ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಎಸ್.ಪಿ. ಬಾಲಸುಬ್ರಹ್ಮಣ್ಯಂ… ಈ ಹೆಸರು ಕೇಳದ ಯಾವುದೇ ಭಾರತೀಯ ಬಹುತೇಕ ಇರಲಿಕ್ಕಿಲ್ಲ. ಹೌದು… 16ಕ್ಕೂ ಅಧಿಕ ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚಿನ ಗೀತೆಗಳನ್ನು ಹಾಡಿರುವ ಅವರ ಸಾಧನೆಯೇ ಅಂತಹುದ್ದು.
ಆಂಧ್ರಪ್ರದೇಶದ ಚಿತ್ತೂರಿನ ಕೊನೇಟಮ್ಮಪೇಟಾ ಎಂಬಲ್ಲಿನ ಸಂಪ್ರದಾಯಸ್ಥ ಕುಟುಂಬವೊಂದರಲ್ಲಿ 1946ರ ಜೂನ್ 4ರಂದು ಜನಿಸಿದ ಎಸ್’ಪಿಬಿ ವ್ಯವಸ್ಥಿತವಾಗಿ ಸಂಗೀತ ಕಲಿಯಲಿಲ್ಲ. ಹರಿಕಥೆ ಹೇಳುತ್ತಿದ್ದ ತಂದೆ ಎಸ್.ಪಿ. ಸಾಂಬಮೂರ್ತಿಯವರೇ ಅವರಿಗೆ ಪ್ರೇರಣೆ. ಹಾಡುವುದನ್ನು, ಹಾರ್ಮೋನಿಯಂ, ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು. ಮುಂದೆ ಮೇರು ಪ್ರಸಿದ್ಧಿ ಪಡೆದ ನಂತರದಲ್ಲಿ ವಿಧೇಯ ವಿದ್ಯಾರ್ಥಿಯಂತೆ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡಿದರು.
ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ ಮಾಡಿರುವ ಎಸ್’ಪಿಬಿ, ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡಿದ್ದಾರೆ.
1966ರ ವರ್ಷದಲ್ಲಿ ಬಾಲು ಅವರು, ಘಂಟಸಾಲಾ ಮತ್ತು ಎಸ್.ಪಿ. ಕೋದಂಡಪಾಣಿ ತೀರ್ಪುಗಾರರಾಗಿದ್ದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದರು. ಇಬ್ಬರಿಂದಲೂ ಅವರಿಗೆ ಮೆಚ್ಚುಗೆಯ ಸುರಿಮಳೆಯಾಯಿತು. ಕೋದಂಡಪಾಣಿಯವರು ತಮ್ಮ ತೆಲುಗು ಚಿತ್ರ ’ಶ್ರೀ ಶ್ರೀಶ್ರೀ ಮರ್ಯಾದಾ ರಾಮಣ್ಣ’ದಲ್ಲಿ ಹಾಡಲು ಬಾಲೂಗೆ ಅವಕಾಶ ನೀಡಿದರು. ಬಾಲು ಹೇಳುತ್ತಾರೆ ’ನಾನು ಘಂಟಸಾಲ ಅವರ ಏಕಲವ್ಯ ಶಿಷ್ಯ’.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post