲಕ ನಿರಂತರವಾಗಿ ಅರಿವು ಮೂಡಿಸುವ ಕಾರ್ಯ ನಡೆಸಬೇಕು ಎಂದು ಅವರು ಹೇಳಿದರು.
ಸೌಲಭ್ಯ ಹೆಚ್ಚಳ
ಗಾಜನೂರಿನಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಈಗಾಗಲೇ ರೋಗ ಲಕ್ಷಣಗಳಿಲ್ಲದ ಕೊರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ. ಇಲ್ಲಿ ಇನ್ನೂ ಹೆಚ್ಚುವರಿಯಾಗಿ 60 ಹಾಸಿಗೆ ವ್ಯವಸ್ಥೆಯನ್ನು ತಕ್ಷಣ ಕಲ್ಪಿಸಬೇಕು. ಮೆಗ್ಗಾನ್’ನಲ್ಲಿ ಸಹ ಹಾಸಿಗೆ ಸಾಮಥ್ರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ರೋಗ ಲಕ್ಷಣವಿರುವ ವ್ಯಕ್ತಿಗಳ ಸ್ಯಾಂಪಲ್ ಸಂಗ್ರಹಿಸಲು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ತಾಲೂಕು ಮಟ್ಟದ ಸಮಿತಿ
ಜಿಲ್ಲಾ ಮಟ್ಟದ ಸರ್ವೇಕ್ಷಣಾ ಸಮಿತಿ ರೀತಿಯಲ್ಲಿ ತಾಲೂಕು ಮಟ್ಟದಲ್ಲಿ ಸಹ ತಹಶೀಲ್ದಾರ್ ನೇತೃತ್ವದಲ್ಲಿ ಸಮಿತಿ ರಚಿಸಬೇಕು. ಇದೇ ರೀತಿ ಗ್ರಾಮ, ವಾರ್ಡ್ ಮತ್ತು ಬೂತ್ ಮಟ್ಟದಲ್ಲಿ ಕಾರ್ಯಪಡೆಯನ್ನು ತಕ್ಷಣ ರಚಿಸಿ ವರದಿಯನ್ನು ಸಲ್ಲಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಮೆಗ್ಗಾನ್ ನಿರ್ದೇಶಕ ಡಾ.ಸಿದ್ದಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093
Discussion about this post